ಬೆಂಗಳೂರು: ಬಿಹಾರ ಮೂಲದ ಬಾಲ್ಯವಿವಾಹ ಸಂತ್ರಸ್ತೆ ಆತ್ಮಹತ್ಯೆಗೆ ಶರಣು; ಪತಿ ಬಂಧನ
ಬೆಂಗಳೂರು: ಬಾಲ್ಯವಿವಾಹಕ್ಕೆ ತುತ್ತಾಗಿದ್ದ ಬಿಹಾರ ಮೂಲದ ಅಪ್ರಾಪ್ತ ಬಾಲಕಿಯೊಬ್ಬಳು ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆಯ ಪತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಸಂತ್ರಸ್ತೆಯನ್ನು ನೀಲಂ ಕುಮಾರಿ ಎಂದು ಗುರುತಿಸಲಾಗಿದ್ದು, ಮಾರ್ಚ್ 13 ರಂದು ಬೆಂಗಳೂರಿನ ಹೊರವಲಯದ ಹೆಬ್ಬಗೋಡಿ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಆಕೆಯ ಪತಿ ಬಿಹಾರ ಮೂಲದ ವಿಶಾಲ್ ಕುಮಾರ್ ಸಹಾನಿ ಎಂಬಾತನನ್ನು ಅಪ್ರಾಪ್ತಳನ್ನು ಮದುವೆಯಾಗಿ, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿಸಲಾಗಿದೆ. ಈ ಸಂಬಂಧ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಕಾರ್ಯಕರ್ತೆ ಶ್ರೀದೇವಿ ದೂರು ದಾಖಲಿಸಿದ್ದಾರೆ.
ಆರೋಪಿ ಪತಿ ಒಂದು ವರ್ಷದ ಹಿಂದೆ ಬಿಹಾರದಿಂದ ಬೆಂಗಳೂರಿಗೆ ಬಂದು ಪೇಂಟರ್ ಕೆಲಸ ಮಾಡಿಕೊಂಡಿದ್ದ. 2023ರ ಫೆಬ್ರುವರಿಯಲ್ಲಿ ನೀಲಂ ಕುಮಾರಿಯನ್ನು ಮದುವೆಯಾಗಿದ್ದ ಆತ 20 ದಿನಗಳ ಹಿಂದಷ್ಟೇ ಬೆಂಗಳೂರಿಗೆ ಕರೆತಂದಿದ್ದ. ದಂಪತಿ ತಿರುಪಾಳ್ಯ ಪ್ರದೇಶದ ಬಾಡಿಗೆ ಮನೆಯಲ್ಲಿ ವಾಸವಿದ್ದು, ಬಾಲಕಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯು ಸಂತ್ರಸ್ತೆಯ ಇಚ್ಛೆಗೆ ವಿರುದ್ಧವಾಗಿ ದೈಹಿಕ ಸಂಪರ್ಕ ಆರಂಭಿಸಿದ್ದು, ಆಕೆಯ ಮಾನಸಿಕ ಒತ್ತಡಕ್ಕೆ ಕಾರಣವಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹೆಬ್ಬಗೋಡಿ ಪೊಲೀಸರಿಗೆ ವರದಿ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