ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಪಾಕ್ ಪರ ಘೋಷಣೆ ಕೂಗಿದ್ದು ನಿಜ. ಡಿಕೆಶಿ ವಿರುದ್ಧದ ಇಡಿ ಪ್ರಕರಣ ರದ್ದು. ಪ್ರತಿ ಜಿಲ್ಲೆಗೆ 2 ಕೋಟಿ 'ಬರ' ಅನುದಾನ! ಇಂದಿನ ಸುದ್ದಿ ಮುಖ್ಯಾಂಶಗಳು: 05-03-24

1.

ವಿಧಾನಸೌದ ಆವರಣದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದು ನಿಜ

ವಿಧಾನಸೌಧ ಆವರಣದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ಬಂಧಿತ ಮೂವರು ಆರೋಪಿಗಳನ್ನು ಕೋರಮಂಗಲದಲ್ಲಿರುವ ಬೆಂಗಳೂರಿನ ಒಂದನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಿದ್ದು ಕೋರ್ಟ್ ಎರಡು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ವಿಧಾನಸೌಧದ ಆವರಣದಲ್ಲಿಯೇ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತವಾಗಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದ ವಿಧಾನಸೌಧ ಪೊಲೀಸರು, ದೆಹಲಿ ಮೂಲದ ಇಲ್ತಾಜ್, ಆರ್‌.ಟಿ. ನಗರ ಮೂಲದ ಮುನಾವರ್ ಹಾಗೂ ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಎಂಬುವರನ್ನು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಕಾಂಗ್ರೆಸ್ ಕಾರ್ಯಕರ್ತರಾಗಿದ್ದು ಮೊಹಮ್ಮದ್ ಶಫಿ ನಾಶಿಪುಡಿ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಎನ್ನಲಾಗಿದೆ. ರಾಜ್ಯಸಭೆ ಚುನಾವಣೆ ಫಲಿತಾಂಶದ ಬಲಿಕ ಡಾ. ನಾಸಿರ್ ಹುಸೇನ್ ಅಭಿಮಾನಿಗಳು ಸಂಭ್ರಮಾಚರಣೆ ವೇಳೆ ವಿಧಾನಸೌಧ ಆವರಣದಲ್ಲಿ ಪಾಕ್ ಪರ ಘೋಷಣೆ ಕೂಗಿರುವುದು ಎಫ್ಎಸ್ ಎಲ್ ವರದಿಯಲ್ಲಿ ದೃಢಪಟ್ಟಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ. ಎಫ್ ಎಸ್ ಎಲ್ ವರದಿ ಆಧರಿಸಿ ಮೂವರನ್ನ ಬಂಧಿಸಲಾಗಿದೆ. ವರದಿಯಲ್ಲಿ ಯಾರು ಘೋಷಣೆ ಕೂಗಿದ್ದಾರೆಂದು ಹೇಳಿಲ್ಲ. ಯಾಕೆ ಕೂಗಿದ್ದಾರೆಂದು ಪರಿಶೀಲಿಸಿ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

2.

ಬರ ನಿರ್ವಹಣೆಗಾಗಿ ಪ್ರತಿ ಜಿಲ್ಲೆಗೆ 2 ಕೋಟಿ ಅನುದಾನ

ಕುಡಿಯುವ ನೀರು, ಬರ ನಿರ್ವಹಣೆ, ಕೃಷಿ, ಮೇವು ಹಾಗೂ ಉದ್ಯೋಗಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಇಂದು ವಿಡಿಯೋ ಸಂವಾದ ನಡೆಸಿದರು. ಈ ಬಾರಿ ಬರಗಾಲ ಎದುರಾಗಿದೆ. ಹಿಂಗಾರು ಹಾಗೂ ಮುಂಗಾರು ಮಳೆ ಕೊರತೆಯಾಗಿ ಬರಗಾಲ ಪರಿಸ್ಥಿತಿ ಉದ್ಭವಿಸಿದೆ. ಜೂನ್ ಅಂತ್ಯದವರೆಗೆ ಬರ ನಿರ್ವಹಣೆಗೆ ಸೂಕ್ತ ಯೋಜನೆ ರೂಪಿಸಬೇಕು. ಕುಡಿಯುವ ನೀರು ಕೊರತೆ, ಬೆಳೆಹಾನಿ, ಮೇವು ಕೊರತೆ ಸೇರಿದಂತೆ ಇದುವರಗೆ ಆಗಿರುವ ಸಮಸ್ಯೆಗಳು ಮತ್ತು ಮುಂದೆ ಉದ್ಬವಿಸಬಹುದಾದ ಸಮಸ್ಯೆಗಳ ನಿವಾರಣೆಗೆ ಈಗಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ವೇಳೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಅಂತರ್ಜಲ ಕುಸಿತದಿಂದಾಗಿ ಬೆಂಗಳೂರಿನಲ್ಲಿ 3000ಕ್ಕೂ ಹೆಚ್ಚು ಬೋರ್‌ವೆಲ್‌ಗಳು ಬತ್ತಿ ಹೋಗಿವೆ. ಕುಡಿಯುವ ನೀರಿನ ಸಮಸ್ಯೆಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಸಂಬಂಧ ಅಧಿಕಾರಿಗಳೊಂದಿಗೆ ನಡೆಸಿದ್ದೇನೆ ಎಂದರು.

3.

