
ನವದೆಹಲಿ: ಕಳೆದೆರಡು ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ತಣ್ಣಗಾಗಿದ್ದ ಮಳೆರಾಯ ಮತ್ತೆ ಅಬ್ಬರಿಸುವ ಮುನ್ಸೂಚನೆ ನೀಡಿದ್ದು, ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹೌದು.. ಮುಂದಿನ 3 ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜೂನ್ 20ರವರೆಗೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಅಂತೆಯೇ ಗಂಟೆಗೆ 40 ರಿಂದ50 ಕಿ.ಮೀ ವೇಗದಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಪ್ರಮುಖವಾಗಿ ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಯಂತೆ ಭಾರೀ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಕಲಬುರಗಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಲ್ಲೂ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಭಾರತದ ಕೆಲ ರಾಜ್ಯಗಳಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ, ಉತ್ತರ ಭಾರತದ ಬಹುತೇಕ ಭಾಗಗಳಲ್ಲಿ ಬಿಸಿಲಿನ ತಾಪಕ್ಕೆ ಜನಜೀವನ ದುಸ್ತರವಾಗಿದೆ. ಅಲ್ಲಿನ ಜನರು ಮಳೆಯ ನಿರೀಕ್ಷೆಯಲ್ಲಿದ್ದಾರೆ.
ಬೆಂಗಳೂರಿನಲ್ಲಿ ಮತ್ತೆ ಸಂಜೆ ವರ್ಷಧಾರೆ
ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಈಗ ಮುಂದಿನ ಕೆಲವು ದಿನ ಇದೇ ರೀತಿ ಮಳೆಯಾಗುವ ಮುನ್ಸೂಚನೆ ಇದೆ. ಇನ್ನೊಂದೆಡೆ ಬೆಂಗಳೂರಿನಲ್ಲಿ ಮಳೆಯಿಂದ ಎದುರಾಗಬಹುದಾದ ಸಮಸ್ಯೆ ಬಗ್ಗೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಇನ್ನು ೫ ದಿನಗಳಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಳ್ಳಲಿದೆ ಎನ್ನಲಾಗಿದೆ.
ಏತನ್ಮಧ್ಯೆ, ಕಳೆದ ಎರಡು ದಿನಗಳಿಂದ ಬೆಂಗಳೂರು ನಗರದಲ್ಲಿ ತಾಪಮಾನ ಗಣನೀಯವಾಗಿ ಕುಸಿದಿದ್ದು, ಅದೇ ರೀತಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಇಂದಿನಿಂದ ಜೂನ್ 20 ರವರೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಸಂಜೆಯ ನಂತರ ಬೆಂಗಳೂರಿನಲ್ಲಿ ವಾಡಿಕೆಯಂತೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Advertisement