ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ. ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೈ ನಾಯಕನ ವಿರುದ್ಧ FIR. ಕೈ ಕಾರ್ಯಕರ್ತನ ಬರ್ಬರ ಹತ್ಯೆ - ಈ ದಿನದ ಸುದ್ದಿ ಮುಖ್ಯಾಂಶಗಳು: 12-03-2024

ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

1. ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 3,75ರಷ್ಟು ಹೆಚ್ಚಳ ಲೋಕಸಭೆ

ಚುನಾವಣೆಗೂ ಮುನ್ನ ರಾಜ್ಯ ಸರ್ಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆಯನ್ನು ಶೇಕಡ 3.75ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಲೋಕಸಭೆ ಚುನಾವಣೆ ಅಧಿಸೂಚನೆ ಹೊರಡಿಸುವ ಮೊದಲೇ ಈ ಕುರಿತು ಸರ್ಕಾರ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇಕಡ 38.75ರಿಂದ ಶೇ. 42.5ಕ್ಕೆ ಹೆಚ್ಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. 2024ರ ಜನವರಿ 1ರಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ಇನ್ನು ಕೇಂದ್ರ ವೇತನ ನೀತಿಯಂತೆ ವೇತನ ಪಡೆಯುವ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.4ರಷ್ಟು ಏರಿಸಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಪ್ರತಿ ವರ್ಷ 1792.71 ಕೋಟಿ ರೂಪಾಯಿ ಹೆಚ್ಚುವರಿ ಹೊರೆ ಬೀಳಲಿದೆ.

2. Narendra modi ವಿರುದ್ಧ ಆಕ್ಷೇಪಾರ್ಹ ಹೇಳಿಕೆ: Congress ನಾಯಕನ ವಿರುದ್ಧ FIR

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕನ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಬಿಜೆಪಿ ಮಂಡಲ ಅಧ್ಯಕ್ಷ ಕಲ್ಲೇಶಯ್ಯ ಸಲ್ಲಿಸಿದ ದೂರಿನ ಆಧಾರದ ಮೇಲೆ ಕಾರ್ಮಿಕ ಕಲ್ಯಾಣ ಮಂಡಳಿ ಅಧ್ಯಕ್ಷ ಜಿಎಸ್ ಮಂಜುನಾಥ್ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಜುನಾಥ್ ಹೇಳಿಕೆಯಿಂದ ಸಮಾಜದಲ್ಲಿ ಶಾಂತಿ ಕದಡುವ ಮೂಲಕ ಪ್ರಧಾನಿ ಹುದ್ದೆಗೆ ಅಪಖ್ಯಾತಿ ಬಂದಿದೆ ಎಂದು ದೂರುದಾರರು ತಿಳಿಸಿದ್ದಾರೆ. ಪೊಲೀಸರು ಮಂಜುನಾಥ್ ವಿರುದ್ಧ ಐಪಿಸಿ ಸೆಕ್ಷನ್ 504 ಮತ್ತು 506ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನಿನ್ನೆ ಜನರನ್ನುದ್ದೇಶಿಸಿ ಮಾತನಾಡಿದ ಮಂಜುನಾಥ್, ಚುನಾವಣೆ ಬರುತ್ತಿದ್ದು, ಇದೀಗ ಗ್ಯಾಸ್ ಸಿಲಿಂಡರ್ ಬೆಲೆ 100 ರೂ. ಇಳಿಸಲಾಗಿದೆ. ಆತ ಸಿಕ್ಕರೆ ನನ್ನ ಕಾಲಲ್ಲಿ ಏನಿದೆಯೋ ಅದರಲ್ಲೇ ಹೊಡೆಯುತ್ತೇನೆ ಎಂದು ಹೇಳಿದ್ದರು.

3. ರಾಜ್ಯದ ಮತ್ತೆರೆಡು ವಂದೇಭಾರತ್ ರೈಲಿಗೆ ಮೋದಿ ಚಾಲನೆ

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕಲಬುರಗಿ-ಬೆಂಗಳೂರು, ಮೈಸೂರು-ಡಾ. ಎಂಜಿಆರ್ ಸೆಂಟ್ರಲ್ ಚೆನ್ನೈ ಮತ್ತು ತಿರುವನಂತಪುರಂನಿಂದ ಮಂಗಳೂರುವರೆಗೆ ವಿಸ್ತರಿಸಿದ ರೈಲು ಸೇರಿದಂತೆ 10 ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಹಸಿರು ನಿಶಾನೆ ತೋರಿದರು. ಇದರ ಜೊತೆಗೆ ದೇಶದ ವಿವಿಧ ಭಾಗಗಳಲ್ಲಿನ 85 ಸಾವಿರ ಕೋಟಿ ರೂಪಾಯಿಗಳ ರೈಲ್ವೆ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ನಂತರ ಮಾತನಾಡಿದ ಪ್ರಧಾನಿ ಮೋದಿ, ನಾನು ನನ್ನ ಜೀವನವನ್ನು ರೈಲ್ವೆ ಹಳಿಗಳ ಮೇಲೆ ಪ್ರಾರಂಭಿಸಿದೆ. ಹಾಗಾಗಿ ರೈಲ್ವೆ ಸಂಪರ್ಕ ಎಷ್ಟು ಕೆಟ್ಟದಾಗಿದೆ ಎನ್ನುವುದು ನನಗೆ ತಿಳಿದಿದೆ. ಹೀಗಾಗಿಯೇ ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರ ರೈಲ್ವೆ ಅಭಿವೃದ್ಧಿಗೆ ಹಿಂದಿನ ಸರ್ಕಾರಕ್ಕಿಂತಲೂ 6 ಪಟ್ಟು ಹೆಚ್ಚು ಹಣವನ್ನು ಖರ್ಚು ಮಾಡಿದೆ ಎಂದು ಹೇಳಿದ್ದಾರೆ.

