
ಬೆಂಗಳೂರು: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಶುಕ್ರವಾರ ಬಂಧನ ವಾರಂಟ್ ಹೊರಡಿಸಲಾಗಿದ್ದು, ಅವರು ಶೀಘ್ರದಲ್ಲೇ ತಾವಾಗೇ ತನಿಖಾ ತಂಡದ ಮುಂದೆ ಹಾಜರಾದರೆ ಒಳ್ಳೆಯದು ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಶುಕ್ರವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 17ರಂದು ತನಿಖಾಧಿಕಾರಿಗಳ ಮುಂದೆ ಹಾಜರಾಗುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ಯಡಿಯೂರಪ್ಪ ಅವರಿಗೆ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ. ಅವರನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗುವುದು. ಅವರ ವಿರುದ್ಧ ಕಾನೂನು ಪ್ರಕಾರ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪೊಲೀಸರ ನಡೆ ಸೇಡಿನ ರಾಜಕಾರಣ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಬೇರೆ ಏನನ್ನೂ ಹೇಳಲು ಸಾಧ್ಯವಿಲ್ಲದ ಕಾರಣ ಅವರು (ಬಿಜೆಪಿ) ಇದನ್ನೇ ಹೇಳಬೇಕಾಗಿದೆ’ ಎಂದು ಹೇಳಿದ್ದಾರೆ.
ನಾಲ್ಕು ತಿಂಗಳ ಹಿಂದೆಯೇ ದೂರು ದಾಖಲಾಗಿರುವುದರಿಂದ ಪ್ರಕರಣದ ವಿಳಂಬದ ಬಗ್ಗೆ ಕೇಳಿದಾಗ, ಧ್ವನಿ ಮಾದರಿಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ. ಆರೋಪಿ ಪ್ರಮುಖ ವ್ಯಕ್ತಿ ಮತ್ತು ವಿಐಪಿ ಆಗಿರುವುದರಿಂದ ಕ್ರಮ ಕೈಗೊಳ್ಳುವ ಮುನ್ನ ಎಲ್ಲವನ್ನೂ ಪರಿಶೀಲಿಸಬೇಕಾಗಿದೆ ಎಂದರು.
ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ನ್ಯಾಯಾಲಯ ಗುರುವಾರ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ. ಪೋಕ್ಸೊ 1ನೇ ಫಾಸ್ಟ್ ಟ್ರ್ಯಾಕ್ ಕೋರ್ಟ್‌ನ ನ್ಯಾಯಾಧೀಶರಾದ ರಮೇಶ್ ಅವರು ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದ್ದಾರೆ.
ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. ಪ್ರಕರಣದ ತನಿಖೆ ಮತ್ತು ರದ್ದತಿಗೆ ತಡೆಯಾಜ್ಞೆ ನೀಡುವಂತೆ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯನ್ನೂ ನ್ಯಾಯಾಲಯ ಪರಿಶೀಲಿಸಲಿದೆ.
ಏನಿದು ಪ್ರಕರಣ?
ಯಡಿಯೂರಪ್ಪ ವಿರುದ್ಧ 17 ವರ್ಷದ ಅಪ್ರಾಪ್ತೆಯ ತಾಯಿ ನೀಡಿರುವ ದೂರಿನ ಆಧಾರದ ಮೇಲೆ ಲೈಂಗಿಕ ಅಪರಾಧದಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 ಎ (ಲೈಂಗಿಕ ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ವರ್ಷದ ಫೆಬ್ರುವರಿ 2ರಂದು ಸಹಾಯ ಕೇಳಲು ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದ ವೇಳೆ ಅವರು ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದರು.
ಈ ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ಬಂಧಿಸುವಂತೆ ಕೋರಿ ಪೊಲೀಸರು ಕರ್ನಾಟಕ ಹೈಕೋರ್ಟ್‌ಗೆ ಬುಧವಾರ ರಿಟ್ ಅರ್ಜಿ ಸಲ್ಲಿಸಿದ್ದರು. ಬಿಎಸ್‌ವೈ ವಿರುದ್ಧ ದೂರು ದಾಖಲಿಸಿ ತಿಂಗಳುಗಳೇ ಕಳೆದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಸಂತ್ರಸ್ತೆಯ ಸಹೋದರ ಕೂಡ ಅವರನ್ನು ಬಂಧಿಸುವಂತೆ ಕೋರಿ ನ್ಯಾಯಾಲಯಕ್ಕೆ ರಿಟ್ ಅರ್ಜಿ ಸಲ್ಲಿಸಿದ್ದರು.
ಯಡಿಯೂರಪ್ಪ ವಿರುದ್ಧ ಆರೋಪ ಮಾಡಿದ್ದ 54 ವರ್ಷದ ಮಹಿಳೆ ಶ್ವಾಸಕೋಶದ ಕ್ಯಾನ್ಸರ್‌ನಿಂದ ಕಳೆದ ತಿಂಗಳು ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಮೇ 27ರಂದು ಮೃತಪಟ್ಟಿದ್ದರು.
Advertisement