
ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜಗಲಬೆಟ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಅತಿ ಹೆಚ್ಚು ಅಂದರೆ 250 ಮಿಮೀ ಮಳೆಯಾಗಿದೆ ಎಂದು ಸೋಮವಾರ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ತಿಳಿಸಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ ಮತ್ತು ನಿರಂತರ ಮಳೆಯಾಗುತ್ತಿದ್ದು, IMD ಜುಲೈ 16ರ ವರೆಗೆ ರಾಜ್ಯದ ದಕ್ಷಿಣ ಒಳಭಾಗ ಮತ್ತು ಕರಾವಳಿ ಭಾಗಗಳಿಗೆ ತನ್ನ ರೆಡ್ ಅಲರ್ಟ್ ಅನ್ನು ಮುಂದುವರಿಸಿದೆ.
ಏತನ್ಮಧ್ಯೆ, ಜುಲೈ 15 ರಂದು ಉತ್ತರ ಕನ್ನಡ ಮತ್ತು ಕೊಡಗಿನಲ್ಲಿ ಭಾರೀ ಮಳೆಯಾಗಿದ್ದು, ಜನಜೀವ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ಕದಂಬ ನೌಕಾನೆಲೆಯಲ್ಲಿ ಬ್ಯಾರಿಕೇಡ್ ನಿರ್ಮಾಣದಿಂದಾಗಿ ಸುತ್ತಮುತ್ತಲಿನ ಗ್ರಾಮಗಳು ಜಲಾವೃತಗೊಂಡಿವೆ.
ಇಲ್ಲಿನ ಆರಗ, ಚೆಂಡಿಯಾ, ಇಡೂರು, ತೋಡೂರು ಸೇರಿದಂತೆ ಹಲವು ಗ್ರಾಮಗಳು ಮುಳುಗಡೆಯಾಗಿವೆ. ಸುಮಾರು 10 ಹೆಕ್ಟೇರ್ ಕೃಷಿ ಭೂಮಿ ಕೂಡ ಜಲಾವೃತಗೊಂಡಿದ್ದು, ಬೆಳೆದು ನಿಂತ ಬೆಳೆ ಹಾನಿಯಾಗಿದೆ.
ಕೊಡಗು ಜಿಲ್ಲೆಯ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಕಾವೇರಿ ನದಿ ಅಪಾಯದ ಮಟ್ಟ ಮೀರಿದೆ. ಮಡಿಕೇರಿ-ಭಾಗಮಂಡಲ ರಸ್ತೆಯಲ್ಲಿ ಮರಗಳು ಉರುಳಿ ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ(ಕೆಎಸ್‌ಎನ್‌ಡಿಎಂಸಿ)ದ ಪ್ರಕಾರ, ತುಮಕೂರು ಮತ್ತು ಹೊನ್ನಾವರವನ್ನು ಸಂಪರ್ಕಿಸುವ ಹೊನ್ನಾವರ ಹೆದ್ದಾರಿಯಲ್ಲಿ ಗುಡ್ಡ ಕುಸಿದಿದೆ. ಪರಿಣಾಮ 100ಕ್ಕೂ ಹೆಚ್ಚು ವಾಹನಗಳು ಹೆದ್ದಾರಿಯಲ್ಲಿ ಸಿಲುಕಿಕೊಂಡಿವೆ.
ಇನ್ನು ರಾಜ್ಯದ ಕರಾವಳಿ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಜು.19ರವರೆಗೆ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೆಲವೆಡೆ ನಾಳೆ ರೆಡ್, ಆರೆಂಜ್, ಹೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕದ ಆರು ಜಿಲ್ಲೆಗಳಲ್ಲಿ ನಾಳೆ (ಜುಲೈ 16) ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ಹಾಸನ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
Advertisement