
ಹಾಸನ: ಅಮಾನತುಗೊಂಡಿರುವ ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ ಶನಿವಾರ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ಅವರ ಮನೆಗೆ ಕರೆದೊಯ್ದು ಸ್ಥಳ ಪರಿಶೀಲನೆ ನಡೆಸಿದೆ.
ಲೋಕಸಭೆ ಚುನಾವಣೆಯಲ್ಲಿ ಹಾಸನದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡ 33 ವರ್ಷದ ಪ್ರಜ್ವಲ್ ರೇವಣ್ಣ ಮೂರು ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿರುವ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಂದೆ ಹೊಳೆನರಸೀಪುರ ಶಾಸಕ ಎಚ್ ಡಿ ರೇವಣ್ಣ ಮತ್ತು ತಾಯಿ ಭವಾನಿ ರೇವಣ್ಣ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ವಿಶೇಷ ತನಿಖಾ ತಂಡ(ಎಸ್‌ಐಟಿ) ಅಂಧಿಕಾರಿಗಳು ಇಂದು ಹಾಸನದ ಮಾಜಿ ಸಂಸದ ಪ್ರಜ್ವಲ್ ಅವರನ್ನು ಬಿಗಿ ಭದ್ರತೆಯ ನಡುವೆ ಹೊಳೆನರಸೀಪುರದ ಅವರ ನಿವಾಸಕ್ಕೆ ಕರೆತಂದಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಇಡೀ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಕಪ್ಪು ಟಿ-ಶರ್ಟ್ ಮತ್ತು ಮುಖಕ್ಕೆ ಮಾಸ್ಕ್ ಧರಿಸಿ ಮಾಜಿ ಸಂಸದ ಏಪ್ರಿಲ್ 27 ರ ನಂತರ ಮೊದಲ ಬಾರಿಗೆ ತಮ್ಮ ನಿವಾಸಕ್ಕೆ ಆಗಮಿಸಿದರು.
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಜರ್ಮನಿಗೆ ಪಲಾಯನ ಮಾಡಿದ್ದರು.
ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ಮೇ 31 ರಂದು ಬೆಂಗಳೂರಿಗೆ ಮರಳಿದ್ದು, ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌ಐಟಿ ಬಂಧಿಸಿದೆ.
Advertisement