
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಸರ್ಕಾರ ಅಗತ್ಯಬಿದ್ದರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದೆ.
ತಮಿಳುನಾಡು ವಿಧಾನಸಭೆಯಲ್ಲಿ ನಿನ್ನೆ ನಡೆದ ಶಾಸಕಾಂಗ ಪಕ್ಷದ ನಾಯಕರ ಸಭೆಯಲ್ಲಿ ಕರ್ನಾಟಕದಿಂದ ರಾಜ್ಯಕ್ಕೆ ಕಾವೇರಿ ನೀರು ಹರಿಸುವಂತೆ ಆದೇಶ ಹೊರಡಿಸಲು ಅಗತ್ಯಬಿದ್ದರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಲಾಗಿದೆ.
ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ತಮ್ಮ ರಾಜ್ಯದ ರೈತರ ಹಿತಾಸಕ್ತಿಗಳನ್ನು ರಕ್ಷಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
ತನ್ನ ಮುಂದಿನ ನಡೆ ಕುರಿತು ಚರ್ಚಿಸಲು ಕರ್ನಾಟಕ ಸರ್ಕಾರ ಸರ್ವಪಕ್ಷ ಸಭೆ ಕರೆದಿರುವ ದಿನದಂದೇ ಜಲಸಂಪನ್ಮೂಲ ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕದಿಂದ ಹಂಚಿಕೆಯಾಗುತ್ತಿರುವ ಕಾವೇರಿ ನದಿ ನೀರಿನ ಬಗ್ಗೆ ವಿಧಾನಸಭೆಯಲ್ಲಿ ಕಲಾಪದಲ್ಲಿ ಮಾಹಿತಿ ನೀಡಿದರು.
ರಾಜ್ಯದ ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟುಗಳಿಂದ ಪ್ರತಿದಿನ ತಮಿಳುನಾಡಿಗೆ 1.5 ಟಿಎಂಸಿ ಅಡಿ ನೀರು ಹರಿದು ಬರುತ್ತಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಪ್ರಕಾರ, ತಿಂಗಳಾಂತ್ಯದೊಳಗೆ ಬಿಳಿಗುಂಡ್ಲುವಿಗೆ 40 ಟಿಎಂಸಿ ಅಡಿ ನೀರು ಹೋಗಬೇಕಾಗಿದ್ದು, ಇದುವರೆಗೆ 6 ಟಿಎಂಸಿ ಅಡಿ ನೀರು ನೆರೆಯ ರಾಜ್ಯಕ್ಕೆ ತಲುಪಿದೆ ಎಂದರು.
Advertisement