
ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಶಾಲೆಗಳ ಮಕ್ಕಳಿಗೆ ವಾರದಲ್ಲಿ ನಾಲ್ಕು ದಿನ ಮೊಟ್ಟೆ ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಹಭಾಗಿತ್ವದಲ್ಲಿ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಕ್ಕಳಿಗೆ ವಾರದಲ್ಲಿ ಆರು ದಿನ ಪೂರಕ ಪೌಷ್ಟಿಕ ಆಹಾರ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಮಾನಸಿಕ ಆರೋಗ್ಯ ಮತ್ತು ಉತ್ತಮ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಅತ್ಯಗತ್ಯ. ಬಡವರ ಮಕ್ಕಳಿಗೆ ಉತ್ತಮ ಶಿಕ್ಷಣದ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯವಾಗಿದೆ ಎಂದರು.
ಅನೇಕ ಕಡೆಗಳಲ್ಲಿ ಮಕ್ಕಳು ಹಲವು ಕಾರಣಗಳಿಂದ ಬೆಳಗ್ಗೆ ತಿಂಡಿ ತಿನ್ನದೆ ಶಾಲೆಗೆ ಬರುವುದನ್ನು ನಾನು ನೋಡಿದ್ದೇನೆ. ಅಂತಹ ಮಕ್ಕಳು ಮಧ್ಯಾಹ್ನದವರೆಗೆ ಊಟವಿಲ್ಲದೆ ಉಪವಾಸ ಇರುತ್ತಾರೆ. ಹೊಟ್ಟೆ ಹಸಿದುಕೊಂಡು ತರಗತಿಯಲ್ಲಿ ಕುಳಿತು ಪಾಠ ಕೇಳುವುದು ಕಷ್ಟ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ನೀಡಲು ನಮ್ಮ ಸರ್ಕಾರ ನಿರ್ಧರಿಸಿತು. ಈಗ ವಾರದಲ್ಲಿ ನಾಲ್ಕು ದಿನ ಮಕ್ಕಳಿಗೆ ಮೊಟ್ಟೆ ಮತ್ತು ಪೂರಕ ಪೌಷ್ಟಿಕ ಆಹಾರ ನೀಡುವ ಉದಾತ್ತ ಕಾರ್ಯದಲ್ಲಿ ಅಜೀಂ ಪ್ರೇಮ್‌ಜಿ ಫೌಂಡೇಶನ್ ಸರ್ಕಾರದೊಂದಿಗೆ ಕೈಜೋಡಿಸಿದೆ ಎಂದರು.
ಶಾಲಾ ಮಕ್ಕಳು ವೈಜ್ಞಾನಿಕವಾಗಿ ಮತ್ತು ಬೌದ್ಧಿಕವಾಗಿ ಅಭಿವೃದ್ಧಿ ಹೊಂದಬೇಕು, ಆಗ ಮಾತ್ರ ಸಾಮಾಜಿಕ ಹೊಣೆಗಾರಿಕೆ ಹೊಂದಲು ಸಾಧ್ಯ. ಬಡವರ ಮಕ್ಕಳಿಗೆ ಉತ್ತಮ ಶಿಕ್ಷಣದ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯವಾಗಿದೆ. ಈ ಕಾರಣಕ್ಕಾಗಿ ಸಮವಸ್ತ್ರ, ಶೂ, ಸಾಕ್ಸ್‌ಗಳನ್ನು ನೀಡುತ್ತಿದ್ದು, ಹೆಚ್ಚಿನ ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಪ್ರೋ ಅಧ್ಯಕ್ಷ ಅಜೀಂ ಪ್ರೇಮ್‌ಜಿ ದಂಪತಿ, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್. ಅತೀಕ್ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಖಾತರಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಮೆಹರೂಜ್ ಉಪಸ್ಥಿತರಿದ್ದರು.
Advertisement