ಬೆಂಗಳೂರು: ಹಲವು ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಲಯ ಶನಿವಾರ ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ನಾಲ್ಕು ದಿನಗಳ ವಿಶೇಷ ತನಿಖಾ ತಂಡದ(ಎಸ್‌ಐಟಿ) ಕಸ್ಟಡಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ಪ್ರಜ್ವಲ್ ರೇವಣ್ಣ ಅವರನ್ನು 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಲಾಯಿತು.
ಆರೋಪಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು, ಪ್ರಜ್ವಲ್ ರೇವಣ್ಣ ಅವರನ್ನು ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ 33 ವರ್ಷದ ಮೊಮ್ಮಗನ ವಿರುದ್ಧ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಎಸ್‌ಐಟಿ ತನಿಖೆ ನಡೆಸುತ್ತಿದೆ.
ಏಪ್ರಿಲ್ 28 ರಂದು ಪ್ರಜ್ವಲ್ ರೇವಣ್ಣ ವಿರುದ್ದ ಹೊಳೆನರಸೀಪುರದಲ್ಲಿ ಮೊದಲು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಇದಾದ ಬಳಿಕ ಅತ್ಯಾಚಾರ ಎಸಗಿದ ಪ್ರಕರಣವೂ ದಾಖಲಾಗಿದ್ದವು. ಒಂದು ತಿಂಗಳಿಗೂ ಅಧಿಕ ಕಾಲ ವಿದೇಶದಲ್ಲಿಯೇ ಇದ್ದ ಪ್ರಜ್ವಲ್ ರೇವಣ್ಣ ಆನಂತರ ವಿಶೇಷ ತನಿಖಾ ತಂಡದ ಎದುರು ಶರಣಾಗಿದ್ದರು.
Advertisement