
ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮಧ್ಯಂತರ ಜಾಮೀನು ಅವಧಿಯನ್ನು ಹೈಕೋರ್ಟ್ ಶುಕ್ರವಾರ ವಿಸ್ತರಣೆ ಮಾಡಿದೆ.
ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ(ಪೋಕ್ಸೋ) ಅಡಿ ಕೇಸ್ ದಾಖಲಿಸಲಾಗಿದೆ. ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಸಿಐಡಿ ಎಸ್ಪಿಪಿಗೆ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಎರಡು ವಾರ ಮುಂದೂಡಿದೆ. ಅಲ್ಲದೆ ಆರೋಪಿಯ ಮಧ್ಯಂತರ ಜಾಮೀನು ಅವಧಿ ವಿಸ್ತರಿಸಿ ಆದೇಶ ಹೊರಡಿಸಿದೆ.
ಇನ್ನು ಈ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಗುರುವಾರ ಯಡಿಯೂರಪ್ಪ ಅವರ ವಿರುದ್ಧ ನ್ಯಾಯಾಲಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ಬಾಲಕಿ ತಾಯಿ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೊಲೀಸರು ಯಡಿಯೂರಪ್ಪ ಅವರ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ(ಪೋಕ್ಸೋ) ಅಡಿ ಪ್ರಕರಣ ದಾಖಲಿಸಿದ್ದರು. ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು.
Advertisement