
ಬೆಂಗಳೂರು: ರಾಜ್ಯಮಟ್ಟದ ಸ್ವಾತಂತ್ರ್ಯ ದಿನಾಚರಣೆಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಗುರುವಾರ ಸೂಚನೆ ನೀಡಿದರು.
ಅಧಿಕಾರಿಗಳೊಂದಿಗೆ ಗುರುವಾರ ಪೂರ್ವಭಾವಿ ಸಭೆ ನಡೆಸಿದ ಅವರು, ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಲು ಆಯಾ ಇಲಾಖೆಗಳಿಗೆ ನೀಡಿರುವ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕು ಎಂದು ಹೇಳಿದರು.
ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಸನಗಳ ವ್ಯವಸ್ಥೆ, ಯಾವ ದ್ವಾರಗಳಲ್ಲಿ ಯಾರಿಗೆ ಪ್ರವೇಶ, ಪಾರ್ಕಿಂಗ್ ವ್ಯವಸ್ಥೆ, ಮಾರ್ಗ ಬದಲಾವಣೆ ಸೇರಿದಂತೆ ಇನ್ನಿತರೆ ವ್ಯವಸ್ಥೆಗಳಲ್ಲಿ ಗೊಂದಲ ಉಂಟಾಗದಂತೆ ನೋಡಿಕೊಳ್ಳಬೇಕು. ಮುನ್ನೆಚ್ಚರಿಕೆ ಹಾಗೂ ಭದ್ರತೆಯ ಹಿತದೃಷ್ಟಿಯಿಂದ ಮೈದಾನದ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ ಮಾಡಿಕೊಳ್ಳಬೇಕು. ನಾಡಗೀತೆ, ರೈತ ಗೀತೆ ಹಾಡಲು ತಂಡಗಳನ್ನು ಆಯ್ಕೆ ಮಾಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಬಿಎಂಪಿ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಡಾ. ಆರ್.ಎಲ್ ದೀಪಕ್, ಕರೀಗೌಡ, ಸ್ನೇಹಲ್, ವಿನೋತ್ ಪ್ರಿಯಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್, ಲೋಕೋಪಯೋಗಿ, ಪೊಲೀಸ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Advertisement