ಪಬ್ಲಿಕ್ ಪರೀಕ್ಷೆಗೆ ಹೈಕೋರ್ಟ್ ಅಸ್ತು, ಸೋನುಗೌಡಗೆ ಪೊಲೀಸ್ ಕಸ್ಟಡಿ, ನಟ ಶಿವರಾಜ್ ಕುಮಾರ್ ಚಿತ್ರ, ಪೋಸ್ಟರ್ ನಿರ್ಬಂಧ ಕೋರಿ ಬಿಜೆಪಿ ದೂರು: ಈ ದಿನದ ಸುದ್ದಿ ಮುಖ್ಯಾಂಶಗಳು: 22-3-2024

ಪಬ್ಲಿಕ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದ್ದು, ಬಾಲಕಿ ದತ್ತು ಪ್ರಕರಣದಲ್ಲಿ ಸೋನು ಶ್ರೀನಿವಾಸ್ ಗೌಡ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ದ್ವೇಷ ಭಾಷಣ ಪ್ರಕರಣದಲ್ಲಿ ಸಂಸದ ತೇಜಸ್ವಿ ಸೂರ್ಯ, ಶೋಭ ಕರಂದ್ಲಾಜೆ ವಿರುದ್ಧ FIRಗೆ ಕೋರ್ಟ್ ತಡೆ ನೀಡಿದ್ದು, ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಪರ ಪ್ರಚಾರ ನಡೆಸುತ್ತಿರುವ ನಟ ಶಿವರಾಜ್ ಕುಮಾರ್ ವಿರುದ್ಧ ಬಿಜೆಪಿ ದೂರು ನೀಡಿದೆ.
ಪಬ್ಲಿಕ್ ಪರೀಕ್ಷೆಗೆ ಹೈಕೋರ್ಟ್ ಅಸ್ತು, ಸೋನುಗೌಡಗೆ  ಪೊಲೀಸ್ ಕಸ್ಟಡಿ, ನಟ ಶಿವರಾಜ್ ಕುಮಾರ್ ಚಿತ್ರ, ಪೋಸ್ಟರ್ ನಿರ್ಬಂಧ ಕೋರಿ ಬಿಜೆಪಿ ದೂರು: ಈ ದಿನದ ಸುದ್ದಿ ಮುಖ್ಯಾಂಶಗಳು: 22-3-2024

1. ಕರ್ನಾಟಕ ಪಬ್ಲಿಕ್ ಪರೀಕ್ಷೆಗೆ ಹೈಕೋರ್ಟ್ ಅಸ್ತು

ರಾಜ್ಯದ 5, 8, 9,11 ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ. ರಾಜ್ಯ ಪಠ್ಯ ಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಮಧ್ಯದಲ್ಲೇ ತಡೆಹಿಡಿಯಲ್ಪಟ್ಟ ಪಬ್ಲಿಕ್ ಪರೀಕ್ಷೆಯನ್ನು ಮುಂದುವರೆಸಲು ರಾಜ್ಯ ಹೈಕೋರ್ಟ್ ವಿಭಾಗೀಯ ಪೀಠ ಹಸಿರು ನಿಶಾನೆ ತೋರಿದೆ. ಮುಂದಿನ ವರ್ಷದ ಪರೀಕ್ಷೆ ವೇಳೆಗೆ ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಲು ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ್, ಹಾಗೂ ಕೆ. ರಾಜೇಶ್ ರೈ ಅವರನ್ನೊಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಈ ತೀರ್ಪು ಪ್ರಕಟಿಸಿದೆ. ಇದೇ ವೇಳೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ್ದ ಏಕಸದಸ್ಯ ಪೀಠದ ತೀರ್ಪನ್ನು ವಿಭಾಗೀಯ ಪೀಠ ರದ್ದು ಮಾಡಿದೆ. 5.8 ಮತ್ತು 9ನೇ ತರಗತಿಯ ಉಳಿದ ಪರೀಕ್ಷೆಗಳನ್ನು ಮಾರ್ಚ್ 25 ರಿಂದ ನಡೆಸುವ ಬಗ್ಗೆ ಕೋರ್ಟ್ ಗೆ ಸರ್ಕಾರ ಮಾಹಿತಿ ನೀಡಿದೆ.

2. ಬಾಲಕಿ ದತ್ತು ಪ್ರಕರಣ: ಸೋನು ಗೌಡಗೆ ಪೊಲೀಸ್ ಕಸ್ಟಡಿ

ಬಾಲಕಿಯೊಬ್ಬರನ್ನು ಕಾನೂನು ಬಾಹಿರವಾಗಿ ದತ್ತು ಪಡೆದು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ಹರಿಬಿಟ್ಟ ಆರೋಪದಡಿ ಬಂಧನಕ್ಕೊಳಗಾಗಿರುವ ರೀಲ್ಸ್ ಸ್ಟಾರ್ ಹಾಗೂ ಕಿರುತೆರೆ ನಟಿ ಸೋನು ಗೌಡ ಅವರನ್ನು ನ್ಯಾಯಾಲಯ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಬಾಲಕಿ ದತ್ತು ಸಂಬಂಧ ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಘಟಕದ ಅಧಿಕಾರಿ ನೀಡಿದ್ದ ದೂರಿನ ಅನ್ವಯ ಸೋನುಗೌಡ ಅವರನ್ನು ಗುರುವಾರ ಬೆಳಗ್ಗೆ ಬೆಂಗಳೂರಿನ ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ನೀಡಿದ್ದರು.

