ಬೆಂಗಳೂರು, ಮಂಗಳೂರು ಬಾಂಬ್ ಸ್ಫೋಟದ ನಡುವೆ ಸಾಮ್ಯತೆ: ಸಿದ್ದು, ಡಿಕೆಶಿ ವ್ಯತಿರಿಕ್ತ ಹೇಳಿಕೆ!

ಬೆಂಗಳೂರು ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೂ ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣದ ನಡುವೆ ಸಾಮ್ಯತೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯ, ಡಿಕೆ ಶಿವಕುಮಾರ್
ಸಿದ್ದರಾಮಯ್ಯ, ಡಿಕೆ ಶಿವಕುಮಾರ್

ಮೈಸೂರು/ಬೆಂಗಳೂರು: ಬೆಂಗಳೂರು ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೂ ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣದ ನಡುವೆ ಸಾಮ್ಯತೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ. ಹೌದು ಶನಿವಾರ ಮೈಸೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಎರಡೂ ಪ್ರಕರಣಗಳ ನಡುವೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.

ಈ ಮಧ್ಯೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಬೆಂಗಳೂರಿನ ಕೆಫೆ ಸ್ಫೋಟಕ್ಕೂ ಮಂಗಳೂರಿನ ಕುಕ್ಕರ್ ಸ್ಫೋಟ ಪ್ರಕರಣಕ್ಕೂ ಸಂಬಂಧವಿರಬಹುದು.ಕೆಲವು ಸಾಮ್ಯತೆಗಳಿವೆ ಎಂದು ತೋರುತ್ತಿದೆ. ಬೆಂಗಳೂರಿನ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದರು.

ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳನ್ನು ಪೊಲೀಸರು ಶೀಘ್ರವೇ ಬಂಧಿಸುವ ವಿಶ್ವಾಸವಿದೆ ಎಂದು ಹೇಳಿದ ಸಿದ್ದರಾಮಯ್ಯ, ತಮ್ಮ ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಸುತ್ತಿದೆ ಎಂಬ ವಿಪಕ್ಷಗಳ ಆರೋಪವನ್ನು ತಳ್ಳಿಹಾಕಿದರು.

ಬಿಜೆಪಿ ಆಡಳಿತದಲ್ಲಿ ರಾಜ್ಯದಲ್ಲಿ ಬಾಂಬ್ ಸ್ಫೋಟಗಳು ನಡೆದಿದ್ದವು. ಆಗ ಅಲ್ಪಸಂಖ್ಯಾತರನ್ನು ಮೆಚ್ಚಿಸಲು ಸ್ಫೋಟಗಳು ನಡೆದಿವೆಯೇ? ಇಂತಹ ಹೇಳಿಕೆಗಳನ್ನು ಖಂಡಿಸುತ್ತೇನೆ. ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ಬಿಜೆಪಿಗೆ ಮನವಿ ಮಾಡಿದರು. ಇತ್ತೀಚೆಗೆ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಕ್ಕೆ ಸಂಬಂಧಿಸಿದಂತೆ ವಿಧಿವಿಜ್ಞಾನ ಪ್ರಯೋಗಾಲಯದಿಂದ ಸರ್ಕಾರಕ್ಕೆ ಇನ್ನೂ ವರದಿ ಬಂದಿಲ್ಲ ಎಂದರು. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಿದ್ದರಾಮಯ್ಯ, ಡಿಕೆ ಶಿವಕುಮಾರ್
ಸರಣಿ ಸ್ಫೋಟದ ಪ್ರಯೋಗಾರ್ಥ ರಾಮೇಶ್ವರಂ ಕೆಫೆ ಬ್ಲಾಸ್ಟ್: ಸಿ.ಟಿ ರವಿ

ತದನಂತರ ಬೆಂಗಳೂರಿನಲ್ಲಿ ಸ್ಫೋಟ ನಡೆದ ಸ್ಥಳಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ, ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆಯ ಪ್ರಗತಿಯ ಕುರಿತು ಮಾಹಿತಿ ನೀಡಿದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿ ಮಾತನಾಡಿದರು.

ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ, ಸ್ಫೋಟ ಪ್ರಕರಣದ ತನಿಖೆ ನಡೆಸುವಾಗ ತಂತ್ರಜ್ಞಾನವನ್ನು ಬಳಸಿಕೊಳ್ಳುವಂತೆ ಮತ್ತು ಬೆಂಗಳೂರಿನ ಜನನಿಬಿಡ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದರು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com