
ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳಲು ಕ್ಷಣಗಣನೆ ಆರಂಭವಾಗಿದ್ದು, ಕಾಂಗ್ರೆಸ್, ಬಿಜೆಪಿ ಮತ್ತು ಜಾತ್ಯತೀತ ಜನತಾ ದಳ (ಜೆಡಿಎಸ್) ಪಕ್ಷದ ಅಭ್ಯರ್ಥಿಗಳಲ್ಲಿ ಭವಿಷ್ಯ ಮಂಗಳವಾರ ಹೊರಬೀಳಲಿದೆ.
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಿದ್ದರೆ, ಬಿಜೆಪಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಮತದಾರರನ್ನು ಮುಂದೆ ನಿಂತಿತ್ತು. ಜೆಡಿಎಸ್ ಕಮಲ ಪಾಳಯದೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿತ್ತು.
ಕಳೆದ ವರ್ಷದ ವಿಧಾನಸಭೆ ಚುನಾವಣೆಗೆ ಹೋಲಿಕೆ ಮಾಡಿದರೆ, ರಾಜ್ಯದ ಜನರು ವಿಭಿನ್ನವಾಗಿ ಮತ ಚಲಾಯಿಸಿದ್ದಾರೆಯೇ ಎಂಬುದನ್ನು ಫಲಿತಾಂಶದಿಂದ ತಿಳಿದುಬರಲಿದೆ.
ಮತದಾರರಲ್ಲಿ ಸುಮಾರು ಶೇ.50 ರಷ್ಟಿರುವ ಮಹಿಳೆಯರು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳಿಗೆ ಅಥವಾ ಮೋದಿಯ 'ವರ್ಚಸ್ಸಿಗೆ' ಒಲವು ತೋರಿದ್ದಾರೆಯೇ ಎಂಬುದನ್ನೂ ಈ ಫಲಿತಾಂಶ ಬಹಿರಂಗಪಡಿಸಲಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದವರೇ ಆಗಿರುವುದರಿಂದ ಕಾಂಗ್ರೆಸ್‌ಗೆ ಹೆಚ್ಚಿನ ಲಾಭ ಸಿಗುವ ಸಾಧ್ಯತೆಗಳಿವೆ. ಇದಲ್ಲದೆ, ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದೊಂದಿಗೆ ಆಡಳಿತ ಪಕ್ಷ ಕಾಂಗ್ರೆಸ್ ಅನೇಕ ವಿಷಯಗಳಲ್ಲಿ ಭಿನ್ನಾಭಿಪ್ರಾಯವನ್ನು ಹೊಂದಿದೆ. I.N.D.I.A ಮೈತ್ರಿಕೂಟದಲ್ಲಿ ಕಾಂಗ್ರೆಸ್ ಪ್ರಮುಖ ಪಕ್ಷವಾಗಿರುವುದರಿಂದ, ಕರ್ನಾಟಕದಿಂದ ಮೈತ್ರಿಕೂಟಕ್ಕೆ ಎಷ್ಟು ಸ್ಥಾನಗಳನ್ನು ನೀಡುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ನಾಯಕತ್ವವು 18-20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿದೆ. ಆದರೆ ಚುನಾವಣೋತ್ತರ ಸಮೀಕ್ಷಾ ಫಲಿತಾಂಶಗಳು ಈ ಉತ್ಸಾಹವನ್ನು ಕುಗ್ಗಿಸಿದೆ. ಆದರೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಭವಿಷ್ಯ ಬಹುತೇಕ ನಿಜವಾಗಿದ್ದು, ಈ ಹಿನ್ನೆಲೆ ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದೆ.
ಶನಿವಾರದ ಎಕ್ಸಿಟ್ ಪೋಲ್ ಭವಿಷ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ತಳ್ಳಿ ಹಾಕಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಕೊನೆಯ ಬಾರಿಗೆ 1999 ರ ಲೋಕಸಭಾ ಚುನಾವಣೆಯಲ್ಲಿ 18 ಸ್ಥಾನಗಳನ್ನು ಗೆದ್ದಾಗ ಎರಡಂಕಿಯ ಸ್ಥಾನಗಳನ್ನು ಗಳಿಸಿತ್ತು.
2019 ರ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನದಲ್ಲಷ್ಟೇ ಗೆಲವು ಸಾಧಿಸಿತ್ತು. ಈ ಬಾರಿ ಹಲವು ಸಚಿವರ ಸಂಬಂಧಿಕರು ಕಣದಲ್ಲಿದ್ದು, ತಮ್ಮವರ ಗೆಲುವು ಖಚಿತಪಡಿಸುವಲ್ಲಿ ವಿಫಲವಾಗಿದ್ದೇ ಆದರೆ, ಮಂತ್ರಿ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ವಿಧಾನಸಭಾ ಚುನಾವಣೆಯಲ್ಲಿ 136ರ ಬಹುಮತದ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವಲ್ಲಿ ವಿಫಲವಾಗಿದ್ದೇ ಆದರೆ, ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದ ಅಪಾಯವಿಲ್ಲ ಎಂಬುದು ನನ್ನ ಭಾವನೆ ಎಂದು ಕಾಂಗ್ರೆಸ್ ಮೂಲವೊಂದು ತಿಳಿಸಿದೆ.
ಎಕ್ಸಿಟ್ ಪೋಲ್‌ಗಳು ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ 20 ಸ್ಥಾನಗಳನ್ನು ನೀಡಿವೆ. ಇದು ನಿಜವಾಗಿದ್ದೇ ಆದರೆ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದ ಬಿಜೆಪಿ-ಜೆಡಿಎಸ್, ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ನೀಡಿದಂತಾಗುತ್ತದೆ ಎಂದು ರಾಜಕೀಯ ತಜ್ಞರು ಹೇಳಿದ್ದಾರೆ.
ಈ ನಡುವೆ ರಾಜ್ಯ ಬಿಜೆಪಿ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ಪಕ್ಷ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದ್ದು, ಕೇಂದ್ರದಲ್ಲಿ ಎನ್‌ಡಿಎ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಪಕ್ಷದ ವಕ್ತಾರ ಎಂ ಜಿ ಮಹೇಶ್ ಹೇಳಿದ್ದಾರೆ.
ಈ ಮೂರೂ ಸ್ಥಾನಗಳಲ್ಲಿ ತಮ್ಮ ಪಕ್ಷವೇ ಜಯಭೇರಿ ಬಾರಿಸಲಿದೆ ಎಂದು ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಸೋಮವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Advertisement