ಬೆಂಗಳೂರು: ಟೀಂ ಇಂಡಿಯಾ ಟಿ20 ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಂ ಇಂಡಿಯಾಗೆ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಅಭಿನಂದನೆಗಳು. ನಿರ್ಣಾಯಕ ಹಂತದಲ್ಲಿ ನಮ್ಮವರು ತೋರಿದ ಸಂಘಟಿತ ಪ್ರದರ್ಶನ ಪಂದ್ಯದ ದಿಕ್ಕನ್ನೇ ಬದಲಿಸಿತು. ಇಡೀ ಪಂದ್ಯಾವಳಿಯಲ್ಲಿ ಒಂದು ಪಂದ್ಯವನ್ನೂ ಸೋಲದೆ ಅಜೇಯರಾಗುಳಿದು ವಿಶ್ವಕಪ್ ಟಿ20 ಜಯಿಸಿದ ಭಾರತ ತಂಡದ ಸಾಧನೆ ನಿಜಕ್ಕೂ ಶ್ಲಾಘನೀಯ ಎಂದು ಹೇಳಿದ್ದಾರೆ.
ಒಂದು ಹಂತದಲ್ಲಿ ಗೆಲುವಿನ ಸನಿಹಕ್ಕೆ ಬಂದು ಕಡೇ ಕ್ಷಣದಲ್ಲಿ ಪಂದ್ಯ ಸೋತಿರುವ ದಕ್ಷಿಣ ಆಫ್ರಿಕಾ ತಂಡದ ಆಟವೂ ಮೆಚ್ಚತಕ್ಕದ್ದೆ. ಇದೊಂದು ಐತಿಹಾಸಿಕ ಕ್ಷಣ. ಕ್ರಿಕೆಟ್ ಪ್ರೇಮಿಯಾದ ನನಗೆ ನಮ್ಮವರ ಗೆಲುವು ಅತ್ಯಂತ ಖುಷಿಕೊಟ್ಟಿದೆ. ಕೋಟ್ಯಂತರ ಜನರ ಹರಕೆ, ಹಾರೈಕೆಗಳು ಕಡೆಗೂ ಫಲಕೊಟ್ಟಿದೆ, ವಿಶ್ವಕಪ್ ಮರಳಿ ಭಾರತದ ಮಡಿಲು ಸೇರಿದೆ ಎಂದು ತಿಳಿಸಿದ್ದಾರೆ.
ಅದರಂತೆ ಹೆಚ್'ಡಿ.ಕುಮಾರಸ್ವಾಮಿಯವರು ಪೋಸ್ಟ್ ಮಾಡಿ, ಟಿ20 ವಿಶ್ವಕಪ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಗೆಲುವು ಸಾಧಿಸಿದ ರೋಹಿತ್ ಶರ್ಮ ನೇತೃತ್ವದ ಭಾರತ ತಂಡಕ್ಕೆ ಶುಭಾಶಯಗಳು ಮತ್ತು ಸಮಸ್ತ ಭಾರತೀಯರ ಪರವಾಗಿ ಅಭಿನಂದನೆಗಳು.
ಅನೇಕ ರೋಚಕ ತಿರುವುಗಳ ಫೈನಲ್ ಪಂದ್ಯ ಭಾರತೀಯರೆಲ್ಲರನ್ನೂ ತುದಿಗಾಲ ಮೇಲೆ ನಿಲ್ಲಿಸಿತ್ತು. ಎಲ್ಲರ ಆಕಾಂಕ್ಷೆ, ನಿರೀಕ್ಷೆಯಂತೆ ಭಾರತ ಗೆದ್ದು ಬೀಗಿದೆ. ನಮ್ಮ ಹೆಮ್ಮೆಯ ತಂಡಕ್ಕೆ ಶುಭವಾಗಲಿ ಎಂದು ತಿಳಿಸಿದ್ದಾರೆ.
Advertisement