ಅಂಕೋಲಾ: NH 66ರಲ್ಲಿ ಗುಡ್ಡ ಕುಸಿತಕ್ಕೆ NHAI 'ಅವೈಜ್ಞಾನಿಕ' ಕಾಮಕಾರಿ ಕಾರಣ!

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಮ್ಮ ಮಾತನ್ನು ಕೇಳುವುದೇ ಇಲ್ಲ. ನಾವು ಏನೇ ಹೇಳಿದರೂ, ನಮ್ಮ ಕೇಂದ್ರ ಕಚೇರಿ ದೆಹಲಿಯಲ್ಲಿದೆ. ಅಲ್ಲಿಗೆ ಪತ್ರ ಬರೆಯುತ್ತೇವೆ ಎಂದಷ್ಟೇ ಹೇಳಿ ಕೈ ತೊಳೆದುಕೊಳ್ಳುತ್ತಾರೆ.
ಸಚಿವ ಕೃಷ್ಣ ಬೈರೇಗೌಡ
ಸಚಿವ ಕೃಷ್ಣ ಬೈರೇಗೌಡ
Updated on

ಬೆಂಗಳೂರು: ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಸಂಭವಿಸಿದ ಗುಡ್ಡ ಕುಸಿತಕ್ಕೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಡೆಸಿರುವ ಅವೈಜ್ಞಾನಿಕ ಕಾಮಗಾರಿ ಕಾರಣ ಎಂದು ರಾಜ್ಯ ಸರ್ಕಾರ ಆರೋಪಿಸಿದೆ.

ವಿಧಾನಸಭಾ ಅಧಿವೇಶನದಲ್ಲಿ ಅಂಕೋಲ ಅಪಘಾತದ ಬಗ್ಗೆ ಮಾಹಿತಿ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, ನದಿ ಹಾಗೂ ಗುಡ್ಡದ ನಡುವೆ ರಾಷ್ಟ್ರೀಯ ಹೆದ್ದಾರಿ ಇದ್ದು, ರಸ್ತೆ ಬದಿಯಲ್ಲಿ ಅನಧಿಕೃತವಾಗಿ ಕೆಲವರು ಸಣ್ಣ ಮಟ್ಟದ ಕ್ಯಾಂಟೀನ್‌ಗಳನ್ನು ನಿರ್ಮಿಸಿಕೊಂಡಿದ್ದಾರೆ. ಇಲ್ಲಿ ಅಡುಗೆ ಅನಿಲ ಹೊತ್ತೊಯ್ಯುವ ಟ್ಯಾಂಕರ್‌ ಚಾಲಕರು ಟೀ ಕುಡಿಯಲು ವಾಹನ ನಿಲ್ಲಿಸಿದ್ದಾಗ ಅವಘಡ ಸಂಭವಿಸಿದೆ ಎಂದು ಹೇಳಿದರು.

ಗುಡ್ಡ ಕುಸಿದು ಟ್ಯಾಂಕರ್‌ ಲಾರಿ ಹಾಗೂ ಕ್ಯಾಂಟೀನ್‌ ನದಿಗೆ ಕೊಚ್ಚಿ ಹೋಗಿದೆ. ಪರಿಣಾಮ ಕ್ಯಾಂಟೀನ್‌ ನಡೆಸುತ್ತಿದ್ದ ಒಂದೇ ಕುಟುಂಬದ ನಾಲ್ವರು, ಟ್ಯಾಂಕರ್‌ ಚಾಲಕರು ಸೇರಿ ಒಟ್ಟು 7 ಜನ ಮೃತಪಟ್ಟಿರುವ ಶಂಕೆ ಇದೆ. ಮೃತರಾದವರನ್ನು ಲಕ್ಷ್ಮಣ ನಾಯ್ಕ (47), ಶಾಂತಿ ನಾಯ್ಕ (36), ರೋಶನ್ (11), ಅವಾಂತಿಕಾ (6), ಜಗನ್ನಾಥ (55) ಎಂದು ಗುರುತಿಸಲಾಗಿದೆ. ಅಲ್ಲದೆ, ರಕ್ಷಣಾ ಕಾರ್ಯಾಚರಣೆಯ ವೇಳೆ ಶಾಂತಿ ನಾಯ್ಕ ಎಂಬ ಮಹಿಳೆಯ ಮೃತ ದೇಹವನ್ನು ಪತ್ತೆ ಮಾಡಲಾಗಿದೆ.

