
ಹುಬ್ಬಳ್ಳಿ: ಲೋಕಸಭೆ ಚುನಾವಣೆಯಲ್ಲಿ ಮತ ನೀಡಲಿಲ್ಲ ಎಂಬ ಕಾರಣಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಮೇಲೂ ಸೇಡು ತೀರಿಸಿಕೊಳ್ಳುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಿಸುವ ಮೂಲಕ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿದೆ ಎಂದು ಖಂಡಿಸಿದರು.
ಯಾವುದೇ ಸೂಕ್ತ ಯೋಜನೆ, ಯೋಚನಾ ರಹಿತವಾಗಿ ಚುನಾವಣಾ ಪ್ರಣಾಳಿಕೆ ಪ್ರಕಟಿಸಿದ್ದರಿಂದಲೇ ಹೀಗಾಗಿದೆ. ಗ್ಯಾರಂಟಿ ಎನ್ನುತ್ತ ಒಂದು ಕೈಲಿ ಕೊಟ್ಟು ಮತ್ತೊಂದು ಕೈಲಿ ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ ರಾಜ್ಯ ಸರ್ಕಾರ ಎಂದು ವಾಗ್ಧಾಳಿ ನಡೆಸಿದರು. ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ಇನ್ಮೇಲೆ ಬಸ್ ದರವೂ ಹೆಚ್ಚಾಗುತ್ತದೆ. ಇದು ಜನ ವಿರೋಧಿ ನೀತಿ ಯಾಗಿದೆ. ಸರ್ಕಾರ ತಕ್ಷಣ ಬೆಲೆ ಏರಿಕೆ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ವಿವಿಧ ದೇಶಗಳಲ್ಲಿ ಬರ ಪರಿಸ್ಥಿತಿ ಇದ್ದು, ಹಲವೆಡೆ ಯುದ್ಧಗಳೂ ನಡೆಯುತ್ತಿವೆ. ಇದರಿಂದ ಬೆಲೆ ಏರಿಕೆಯಾಗುತ್ತಿದೆ. ಕೇಂದ್ರದಲ್ಲಿ ಮೋದಿ ಸರ್ಕಾರ ಬೆಲೆ ಏರಿಕೆ ನಿಯಂತ್ರಿಸಲು ಪ್ರಯತ್ನಿಸುತ್ತಿದೆ, ಆದರೆ ಕರ್ನಾಟಕ ಸರ್ಕಾರ ಏಕಾಏಕಿ ಬೆಲೆಗಳನ್ನು ಹೆಚ್ಚಿಸಿ ಜನಸಾಮಾನ್ಯರಿಗೆ ಹೊರೆ ಮಾಡುತ್ತಿದೆ ಎಂದು ಆರೋಪಿಸಿದರು.
Advertisement