
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮದ ತನಿಖೆಯ ವೇಳೆ ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳುವಂತೆ ಒತ್ತಡ ಹೇರಿರುವ ಆರೋಪದ ಮೇಲೆ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯದ (ಇಡಿ) ಇಬ್ಬರು ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದಾರೆ.
ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ನಡೆಸುತ್ತಿರುವ ತನಿಖೆಯನ್ನು ಬುಡಮೇಲು ಮಾಡುವ ಉದ್ದೇಶದಿಂದ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಇಡಿ ತನ್ನ ಅರ್ಜಿಯಲ್ಲಿ ಹೇಳಿಕೊಂಡಿದೆ. ಯಾವುದೇ ಪ್ರಾಥಮಿಕ ವಿಚಾರಣೆಯಿಲ್ಲದೆ ಕರ್ನಾಟಕ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಇಡಿ ಹೇಳಿದೆ. ಇಡಿ ಪರ ವಕಾಲತ್ತು ವಹಿಸಿರುವ ಹಿರಿಯ ವಕೀಲ ಮಧುಕರ್ ದೇಶಪಾಂಡೆ, ಪ್ರಕರಣದ ತುರ್ತು ವಿಚಾರಣೆಯ ಅಗತ್ಯವಿದೆ ಎಂದು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಮಧ್ಯಾಹ್ನದ ವೇಳೆಗೆ ಹೈಕೋರ್ಟ್ ವಿಚಾರಣೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.
ಮಾಜಿ ಸಚಿವ ಬಿ.ನಾಗೇಂದ್ರ ಒತ್ತಡದಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದಾಗಿ ಒಪ್ಪಿಕೊಳ್ಳುವಂತೆ ತಮ್ಮ ಮೇಲೆ ಇಡಿ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಹಾಗೂ, ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಕಲ್ಲೇಶ್.ಬಿ ದೂರು ನೀಡಿದ್ದರು. ಸೋಮವಾರವಷ್ಟೇ (ಜುಲೈ 22ರಂದು) ನಗರದ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯ ಪೊಲೀಸರು, ಕಣ್ಣನ್ ಹಾಗೂ ಮಿತ್ತಲ್ ಎಂಬ ಇಡಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಈ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಈ ಅಧಿಕಾರಿಗಳು ಮಂಗಳವಾರ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
Advertisement