ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ; HDK ಸೇರಿದಂತೆ ಮುಡಾ ನಿವೇಶನ ಪಡೆದ BJP-JDS ನಾಯಕರ ಪಟ್ಟಿ ಬಿಡುಗಡೆ; ಮುಡಾ ವಿಚಾರದಲ್ಲಿ ವಿಪಕ್ಷಗಳಿಂದ ಸುಳ್ಳು ಆರೋಪ! ಇವು ಇಂದಿನ ಪ್ರಮುಖ ಸುದ್ದಿಗಳು 26-07-24

1. ರಾಜ್ಯ ಸರ್ಕಾರ, ಸಿಎಂ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಉದ್ದೇಶ; ಮುಡಾ ವಿಚಾರದಲ್ಲಿ ವಿಪಕ್ಷ BJP-JDS ಸುಳ್ಳು ಆರೋಪ
ಮುಡಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಇಂದು ದಾಖಲೆಗಳ ಮೂಲಕ ಉತ್ತರ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮುಡಾ ಅಕ್ರಮ ಪ್ರಕರಣ ಸಂಬಂಧ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ನವರು ಅರೆಬರೆ ದಾಖಲೆಗಳನ್ನು ಮುಂದಿಟ್ಟು ಸುಳ್ಳು ಆರೋಪ ಮಾಡುತ್ತಿದ್ದಾರೆ. ರಾಜ್ಯಪಾಲರಿಗೂ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು. ಆಸ್ತಿಯನ್ನು ಸರ್ಕಾರ ದಲಿತ ಕುಟುಂಬಕ್ಕೆ ಮಂಜೂರು ಮಾಡಿಲ್ಲ. ಕುಟುಂಬವು ಸರ್ಕಾರದಿಂದ ಹರಾಜಿನಲ್ಲಿ ಭೂಮಿಯನ್ನು ಖರೀದಿಸಿದೆ. ಆದ್ದರಿಂದ ಈ ಪ್ರಕರಣದಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆಯ ನಿಬಂಧನೆಯು ಅನ್ವಯಿಸುವುದಿಲ್ಲ. ಈ ವಿಚಾರದಲ್ಲಿ ವಿಪಕ್ಷಗಳು ಅನಗತ್ಯ ಆರೋಪ ಮಾಡಲು ಯತ್ನಿಸುತ್ತಿವೆ. ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ವ್ಯಕ್ತಿತ್ವಕ್ಕೆ ಮಸಿ ಬಳಿಯಬೇಕು. ಕಪ್ಪು ಚುಕ್ಕೆ ತರಬೇಕು ಅಂತ ಇಡೀ ಸದನವನ್ನು ವಿಪಕ್ಷಗಳು ಹಾಳು ಮಾಡಿವೆ ಎಂದರು. ಈಮಧ್ಯೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗ ಆಗ್ರಹಿಸಿ ಕರ್ನಾಟಕದ ಬಿಜೆಪಿ ಸದಸ್ಯರು ಶುಕ್ರವಾರ ದೆಹಲಿಯಲ್ಲಿ ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
2. ಮುಡಾ ನಿವೇಶನ ಪಡೆದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಪಟ್ಟಿಯನ್ನು ಬಿಡುಗಡೆ
ಮುಡಾ ನಿವೇಶನ ಪಡೆದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡುವ ಮೂಲಕ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ವಿಪಕ್ಷಗಳಿಗೆ ತಿರುಗೇಟು ನೀಡಿದರು. ಸಿಎಂ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರ ಕುಟುಂಬಕ್ಕೆ ಪರ್ಯಾಯ ನಿವೇಶನ ದೊರೆತಂತೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರೂ ಮುಡಾದಿಂದ ನಿವೇಶನ ಪಡೆದಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿಗೆ ಮುಡಾದಿಂದ 21 ಸಾವಿರ ಚದರ ಅಡಿ ನಿವೇಶನ ಮಂಜೂರಾಗಿದೆ. ಇನ್ನುಳಿದಂತೆ ಬಿಜೆಪಿ ಮುಖಂಡರಾದ ಎಚ್.ವಿಶ್ವನಾಥ್, ಜಿಟಿ ದೇವೇಗೌಡ, ಸಾರಾ ಮಹೇಶ್ ಮತ್ತಿತರ ಹೆಸರು ಪಟ್ಟಿಯಲ್ಲಿದೆ ಎಂದು ತಿಳಿಸಿದರು.
3. ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ
ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಾಕರಣ ಮಾಡಲಾಗಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಈ ವಿಷಯ ತಿಳಿಸಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್ ಕೆ ಪಾಟೀಲ್, 'ಜನರ ಅಪೇಕ್ಷೆಯಂತೆ ರಾಮನಗರ ಜಿಲ್ಲೆಯ ಹೆಸರನ್ನು ಬದಲಾವಣೆ ಮಾಡಲಾಗಿದೆ. ಇದರಲ್ಲಿ ಬೇರೆ ಯಾವುದೇ ಉದ್ದೇಶ ಇಲ್ಲ' ಎಂದರು. ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಕ್ರಯಿಸಿದ HDK, ರಾಮನ ಹೆಸರು ತೆಗೆಯಲು ಸಾಧ್ಯವಿಲ್ಲ, 2028ರೊಳಗೆ ಮತ್ತೆ ರಾಮನಗರವಾಗುತ್ತೆ ಎಂದು ಹೇಳಿದ್ದಾರೆ.
4. ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕ
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರು ಇದೇ ಜುಲೈ 31ಕ್ಕೆ ನಿವೃತ್ತಿಯಾಗುತ್ತಿದ್ದು, ಅವರ ಪತ್ನಿ ಶಾಲಿನಿ ರಜನೀಶ್ ಅವರನ್ನು ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. 1989ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಶಾಲಿನಿ ರಜನೀಶ್ 2027ರ ಜೂನ್ ಅಂತ್ಯಕ್ಕೆ ನಿವೃತ್ತರಾಗಲಿದ್ದಾರೆ. ಅಷ್ಟೇ ಅಲ್ಲದೆ, 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಿಶೇಷ ಅವಕಾಶ ನೀಡಲು ಮತ್ತು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಹಾಕಲು ವಿಶೇಷ ಅವಕಾಶ ನೀಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮಂಡ್ಯ ಕೆಆರ್ ಎಸ್ ಬೃಂದಾವನ ಉದ್ಯಾನವನವನ್ನು ಪಿಪಿಪಿಯಡಿ 2,663 ಕೋಟಿ ಮೊತ್ತದಲ್ಲಿ ಮೇಲ್ದರ್ಜೆಗೆ ಏರಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
5. ಪೋಕ್ಸೊ ಪ್ರಕರಣ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಹೈಕೋರ್ಟ್ ಮತ್ತೆ ಬಿಗ್ ರಿಲೀಫ್
ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಲ್ಲಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಹೈಕೋರ್ಟ್ ಮತ್ತೆ ಬಿಗ್ ರಿಲೀಫ್ ನೀಡಿದೆ. ತಮ್ಮ ವಿರುದ್ಧ ದಾಖಲಾದ ಪೋಕ್ಸೊ ಪ್ರಕರಣವನ್ನು ರದ್ದು ಕೋರಿ ಬಿಎಸ್ವೈ ಸಲ್ಲಿಸಿದ್ದ ಅರ್ಜಿಯನ್ನು ಕೈಗೆತ್ತಿಕೊಂಡ ಹೈಕೋರ್ಟ್, ವಿಚಾರಣೆಯನ್ನು ಒಂದು ವಾರ ಮುಂದೂಡಿದೆ. ಅಲ್ಲದೇ ಈ ಹಿಂದೆ ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶವನ್ನು ವಿಸ್ತರಣೆ ಮಾಡಿದೆ. ಇದರೊಂದಿಗೆ ಯಡಿಯೂರಪ್ಪ ಮತ್ತೆ ಬಂಧನದ ಭೀತಿಯಿಂದ ಬಚಾವ್ ಆಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