ಬೆಂಗಳೂರಿನಲ್ಲಿ ಮತ್ತೆ ಬಾಂಬ್ ಸ್ಫೋಟಿಸುವ ಬೆದರಿಕೆ ಇಮೇಲ್

ರಾಮೇಶ್ವಂರ ಕೆಫೆ ಬಾಂಬ್ ಸ್ಫೋಟ ಪ್ರಕರಣ ಬೆನ್ನಲ್ಲೆ ಇದೀಗ ಬೆಂಗಳೂರಿನಲ್ಲಿ ಮತ್ತೆ ಬಾಂಬ್ ಸ್ಫೋಟಿಸುವ ಬೆದರಿಕೆ ಇಮೇಲ್ ಬಂದಿದೆ. ಮುಖ್ಯಮಂತ್ರಿ, ಗೃಹ ಮಂತ್ರಿ, ಡಿಸಿಎಂ, ಮತ್ತು ಬೆಂಗಳೂರು ನಗರ ಪೊಲೀಸ್ ಕಮಿಷನರ್​ಗೆ ಬೆದರಿಕೆ ಇ-ಮೇಲ್ ಬಂದಿದ್ದು 2.5 ಮಿಲಿಯನ್ ಡಾಲರ್ ಗೆ ನೀಡಬೇಕು ಎಂದು ಕೇಳಿದ್ದಾರೆ. ಇಲ್ಲದಿದ್ದರೆ ರಾಮೇಶ್ವರಂ ಕೆಫೆ ರೀತಿಯಲ್ಲೇ ಬಾಂಬ್ ಸ್ಫೋಟಿಸುವುದಾಗಿ ಇಮೇಲ್​ನಲ್ಲಿ ಬೆದರಿಕೆ ಹಾಕಲಾಗಿದೆ. ಈ ಇಮೇಲ್​ ಬೆದರಿಕೆ ಸಂಬಂಧ ಸಿಸಿಬಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ. Shahidkhan10786@protonmail.com ಎನ್ನುವ ಮೇಲ್ ಐಡಿಯಿಂದ ಬೆದರಿಕೆ ಬಂದಿದ್ದು, ಸದ್ಯ ಸಿಸಿಬಿ ಪೊಲೀಸರು ಈ ಇಮೇಲ್ ಬಗ್ಗೆ ತನಿಖೆ ನಡೆಸಿದ್ದಾರೆ.

4.

ಆಸಿಡ್ ದಾಳಿಯ ಸಂತ್ರಸ್ತ ಬಾಲಕಿಯರಿಗೆ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆಗಾಗಿ 4 ಲಕ್ಷ ರೂ ಪರಿಹಾರ

ಕಡಬದ ಆಸಿಡ್ ದಾಳಿಯ ಸಂತ್ರಸ್ತ ಬಾಲಕಿಯರಿಗೆ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆಗಾಗಿ 4 ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ. ನಿನ್ನೆ ಆ್ಯಸಿಡ್​​ ದಾಳಿಗೊಳಗಾಗಿ ನಗರದ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರನ್ನು ನಾಗಲಕ್ಷ್ಮಿ ಚೌಧರಿ ಅವರು ಇಂದು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಇದೇ ವೇಳೆ ಸಂತ್ರಸ್ತೆಯರು ಹಾಗೂ ಪೋಷಕರಿಗೆ ಸಾಂತ್ವನ ಹೇಳಿದರು. ಈ ಘಟನೆಯ ಬಗ್ಗೆ ಡಿಸಿ ಕಚೇರಿಯಲ್ಲಿ ಎಲ್ಲಾ ಪೊಲೀಸ್ ಅಧಿಕಾರಿಗಳ ಜೊತೆ ಸಭೆ​ ಕರೆಯಲಾಗಿದೆ. ಮೂವರು ವಿದ್ಯಾರ್ಥಿನಿಯರೂ ಅಪಾಯದಿಂದ ಪಾರಾಗಿದ್ದಾರೆ ಎಂದರು.

5.

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಇಡಿ ಪ್ರಕರಣ ರದ್ದು

ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ 120(ಬಿ) ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದೆ. ಇದರಿಂದಾಗಿ ಡಿಸಿಎಂ ಡಿಕೆ ಶಿವಕುಮಾರ್ ಗೆ ಲೋಕಸಭೆ ಚುನಾವಣೆಗೂ ಮುನ್ನ ಬಿಗ್ ರಿಲೀಫ್ ಸಿಕ್ಕಂತಾಗಿದೆ. ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಈ ತೀರ್ಪು ನೀಡಿದೆ. ಬೆಂಗಳೂರು ಸೇರಿದಂತೆ ಇತರೆಡೆ ಡಿಕೆ ಶಿವಕುಮಾರ್ ಗೆ ಸೇರಿದ ಮನೆಗಳ ಮೇಲೆ 2017ರ ಆಗಸ್ಟ್ 2ರಂದು ಆದಾಯ ತೆರಿಗೆ ಇಲಾಖೆ ದಾಳಿ ಮಾಡಿತ್ತು. ಇನ್ನು ಶಿವಕುಮಾರ್ ಆಪ್ತರ ಮನೆಯಲ್ಲಿ ಸಿಕ್ಕ ಹಣವನ್ನು, ಶಿವಕುಮಾರ್ ಬೇನಾಮಿಯಾಗಿ ಇರಿಸಿದ್ದಾರೆ ಎಂದು ಆರೋಪಿಸಿ ಸಿಬಿಐ 2020ರಲ್ಲಿ ಎಫ್ಐಆರ್ ದಾಖಲಿಸಿತ್ತು. ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 2019ರ ಆಗಸ್ಟ್ ನಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಹೈಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪುನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

Related Stories

No stories found.

Advertisement

X
Kannada Prabha
www.kannadaprabha.com