ರಕ್ಷಣಾ ಕಾರ್ಯಾಚರಣೆ ಮುಂದುವರೆಯುತ್ತಿದ್ದು, ಅಗ್ನಿಶಾಮಕ ದಳ ಹಾಗೂ ಎನ್‌ಡಿಆರ್‌ಎಫ್‌ ತುಕಡಿಯನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಅಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವರೂ ಸ್ಥಳಕ್ಕೆ ಧಾವಿಸಿದ್ದಾರೆ. ಭಾರತೀಯ ಪೆಟ್ರೋಲಿಯಂ ಲಿಮಿಟೆಡ್‌ನ ಅಧಿಕಾರಿಗಳೂ ಸ್ಥಳದಲ್ಲಿ ಇದ್ದು, ನೀರಿನಲ್ಲಿ ಕೊಚ್ಚಿಹೋಗಿರುವ ಸಿಲಿಂಡರ್‌ ಅನ್ನು ಸುರಕ್ಷಿತವಾಗಿ ಹೊರತೆಗೆಯುವ ಕೆಲಸವೂ ಪ್ರಗತಿಯಲ್ಲಿದೆ.

ಸಚಿವ ಕೃಷ್ಣ ಬೈರೇಗೌಡ
ಅಂಕೋಲಾ ಗುಡ್ಡ ಕುಸಿತ ಪ್ರಕರಣ: ಮುಂದುವರೆದ ರಕ್ಷಣಾ ಕಾರ್ಯಾಚರಣೆ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ
ಸಚಿವ ಕೃಷ್ಣ ಬೈರೇಗೌಡ
ಅಂಕೋಲಾ ಗುಡ್ಡ ಕುಸಿತ ಪ್ರಕರಣ: ಮುಂದುವರೆದ ರಕ್ಷಣಾ ಕಾರ್ಯಾಚರಣೆ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಅಪಘಾತದಲ್ಲಿ ಮೃತಪಟ್ಟವರಿಗೆ ಕೂಡಲೇ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಇನ್ನೂ ವಾಹನ ಚಾಲಕರು ನಮ್ಮ ರಾಜ್ಯದವರಲ್ಲ. ಆದರೂ, ಅವರು ಕೆಲಸದ ಮೇಲೆ ನಮ್ಮ ರಾಜ್ಯಕ್ಕೆ ಬಂದಿದ್ದು, ಈ ವೇಳೆ ದುರಾದೃಷ್ಟವಶಾತ್‌ ಅಪಘಾತ ಸಂಭವಿಸಿದೆ. ಹೀಗಾಗಿ ಅವರಿಗೂ ಪರಿಹಾರ ನೀಡುವ ಬಗ್ಗೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ದುರಂತಕ್ಕೆ ಕಾರಣ ಕುರಿತು ಮಾತನಾಡಿದ ಅವರು, ಕಳೆದ ವರ್ಷ ಅತಿವೃಷ್ಟಿಯ ಸಂದರ್ಭದಲ್ಲೇ ನಾನು ಈ ಭಾಗಕ್ಕೆ ತೆರಳಿದ್ದೆ. ರಾಷ್ಟ್ರೀಯ ಹೆದ್ದಾರಿಗಳು ವೈಜ್ಞಾನಿಕವಾಗಿ ನಿರ್ಮಾಣವಾಗಿಲ್ಲ. ಅಲ್ಲದೆ, ಕೈಗಾ ಪರಮಾಣು ವಿದ್ಯುತ್‌ ಸ್ಥಾವರದ ಕಾಲುವೆಗಳೂ ಕ್ರಮಬದ್ಧವಾಗಿಲ್ಲ. ಹೀಗಾಗಿ ಭೂ ಕುಸಿತ ಸಂಭವಿಸುವ ಬಗ್ಗೆ ಆಗಲೇ ಎಚ್ಚರಿಕೆ ನೀಡಿದ್ದೆ. ಆದರೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಮ್ಮ ಮಾತಿಗೆ ಕಿವಿಕೊಡುವ ಗೋಜಿಗೇ ಹೋಗಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಮ್ಮ ಮಾತನ್ನು ಕೇಳುವುದೇ ಇಲ್ಲ. ನಾವು ಏನೇ ಹೇಳಿದರೂ, ನಮ್ಮ ಕೇಂದ್ರ ಕಚೇರಿ ದೆಹಲಿಯಲ್ಲಿದೆ. ಅಲ್ಲಿಗೆ ಪತ್ರ ಬರೆಯುತ್ತೇವೆ ಎಂದಷ್ಟೇ ಹೇಳಿ ಕೈ ತೊಳೆದುಕೊಳ್ಳುತ್ತಾರೆ. ಆದರೆ, ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮುಂದಿನ ದಿನಗಳಲ್ಲಿ ಇಂತಹ ಅಪಘಾತಗಳು ನಡೆಯದಂತೆ ತಡೆಯುವ ನಿಟ್ಟಿನಲ್ಲಿ ಎಲ್ಲಾ ಸೂಕ್ತ ಕ್ರಮಗಳನ್ನೂ ತೆಗೆದುಕೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com