ಮುಡಾದಲ್ಲಿ ನಡೆದಿರುವ ಪರ್ಯಾಯ ಸೈಟ್ ಹಂಚಿಕೆ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಎನ್.ಆರ್ ರಮೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದಾಖಲೆ ಸಮೇತ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಹಣಕಾಸು ಸಚಿವ, ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿಯಾಗಿದ್ದ ವೇಳೆ ಭೂಹಗರಣ ಮತ್ತು ಮುಡಾ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ ಎನ್.ಆರ್. ರಮೇಶ್ ಅವರು 400ಕ್ಕೂ ಹೆಚ್ಚು ಪುಟಗಳ ದಾಖಲೆಗಳ ಸಮೇತ ದೂರು ನೀಡಿ, ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಮುಡಾ ಸೈಟ್ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧವೇ ಆರೋಪಗಳು ಕೇಳಿ ಬಂದಿದ್ದು, ವಿಪಕ್ಷ ಬಿಜೆಪಿಗೆ ಪ್ರಮುಖ ಅಸ್ತ್ರವಾಗಿ ಪರಿಣಮಿಸಿದೆ.
ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಗಳ ಸಂಬಂಧ ಬಿಜೆಪಿ ರಾಜ್ಯ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸುತ್ತಿದ್ದು ಸಿಎಂ ಸಿದ್ದರಾಮಯ್ಯ ರಾಜಿನಾಮೆಗೂ ಆಗ್ರಹಿಸಿದ್ದವು. ಈ ಆರೋಪಗಳಿಗೆ ತಿರುಗೇಟು ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಆಡಳಿತ ಸಮಯದಲ್ಲಿ ರಾಜ್ಯದಲ್ಲಿ 21 ಹಗರಣಗಳು ನಡೆದಿವೆ ಎಂದು ಆರೋಪಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್. ಅಶೋಕ್ ಈ ಹಗರಣಗಳ ಕುರಿತು ತನಿಖೆಗೆ ಆದೇಶಿಸುವಂತೆ ಸವಾಲು ಹಾಕಿದ್ದಾರೆ. ಅಲ್ಲದೆ 15 ತಿಂಗಳಿನಿಂದ ನಿಮ್ಮದೇ ಸರ್ಕಾರ ಇದೆ. ಹಗರಣಗಳ ತನಿಖೆಗೆ ಯಾಕೆ ಇಷ್ಟು ಸಮಯ ತೆಗೆದುಕೊಂಡೀರಿ, ನಾವು ತನಿಖೆಗೆ ಸಿದ್ಧರಿದ್ದೇವೆ ಎಂದರು. ಮತ್ತೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ, ಸಿದ್ದರಾಮಯ್ಯನವರೇ, ನಾವು ನಿಮ್ಮ ಗೊಡ್ಡು ಬೆದರಿಕೆಗೆ ಬಗ್ಗುವುದಿಲ್ಲ. ನಿಮ್ಮ ಸರ್ಕಾರದ ಹಗರಣಗಳ ಹೊಣೆ ಹೊತ್ತು ನೀವು ರಾಜೀನಾಮೆ ನೀಡಲೇಬೇಕು ಎಂದು ಒತ್ತಾಯಿಸಿದರು.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಹೆದ್ದಾರಿ ಬಳಿ ಗುಡ್ಡ ಕುಸಿದಿದ್ದ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಕೇಂದ್ರ ಸಚಿವರು ಮಳೆ, ನೆರೆ ಪರಿಸ್ಥಿತಿ, ಹಾನಿ ಇತ್ಯಾದಿಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಘಟನೆಗಳು ಏನೇ ಇರಲಿ, ಇಂತಹ ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಅಥವಾ ಸಂಬಂಧಪಟ್ಟ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಬೆಂಗಳೂರಿನಲ್ಲಿ ಕೂತು ಆದೇಶಗಳನ್ನು ನೀಡದೆ, ಖುದ್ದು ಭೇಟಿ ನೀಡಿ ಪರಿಶೀಲಿಸಿ ಹಾನಿಯಾದ ಕುಟುಂಬದ ಜೊತೆ ಸರ್ಕಾರ ನಿಲ್ಲಬೇಕು ಎಂದರು.
ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಶಾಲೆಗಳ ಮಕ್ಕಳಿಗೆ ವಾರದಲ್ಲಿ ನಾಲ್ಕು ದಿನ ಮೊಟ್ಟೆ ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಹಭಾಗಿತ್ವದಲ್ಲಿ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಕ್ಕಳಿಗೆ ವಾರದಲ್ಲಿ ಆರು ದಿನ ಪೂರಕ ಪೌಷ್ಟಿಕ ಆಹಾರ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಮಾನಸಿಕ ಆರೋಗ್ಯ ಮತ್ತು ಉತ್ತಮ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಅತ್ಯಗತ್ಯ. ಬಡವರ ಮಕ್ಕಳಿಗೆ ಉತ್ತಮ ಶಿಕ್ಷಣದ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯವಾಗಿದೆ ಎಂದರು.
ಬ್ಯಾಚುಲರ್ಸ್ ಪಾರ್ಟಿ ಸಿನಿಮಾದಲ್ಲಿ 'ನ್ಯಾಯ ಎಲ್ಲಿದೆ' ಎಂಬ ಸಾಂಗನ್ನು ಅನಧಿಕೃತವಾಗಿ ಬಳಸಿದ್ದರಿಂದ ಕಾಪಿ ರೈಟ್ಸ್ ಉಲ್ಲಂಘನೆ ಮಾಡಿದ ಆರೋಪದಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ FIR ದಾಖಲಿಸಲಾಗಿದ್ದು, ಬಂಧನ ಭೀತಿ ಎದುರಿಸುತ್ತಿರುವ ರಕ್ಷಿತ್ ಶೆಟ್ಟಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ರಕ್ಷಿತ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಲಾಗಿದ್ದು, ವಿಚಾರಣೆಯನ್ನು ಜುಲೈ 24 ಕ್ಕೆ ಸೆಷನ್ಸ್ ಕೋರ್ಟ್ ಮುಂದೂಡಿದೆ. ಮತ್ತೊಂದೆಡೆ ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕರಿಮಣಿ, 'ಶಾಂತಂ ಪಾಪಂ' ಸೇರಿದಂತೆ ಹಲವು ಧಾರವಾಹಿಗಳಿಗೆ ವಿನೋದ್ ನಿರ್ದೇಶನ ಮಾಡಿದ್ದರು. ನಿರ್ದೇಶನದ ಜೊತೆಗೆ ನಿರ್ಮಾಣಕ್ಕೂ ಕೈಹಾಕಿದ್ದರು. ಹೀಗಾಗಿ ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
Advertisement