
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಸತತ 7 ಗಂಟೆಗಳ ವಿಚಾರಣೆ ಬಳಿಕ ಶುಕ್ರವಾರ ಬಂಧಿಸಿದೆ.
ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕರಾದ ನಾಗೇಂದ್ರ ಅವರ ನಿವಾಸಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ಮಾಡಿದ್ದರು. ದಾಳಿ ವೇಳೆ ಸಿಕ್ಕ ಕೆಲ ಮಹತ್ವದ ದಾಖಲೆಗಳ ಬಗ್ಗೆ ಮಾಹಿತಿ ಪಡೆಯಲು ಇಡಿ, ಇಂದು ಬೆಳಗ್ಗೆ ನಾಗೇಂದ್ರನನ್ನು ವಶಕ್ಕೆ ಪಡೆದುಕೊಂಡಿತ್ತು. ಸಂಜೆವರೆಗೂ ತೀವ್ರ ವಿಚಾರಣೆಗೊಳಪಡಿಸಿದ ನಂತರ ಇದೀಗ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಾಧ್ಯತೆ ಇದೆ.
ನಾಗೇಂದ್ರ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಮುನ್ನ ವೈದ್ಯಕೀಯ ತಪಾಸಣೆಗೆ ಒಳಪಡಿಸಬೇಕಿದೆ. ಹೀಗಾಗಿ ಇಡಿ ಅಧಿಕಾರಿಗಳು ಈಗಾಗಲೇ ನಾಗೇಂದ್ರ ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿಂದ ನೇರವಾಗಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.
ಕೋರ್ಟ್ ಸಮಯ ಮುಗಿದಿದ್ದರಿಂದ ಇಡಿ ಅಧಿಕಾರಿಗಳು ಆರೋಪಿ ಶಾಸಕರನ್ನು ಕೋರಮಂಗಲದಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಕರೆದುಕೊಂಡು ಹೋಗಲಿದ್ದು, ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ಇಡಿ ವಶಕ್ಕೆ ಕೇಳುವ ಸಾಧ್ಯತೆಗಳಿವೆ.
ವಾಲ್ಮೀಕಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದಿಂದ ಬೇಸತ್ತು ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಗರಣ ಬೆಳಕಿಗೆ ಬಂದ ಬೆನ್ನಲ್ಲೇ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪ್ರಕರಣದ ತನಿಖಾಗಿ ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ. ಎಸ್ಐಟಿ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ಅತ್ತ ಸಿಬಿಐ ಕೂಡ ಪ್ರಕರಣದ ತನಿಖೆಯನ್ನು ನಡೆಸುತ್ತಿದೆ. ಇದೀಗ ಜಾರಿ ನಿರ್ದೇಶನಾಲಯ ಏಕಾಏಕಿ ಮಾಜಿ ಸಚಿವ ಬಿ ನಾಗೇಂದ್ರ ಮತ್ತು ಬಸನಗೌಡ ದದ್ದಲ್ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿದ್ದು, ಅವರನ್ನು ಬಂಧಿಸಿದೆ.
Advertisement