
ಬೆಂಗಳೂರು: ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಹೆಚ್.ಡಿ. ಕುಮಾರಸ್ವಾಮಿ ಅವರು ಮೊದಲ ಬಾರಿಗೆ (ಜೂನ್ 14) ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿದ್ದಾರೆ.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ 11.50ಕ್ಕೆ ಕುಮಾರಸ್ವಾಮಿಯವರು ಆಗಮಿಸಲಿದ್ದು. ಕೇಂದ್ರದ ಬೃಹತ್ ಕೈಗಾರಿಕಾ ಸಚಿವರಾಗಿ ಬರುತ್ತಿರುವ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಜೆಡಿಎಸ್ ಮುಖಂಡರು, ಕಾರ್ಯಕರ್ತರು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ವಿಮಾನ ನಿಲ್ದಾಣದಿಂದ ಪಕ್ಷದ ಕಚೇರಿಗೆ ಬರಲಿರುವ ಅವರು, ಅಲ್ಲಿ ಸನ್ಮಾನ ಸ್ವೀಕರಿಸಿದ ನಂತರ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡುವರು.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರ ಮನೆಗೆ ತೆರಳಿ, ತಂದೆ–ತಾಯಿಯ ಆಶೀರ್ವಾದ ಪಡೆಯುವರು. ನಂತರ ಕುಟುಬಂದೊಂದಿಗೆ ತಿರುಪತಿಯತ್ತ ಪಯಣ ಬೆಳೆಸುವರು ಎಂದು ತಿಳಿದುಬಂದಿದೆ.
ಈ ನಡವೆ ಕುಮಾರಸ್ವಾಮಿ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಅಥವಾ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡುವರೇ ಎಂಬ ಪ್ರಶ್ನೆಗಳು ಕೇಳಿಬಂದಿದ್ದು, ಅಂತಹ ಯಾವುದೇ ಯೋಜನೆಗಳಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪಕ್ಷದ ಅಧ್ಯಕ್ಷರಷ್ಟೇ ಅಲ್ಲದೆ ಪೂರ್ಣಾವಧಿಯ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ನೇಮಿಸುವ ಕುರಿತ ಪಕ್ಷದಲ್ಲಿ ಚರ್ಚೆಗಳು ಆರಂಭವಾಗಿದ್ದು, ಈ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಗಳಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಆದರೆ, ಕುಮಾರಸ್ವಾಮಿಯವರು ನಗರಕ್ಕೆ ಭೇಟಿ ನೀಡುತ್ತಿರುವ ಇಂದು ಈ ಕುರಿತು ಯಾವುದೇ ಸಭೆಗಳು ನಿರ್ಧಾರವಾಗಿಲ್ಲ ಎಂದು ತಿಳಿದುಬಂದಿದೆ.
ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಿಖಿಲ್ ಕುಮಾರಸ್ವಾಮಿ ಅವರಿಗೆ ಅವಕಾಶ ನೀಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಪಕ್ಷದ ಮೂಲಗಳು, ಸದ್ಯಕ್ಕೆ ಯಾವುದೇ ಸ್ಪಷ್ಟತೆ ಇಲ್ಲ ಎಂದು ತಿಳಿಸಿವೆ. ಉಪಚುನಾವಣೆಗೆ ತಿಂಗಳು ಬಾಕಿ ಇರುವ ಕಾರಣ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದೆ.
Advertisement