3. ಹೆಣ್ಣು ಭ್ರೂಣ ಹತ್ಯೆ; ವರದಿ ನೀಡದಂತೆ ಅಧಿಕಾರಿಗೆ ಕಿರುಕುಳ, ಬಿಜೆಪಿ ಕಿಡಿ

ಬೆಂಗಳೂರು ಸಮೀಪದ ಹೊಸಕೋಟೆ ಮತ್ತು ನೆಲಮಂಗಲ ಪಟ್ಟಣಗಳಲ್ಲಿ ಇತ್ತೀಚೆಗೆ ನಡೆದ ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ನೀಡದಂತೆ ಡಿಎಚ್ ಒ ಡಾ. ಸುನೀಲ್ ಕುಮಾರ್ ಅವರು ತಮ್ಮ ಮೇಲೆ ಇನ್ನಿಲ್ಲದ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್‌ಆರ್ ಮಂಜುನಾಥ್ ದೂರು ಸಲ್ಲಿಸಿದ್ದಾರೆ. ಒಂದು ವೇಳೆ ವರದಿ ನೀಡಿದರೆ ತೊಂದರೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದು, ಈ ಒತ್ತಡ ತಾಳಲಾರದೆ ಏನಾದರೂ ಪ್ರಾಣಾಪಾಯ ಸಂಭವಿಸಿದರೆ ಡಿಎಚ್ಒ ಅವರೇ ನೇರ ಹೊಣೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, ಹೆಣ್ಣು ಭ್ರೂಣ ಹತ್ಯೆ ಪ್ರಕರಣವನ್ನು ಮುಚ್ಚಿ ಹಾಕಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

4. ದ್ವೇಷ ಭಾಷಣ: ತೇಜಸ್ವಿ ಸೂರ್ಯ, ಶೋಭಾ ವಿರುದ್ಧದ FIRಗೆ ತಡೆ

ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಗೆ ಶುಕ್ರವಾರ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟಕ್ಕೆ ತಮಿಳುನಾಡಿನ ವ್ಯಕ್ತಿ ಕಾರಣ ಎಂದು ಶೋಭಾ ಕರಂದ್ಲಾಜೆ ಆರೋಪಿಸಿದ್ದರು. ಈ ಸಂಬಂಧ ಡಿಎಂಕೆ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಚುನಾವಣಾಧಿಕಾರಿಗಳ ದೂರಿನ ಮೇರೆಗೆ ಬೆಂಗಳೂರಿನ ಕಾಟನ್‌ಪೇಟೆ ಪೊಲೀಸರು ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅಲ್ಲದೆ, ಕಳೆದ ಭಾನುವಾರ ನಗರತ್ ಪೇಟೆಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಿ ಅಂಗಡಿಯವನ ಮೇಲೆ ಹಲ್ಲೆ ನಡೆಸಿದ್ದನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ತೇಜಸ್ವಿ ಸೂರ್ಯ ವಿರುದ್ಧ ಹಲಸೂರು ಗೇಟ್ ಪೊಲೀಸರು ಕೇಸ್ ದಾಖಲಿಸಿದ್ದರು.

5. ಲೋಕಸಭಾ ಚುನಾವಣೆ 2024: ನಟ ಶಿವರಾಜ್ ಕುಮಾರ್ ವಿರುದ್ಧ ದೂರು

ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅಖಾಡಕ್ಕಿಳಿದಿದ್ದು, ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಪತ್ನಿ ಪರ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ನಟ ಶಿವರಾಜ್ ಕುಮಾರ್ ವಿರುದ್ಧ ಬಿಜೆಪಿ ಒಬಿಸಿ ಯುವ ಮೋರ್ಚಾ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಸದ್ಯ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ, ಪತ್ನಿ ಪರ ಪ್ರಚಾರ ಮಾಡುತ್ತಿರುವ ನಟ ಶಿವರಾಜ್ ಕುಮಾರ್ ಅವರ ಸಿನಿಮಾ, ಭಾವಚಿತ್ರವುಳ್ಳ ಫ್ಲೆಕ್ಸ್, ಸಿನಿಮಾ ಫೋಸ್ಟರ್, ಜಾಹೀರಾತುಗಳನ್ನು ನಿಷೇಧ ಮಾಡಬೇಕು ಎಂದು ಆಗ್ರಹಿಸಿ ದೂರು ನೀಡಲಾಗಿದೆ ಎಂದು ತಿಳಿದು ಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com