
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿದ್ದು, ಸೋಂಕನ್ನು ಪತ್ತೆಹಚ್ಚಲು ಮತ್ತು ಅಗತ್ಯ ಚಿಕಿತ್ಸೆ ನೀಡುವುದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಾಜ್ಯದಲ್ಲಿ ಡೆಂಘಿ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಗಳು, ಅಗತ್ಯ ಚಿಕಿತ್ಸೆ, ಔಷಧಿ ಮತ್ತು ಪ್ಲೇಟ್ಲೆಟ್ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಸೂಚನೆ ನೀಡಿದರು.
ಮುಖ್ಯಮಂತ್ರಿ ಕಚೇರಿಯ ಪ್ರಕಾರ, ನಿನ್ನೆಯವರೆಗೆ ರಾಜ್ಯದಲ್ಲಿ ಒಟ್ಟು 5,374 ಪ್ರಕರಣಗಳು ವರದಿಯಾಗಿದ್ದು, ಡೆಂಗ್ಯೂನಿಂದ ಐದು ಸಾವುಗಳು ವರದಿಯಾಗಿವೆ.
ಕೇಂದ್ರ ಸರ್ಕಾರದ ಮಾರ್ಗಸೂಚಿಗಳು ಡೆಂಗ್ಯೂ ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 0.5 ಕ್ಕಿಂತ ಹೆಚ್ಚಿರಬಾರದು ಎಂದು ಹೇಳುತ್ತದೆ.
ರಾಜ್ಯದಲ್ಲಿ ಸಾವಿನ ಪ್ರಮಾಣವು ಶೇಕಡಾ 0.09 ರಷ್ಟಿದೆ. ಇದು ನಿಗದಿತ ಮಿತಿಗಿಂತ ತುಂಬಾ ಕಡಿಮೆಯಾಗಿದೆ ಎಂದು ಸಿಎಂ ಕಚೇರಿ ಹೇಳಿದೆ.
ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ 1,230 ಪ್ರಕರಣಗಳು ವರದಿಯಾಗಿವೆ.
ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸರ್ಕಾರ ಡೆಂಗ್ಯೂ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ನಿಯಂತ್ರಣಕ್ಕೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯಗಳು, ಔಷಧಿಗಳು ಲಭ್ಯವಿರುವುದನ್ನು ಖಾತರಿಪಡಿಸಲು ಸೂಚಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ಆಶಾ ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳು, ಎನ್.ಎಸ್.ಎಸ್. ವಿದ್ಯಾರ್ಥಿಗಳು ಮತ್ತಿತರ ಸ್ವಯಂ ಸೇವಕರ ನೆರವಿನೊಂದಿಗೆ ಮನೆ ಮನೆ ಸಮೀಕ್ಷೆ ನಡೆಸಿ ಅರಿವು ಮೂಡಿಸಲು ಸೂಚಿಸಬೇಕು. ಪ್ರತಿ ಶುಕ್ರವಾರ source reduction activity (ರೋಗ ಹರಡುವ ಮೂಲ ಪತ್ತೆ ಮತ್ತು ನಾಶ) ವಿಶೇಷ ಅಭಿಯಾನ ಮಾಡಬೇಕು. ಪ್ರತಿ ವಾರ ಬಿಬಿಎಂಪಿ, ನಗರಾಭಿವೃದ್ಧಿ ಮತ್ತು ಆರೋಗ್ಯ ಇಲಾಖೆಯವರು ಜಂಟಿಯಾಗಿ ಡೆಂಘಿ ನಿಯಂತ್ರಣ ಕುರಿತು ಪರಿಶೀಲನೆ ನಡೆಸಬೇಕು ಎಂದು ಸಿಎಂ ಸೂಚನೆ ನೀಡಿದರು.
Advertisement