
ಕೋಲಾರ: ಹಾಸ್ಟೆಲ್ ಮತ್ತು ಶಾಲೆಗೆ ಗುಣಮಟ್ಟದ ಅಕ್ಕಿ ವಿತರಿಸಲಾಗುತ್ತಿದ್ದು, ಯಾವತ್ತೂ ಕಡಿಮೆ ಗುಣಮಟ್ಟದ ಅಕ್ಕಿಯನ್ನು ಪೂರೈಸಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಕೋಲಾರದಲ್ಲಿ ಗುರುಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯಾದ್ಯಂತ ಗುಣಮಟ್ಟದ ಅಕ್ಕಿ ವಿತರಿಸಲಾಗುತ್ತಿದೆ. ಈ ಬಗ್ಗೆ ವಿಧಾನಸಭೆಯ ಅಧಿವೇಶನದಲ್ಲಿ ಪ್ರಸ್ತಾಪಿಸಿದರೆ, ಸೂಕ್ತ ಉತ್ತರ ನೀಡಲಾಗುವುದು ಎಂದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಭಿವೃದ್ಧಿ ಕಡೆ ಗಮನ ನೀಡಿದ್ದಾರೆ. ರಾಜ್ಯದ ಜನತೆಗೆ ನೀಡಿದ್ದ ಐದು ಗ್ಯಾರಂಟಿಗಳು ಮುಂದುವರೆಯಲಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಹಣಕಾಸಿನ ಕೊರತೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾಲಯವು ಅನ್ಯ ರಾಜ್ಯಗಳಿಂದ ಅಕ್ಕಿ ತರಲು ಶ್ರಮಿಸುತ್ತಿದ್ದು, ಅದರಂತೆ ಗುಣಮಟ್ಟದ ಅಕ್ಕಿ ವಿತರಿಸಲಾಗಿದೆ. ರಾಜ್ಯಾದ್ಯಂತ ಗ್ಯಾರಂಟಿ ಯೋಜನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಮುಂದುವರಿಕೆಯನ್ನು ನೋಡಲಾಗದೆ, ವಿರೋಧ ಪಕ್ಷಗಳು ಸೂಕ್ತ ಪರಿಶೀಲನೆ ಇಲ್ಲದ ಇಲ್ಲಸಲ್ಲದ ಆರೋಪ ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದರು.
ವಾಲ್ಮೀಕಿ ನಿಗಮ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರವಿದೆ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿದ ಸಚಿವರು, ವಿರೋಧ ಪಕ್ಷಗಳು ವಿನಾಕಾರಣ ಆರೋಪ ಮಾಡುತ್ತಿವೆ. ಇದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು. ಸಿದ್ದರಾಮಯ್ಯ ಸರ್ಕಾರಕ್ಕೆ 40 ಕೋಟಿ ರೂ. ನಷ್ಟ ಉಂಟು ಮಾಡಿದ್ದಾರೆ ಎಂಬ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಮುನಿಯಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಆಪಾದಿತ ಘಟನೆಯಲ್ಲಿ ಭಾಗಿಯಾಗಿಲ್ಲ, ಅವರು ಅಭಿವೃದ್ಧಿ ಕಾರ್ಯಗಳಿಗೆ ಬದ್ಧರಾಗಿರುವ ವ್ಯಕ್ತಿ ಎಂದರು.
ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಬಗ್ಗೆ ಕಾಂಗ್ರೆಸ್ ಶಾಸಕರು ಮತ್ತು ಮುಖಂಡರ ತಂಡ ಹೈಕಮಾಂಡ್‌ಗೆ ದೂರು ಸಲ್ಲಿಸಿದ ಪ್ರಶ್ನೆಗೆ ಉತ್ತರಿಸಿದ ಮುನಿಯಪ್ಪ, ರಾಜ್ಯ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ಜನರು ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಂತೋಷಗೊಂಡಿದ್ದಾರೆ ಎಂದು ತಿಳಿಸಿದರು.
Advertisement