4. ಮೆಣಸಿನಕಾಯಿ ಬೆಲೆ ಕುಸಿತ: ಆಕ್ರೋಶಿತ ರೈತರಿಂದ ವಾಹನಗಳಿಗೆ ಬೆಂಕಿ

ಬ್ಯಾಡಗಿ ಮೆಣಸಿನಕಾಯಿ ಬೆಲೆ ಹಠಾತ್ ಕುಸಿತಗೊಂಡಿದ್ದು, ಇದರಿಂದ ಆಕ್ರೋಶಗೊಂಡ ರೈತರು ನಿನ್ನೆ ಎಪಿಎಂಸಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಅಲ್ಲದೆ 12 ವಾಹನ ಹಾಗೂ 1 ಅಗ್ನಿಶಾಮಕ ವಾಹನಕ್ಕೂ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದರು. ಇದರ ಬೆನ್ನಲ್ಲೇ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸೂಚನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ದರ ಕುಸಿತಕ್ಕೆ ಕಾರಣ ಕುರಿತು ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದೇನೆ. ವರದಿ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಕಳೆದ ವಾರ ಪ್ರತಿ ಕ್ವಿಂಟಾಲ್‌ ಮೆಣಸಿನಕಾಯಿ ಬೆಲೆ 20 ಸಾವಿರ ರೂಪಾಯಿ ಇತ್ತು. ಈಗ ಕ್ವಿಂಟಾಲ್‌ ಮೆಣಸಿನಕಾಯಿ ಬೆಲೆ 12 ಸಾವಿರ ರೂಪಾಯಿಗೆ ಕುಸಿದಿರುವುದು ರೈತರು ಆಕ್ರೋಶಕ್ಕೆ ಕಾರಣವಾಗಿತ್ತು.

5. ವಿಸಿ ನಾಲೆಗೆ ಉರುಳಿ ಬಿದ್ದ ಕಾರು: ಓರ್ವ ಸಾವು

ತಡೆಗೋಡೆ ಇಲ್ಲದ ಕಾರಣ ಮಂಡ್ಯದ ವಿಸಿ ನಾಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ನಾಲೆಗೆ ಕಾರು ಉರುಳಿ ಬಿದ್ದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಡ್ಯದ ಅವ್ವೇರಹಳ್ಳಿ ಗ್ರಾಮದ ಬಳಿ ಈ ದುರ್ಘಟನೆ ಜರುಗಿದೆ. ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ನಾಲೆಗೆ ಸ್ವಿಫ್ಟ್ ಕಾರು ಉರುಳಿದೆ. ಇದರಿಂದ ಕಾರು ಸಂಪೂರ್ಣ ಜಖಂ ಆಗಿದೆ. ಈ ಪರಿಣಾಮ ಕಾರಿನಲ್ಲಿದ್ದ ಇಬ್ಬರ ಪೈಕಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ವ್ಯಕ್ತಿಯನ್ನು ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಸಿ ನಾಲೆಯ‌ ಹಲವು ಕಡೆ ತಡೆಗೋಡೆ ಇಲ್ಲದ ಕಾರಣ ಇಂತಹ ಘಟನೆಗಳು ನಡೆಯುತ್ತಿದೆ. ಹೀಗಿದ್ದರೂ ಸಹ ಜಿಲ್ಲಾಡಳಿತ ಈ ಬಗ್ಗೆ ಹೆಚ್ಚು ಗಮನವರಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

6. ಕಾಂಗ್ರೆಸ್ ಕಾರ್ಯಕರ್ತರನ ಬರ್ಬರ ಹತ್ಯೆ

ಕಾಂಗ್ರೆಸ್ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಕೊಂದು ಮರಕ್ಕೆ ನೇತು ಹಾಕಿರುವ ಭೀಕರ ಘಟನೆ ಗದಗದಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಪ್ರಮುಖ ಕಾರ್ಯಕರ್ತ ಡೋಣಿ ಗ್ರಾಮದ ಶರಣಪ್ಪ ಸಂದಿಗೌಡರನ್ನು ಹತ್ಯೆ ಮಾಡಿರುವ ದುಷ್ಕರ್ಮಿಗಳು ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ಜಮೀನೊಂದರಲ್ಲಿ ಮರಕ್ಕೆ ನೇತು ಹಾಕಿದ್ದಾರೆ. ಮುಂಡರಗಿ ಠಾಣೆಯ ಇನ್ಸ್‌ಪೆಕ್ಟರ್ ಮಂಜುನಾಥ್ ಕುಸುಗಲ್ಲ‌ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂದು ಡಂಬಳದಲ್ಲಿ ಕಾಂಗ್ರೆಸ್ ಪಕ್ಷದಿಂದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರನ ಹತ್ಯೆ ಕಾರ್ಯಕರ್ತರಲ್ಲಿ ಆತಂಕ ಮನೆ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com