
ಬೆಂಗಳೂರು: “ಆಸ್ತಿ ತೆರಿಗೆ ಪಾವತಿ ಮಾಡದವರಿಗೆ ಬೆಂಗಳೂರು ಮಹಾನಗರ ಪಾಲಿಕೆಯಿಂದ ನೀಡಲಾಗಿರುವ ಒನ್ ಟೈಮ್ ಸೆಟ್ಲಮೆಂಟ್ (ಓಟಿಎಸ್) ಅವಕಾಶ ಜುಲೈ 31ರವರೆಗೆ ಮಾತ್ರ ಇರಲಿದೆ.
ಹೀಗಾಗಿ ತೆರಿಗೆ ಬಾಕಿ ಉಳಿಸಿಕೊಂಡಿರುವವರು ಕೊನೆಯ ದಿನಾಂಕದ ಒಳಗಾಗಿ ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ವಿಧಾನಸೌಧದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಶಿವಕುಮಾರ್ “ಚುನಾವಣೆಗಳು ನಡೆಯುತ್ತಿದ್ದ ಕಾರಣ ತೆರಿಗೆ ಪಾವತಿ ವಿಚಾರದಲ್ಲಿ ಪಾಲಿಕೆ ಒತ್ತಡ ಹಾಕಿರಲಿಲ್ಲ. ಆಸ್ತಿ ತೆರಿಗೆ ಕಟ್ಟದವರಿಗೆ ತೆರಿಗೆ ವ್ಯಾಪ್ತಿಯಲ್ಲಿ ಬರಲು ಪಾಲಿಕೆ ವತಿಯಿಂದ ನೀಡಿರುವ ಒನ್ ಟೈಮ್ ಸೆಟ್ಲಮೆಂಟ್ ಅವಕಾಶವನ್ನು ಜುಲೈ 31ಕ್ಕೆ ಅಂತಿಮಗೊಳಿಸಲಾಗುವುದು. ಈ ಅವಕಾಶವನ್ನು ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡುವುದಿಲ್ಲ. ಈ ಅವಕಾಶದಲ್ಲಿ ದಂಡದ ಮೇಲೆ ಶೇ.50 ರಷ್ಟು ವಿನಾಯಿತಿ ನೀಡಿದ್ದು, 100%ರಷ್ಟು ಬಡ್ಡಿ ಮನ್ನಾ ಕೂಡ ಮಾಡಲಾಗಿದೆ. ಬಿಜೆಪಿ ಸರ್ಕಾರ ತರಾತುರಿಯಲ್ಲಿ ಜಾರಿಗೆ ತಂದ ಕಾಯ್ದೆ. ನಮ್ಮ ಸರ್ಕಾರ ಇದನ್ನು ಸರಿಪಡಿಸಲು ಮುಂದಾಗಿದೆ. ನಾಗರಿಕರು ಈ ಅವಕಾಶವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಹೇಳಿದ್ದಾರೆ.
20 ಲಕ್ಷ ಕಟ್ಟಡಗಳು ಆಸ್ತಿ ತೆರಿಗೆ ವ್ಯಾಪ್ತಿಯಲ್ಲಿದ್ದು, ಅನೇಕರು ಹೊರಗಿದ್ದಾರೆ. ತೆರಿಗೆ ಪಾವತಿಸಲು ಅವರಿಗೂ ಅವಕಾಶ ಕಲ್ಪಿಸಲಾಗಿದೆ. ಅವರು ತೆರಿಗೆ ಪಾವತಿಸಿ 90 ದಿನದೊಳಗೆ ಸೂಕ್ತ ದಾಖಲೆ ಕೊಟ್ಟರೆ ಅವರಿಗೆ ಸೂಕ್ತ ಖಾತೆ ನೀಡಲಾಗುವುದು. ಇನ್ನು 4 ಲಕ್ಷ ಮಂದಿ ಆಸ್ತಿ ತೆರಿಗೆ ಪಾವತಿ ಮಾಡಿಲ್ಲ. ಈಗಾಗಲೇ 50 ಸಾವಿರ ಮಂದಿ ಈ ಅವಕಾಶ ಬಳಸಿಕೊಂಡು ಆಸ್ತಿ ತೆರಿಗೆ ಪಾವತಿಸಿದ್ದಾರೆ. ಆಗಸ್ಟ್ 1ರಿಂದ ತೆರಿಗೆ ಪಾವತಿಸದಿದ್ದರೆ ಡೀಫಾಲ್ಟರ್ ಪಟ್ಟಿಗೆ ಸೇರುತ್ತಾರೆ. ಹೀಗಾಗಿ ಜುಲೈ 31ರ ಒಳಗೆ ಆಸ್ತಿ ತೆರಿಗೆ ಪಾವತಿ ಮಾಡಿ. ಸದ್ಯದ ಲೆಕ್ಕಾಚಾರದ ಪ್ರಕಾರ 5200 ಕೋಟಿಯಷ್ಟು ತೆರಿಗೆ ಸಂಗ್ರಹವಾಗಬೇಕಿತ್ತು. ಆದರೆ ನಮಗೆ 1300 ಕೋಟಿ ಮಾತ್ರ ಸಂಗ್ರಹವಾಗಿದೆ.
ಮೂರು ತಿಂಗಳಲ್ಲಿ ಆಸ್ತಿ ದಾಖಲೆ ಡಿಜಿಟಲೀಕರಣ ಪೂರ್ಣ:
20 ಲಕ್ಷ ಆಸ್ತಿ ದಾಖಲೆಗಳ ಡಿಜಿಟಲೀಕರಣ ಪ್ರಕ್ರಿಯೆ ಮಾಡಲಾಗುತ್ತಿದೆ. ಈ ಆಸ್ತಿ ಮಾಲೀಕರ ಮನೆ ಬಾಗಿಲಿಗೆ ದಾಖಲೆಗಳನ್ನು ತಲುಪಿಸಲಾಗುವುದು. 20 ಲಕ್ಷ ಆಸ್ತಿಗಳ ಪೈಕಿ 8 ಲಕ್ಷ ಆಸ್ತಿಗಳ ದಾಖಲೆಗಳು ಡಿಜಿಟಲೀಕರಣವಾಗಿದ್ದು, ಮುಂದಿನ ಮೂರು ತಿಂಗಳಲ್ಲಿ ಉಳಿದ ಆಸ್ತಿಗಳ ದಾಖಲೆಗಳನ್ನು ಡಿಜಿಟಲೀಕರಣ ಮಾಡಲು ನಿರ್ಧರಿಸಿದ್ದೇವೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
Advertisement