ಶೇ.60ರಷ್ಟು ಕಡ್ಡಾಯ ಕನ್ನಡ ನಾಮಫಲಕ: ಮಾ.12ರೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚನೆ

ರಾಜ್ಯದಲ್ಲಿ ಶೇ.60ರಷ್ಟು ಕನ್ನಡ ಇರುವ ನಾಮಫಲಕ ಅಳವಡಿಕೆಗೆ ಸಂಬಂಧಿಸಿದಂತೆ, ಮಾ.12ರೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ರಾಜ್ಯದಲ್ಲಿ ಶೇ.60ರಷ್ಟು ಕನ್ನಡ ಇರುವ ನಾಮಫಲಕ ಅಳವಡಿಕೆಗೆ ಸಂಬಂಧಿಸಿದಂತೆ, ಮಾ.12ರೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ 2024ಕ್ಕೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಕಾಸಸೌಧದಲ್ಲಿ ಗುರುವಾರ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು, ವಿಧಾನಸಭಾ ಕ್ಷೇತ್ರವಾರು ಖುದ್ದು ಜಿಲ್ಲಾಧಿಕಾರಿಗಳು ಭೇಟಿ ನೀಡಿ, ನಾಮಫಲಕ ಅಳವಡಿಕೆ ಪ್ರಗತಿ ಬಗ್ಗೆ ಮಾರ್ಚ್ 12ರೊಳಗೆ ವರದಿ ನೀಡಬೇಕು ಎಂದು ಸೂಚನೆ ನೀಡಿದರು.

ಇದೇ ವೇಳೆ ವಿಧೇಯಕದಲ್ಲಿನ ಅಂಶಗಳ ಕಟ್ಟುನಿಟ್ಟಿನ ಅನುಷ್ಠಾನ ಕುರಿತಂತೆ ಹಲವು ನಿರ್ದೇಶನಗಳನ್ನು ನೀಡಿದರು.

“ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ 2024ದ ಅನ್ವಯ ವಾಣಿಜ್ಯ ಉದ್ದಿಮೆಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಭಾಷೆ ಇರಲೇಬೇಕು. ಅದಕ್ಕೆ ಸಂಬಂಧಿಸಿದಂತೆ ಪ್ರತಿ ಜಿಲ್ಲೆಗಳಲ್ಲಿನ ಪ್ರಗತಿ ಕುರಿತಂತೆ ಖುದ್ದು ಜಿಲ್ಲಾಧಿಕಾರಿಗಳೇ ಪರಿಶೀಲನೆ ನಡೆಸಬೇಕು. ನಿಮ್ಮ ಜಿಲ್ಲೆ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಿಗೆ ತೆರಳಿ ಅಲ್ಲಿನ ಪ್ರಗತಿಯನ್ನು ಅವಲೋಕಿಸಬೇಕು. ಮಾರ್ಚ್ 12ರೊಳಗೆ ಪರಿಶೀಲನೆ ನಡೆಸಿ, ವಿಧೇಯಕ ಅನುಷ್ಠಾನದ ಕುರಿತು ವರದಿ ನೀಡಬೇಕು ಸೂಚನೆ ನೀಡಿದರು.

ಸಂಗ್ರಹ ಚಿತ್ರ
ಶೇ.60ರಷ್ಟು ಕಡ್ಡಾಯ ಕನ್ನಡ ನಾಮಫಲಕ: ಇಂದು ಕೊನೆ ದಿನ, ನಾಳೆಯಿಂದಲೇ ಬೀಗ ಜಡಿಯಲು, ದಂಡ ವಿಧಿಸಲು ಪಾಲಿಕೆ ನಿರ್ಧಾರ!

ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಅಳವಡಿಕೆಯ ಗಡುವು ಮಾರ್ಚ್‌ 15ರವರೆಗೆ ಮುಂದೂಡಲಾಗಿದ್ದರೂ, ಈವರೆಗಿನ ಪ್ರಗತಿಯ ವರದಿ ನೀಡಬೇಕು. ಜಿಲ್ಲಾಧಿಕಾರಿ‌ ನೇತೃತ್ವದಲ್ಲಿ ಜಿಲ್ಲಾ ಸಮಿತಿ ಹಾಗೂ ತಾಲ್ಲೂಕು ಮಟ್ಟದಲ್ಲಿ‌ ಉಪ ವಿಭಾಗಾಧಿಕಾರಿ ಅಧ್ಯಯತೆಯಲ್ಲಿ ಸಭೆ ನಡೆಸಿ ಸಮಸ್ಯೆಗಳನ್ನು ಇತ್ಯರ್ಥಗೊಳಿಸಬೇಕು. ಯಾವುದೇ ಕೆಲಸ ಇದ್ದರೂ ಕಾರಣಗಳನ್ನು ‌ಕೇಳುವುದಿಲ್ಲ. ಖುದ್ದು ಜಿಲ್ಲಾಧಿಕಾರಿಗಳು ತಮ್ಮ ಅಧ್ಯಕ್ಷತೆಯ ಸಭೆ ನಡೆಸಬೇಕು” ಎಂದು ಸೂಚನೆ‌ ನೀಡಿದರು.

ಗಡಿ ಜಿಲ್ಲೆಗಳಾದ ಬೆಳಗಾವಿ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ದಕ್ಷಿಣ ಕನ್ನಡಗಳಲ್ಲಿ ಕನ್ನಡ ನಾಮಫಲಕ ಅಳವಡಿಕೆಗೆ ಹೆಚ್ಚಿನ ಒತ್ತು ನೀಡಬೇಕು. ಆ ಜಿಲ್ಲೆಗಳಲ್ಲಿ ಕನ್ನಡಪರ ಸಂಘಟನೆಗಳು ಹೆಚ್ಚಾಗಿ ಪ್ರತಿಭಟನೆ ನಡೆಸುತ್ತಿದ್ದು, ಅದನ್ನು ನಿಯಂತ್ರಿಸಲು ಕನ್ನಡ ನಾಮಫಲಕ ಅಳವಡಿಕೆ ಶೇ. 100ರಷ್ಟು ಆಗಬೇಕು.

ಖಾನಾಪುರ, ನಿಪ್ಪಾಣಿ, ಚಿಕ್ಕೋಡಿಯಂತಹ ತಾಲೂಕುಗಳಲ್ಲಿ ಮರಾಠಿ ನಾಮಫಲಕ ಅಳವಡಿಕೆಯ ದೂರುಗಳಿದ್ದು, ಅವುಗಳನ್ನು ತೆರವುಗೊಳಿಸಿ ಕನ್ನಡ ನಾಮಫಲಕ ಅಳವಡಿಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ಕನ್ನಡ ನಾಮಫಲಕ ಅಳವಡಿಕೆ ಕುರಿತಂತೆ ವ್ಯಾಪಾರಿಗಳಲ್ಲಿ ಜಾಗೃತಿ ಮೂಡಿಸಬೇಕು ಹಾಗೂ ನಾಮಫಲಕ ಅಳವಡಿಸದವರಿಗೆ ನೋಟಿಸ್‌ ನೀಡಬೇಕು. ಕನ್ನಡ ನಾಮಫಲಕ ಅಳವಡಿಸದಿದ್ದರೆ ಉದ್ದಿಮೆ ಪರವಾನಗಿ ರದ್ದು ಸೇರಿದಂತೆ ದುಬಾರಿ ದಂಡ ವಿಧಿಸಲಾಗುವುದು ಎಂಬ ಎಚ್ಚರಿಕೆಯನ್ನು ಉದ್ದಿಮೆದಾರರಿಗೆ ನೀಡಬೇಕು.

ಯಾವುದೇ ಕೆಲಸ ಇದ್ದರೂ ಸರ್ಕಾರ ತಂದಿರುವ ಈ ಕಾನೂನನ್ನು ಜಾರಿಗೆ ತರಬೇಕು. ಕೆಲ ಜಿಲ್ಲೆಗಳಿಗೆ ನಾನೇ ಖುದ್ದು ಭೇಟಿ ನೀಡಿ ಪರಿಶೀಲನೆ‌ ನಡೆಸುತ್ತೇನೆ. ಅನುಷ್ಠಾನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ತಿಳಿಸಿದರು‌.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com