
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಇಂದು ವಿಧಾನಸೌಧ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷಗಳ ಸಭೆ ನಡೆಯಿತು.
ಜಲ ಸಂಪನ್ಮೂಲ ಸಚಿವರು ಆಗಿರುವ ಡಿಸಿಎಂ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಆರ್, ಅಶೋಕ್, ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ಸುಪ್ರೀಂ ಕೋರ್ಟ್ ಹಿರಿಯ ವಕೀಲ ಮೋಹನ್ ಕಾತರಕಿ, ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.
ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಕಾವೇರಿ ನದಿ ತೀರದ ಜಲಾಶಯಗಳಲ್ಲಿ ಶೇ. 63 ರಷ್ಟು ಮಾತ್ರ ನೀರು ಭರ್ತಿಯಾಗಿದೆ. ಕಬಿನಿ ಜಲಾಶಯ ಭರ್ತಿಯಾಗಿದ್ದು, ಶುಕ್ರವಾರ 20 ಸಾವಿರ, ಶನಿವಾರ 19 ಸಾವಿರ ಹಾಗೂ ಇಂದು 13 ಸಾವಿರ ಕ್ಯೂಸೆಕ್ಸ್ ನೀರು ತಮಿಳುನಾಡಿಗೆ ಹರಿದು ಹೋಗಿದೆ. ಜಲಾಶಯದಲ್ಲಿ ಶೇಖರಿಸಿಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಸುರಕ್ಷತೆಗಾಗಿ ಸ್ವಲ್ಪ ನೀರನ್ನು ಬಿಡಲಾಗಿದೆ ಎಂದರು.
ವಕೀಲರ ತಂಡದ ಸಲಹೆ ಪ್ರಕಾರ ಹೆಚ್ಚು ಮಳೆ ಬಿದ್ದರೆ ಮಾತ್ರ ಮಳೆ ಪ್ರಮಾಣಕ್ಕೆ ತಕ್ಕಂತೆ, ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶದ ಪ್ರಕಾರ ಪೂರ್ತಿ ನೀರು ಹರಿಸಬಹುದು. ಇಲ್ಲದಿದ್ದರೆ ಕೇವಲ 8 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕಾಗುತ್ತದೆ ಇದರ ಜೊತೆಗೆ ಮೇಲ್ಮನವಿ ಸಲ್ಲಿಸೋಣ. ಹೀಗಾಗಿ ನಾವು ಮೊಂಡಾಟ ಮಾಡುತ್ತಿದ್ದೇವೆ ಎಂದು ಕಾವೇರಿ ನೀರು ನಿರ್ವಹಣಾ ಸಮಿತಿಗೆ ಅನ್ನಿಸಬಾರದು ಎನ್ನುವ ಸಲಹೆ ಬಂದಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
Advertisement