
ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ವಿಡಿಯೋ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ಅವರು ಬಂಧನ ಭೀತಿ ಎದುರಿಸುತ್ತಿದ್ದು, ಗುರುವಾರ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ಹಾಸನ ಜಿಲ್ಲೆ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್ ಡಿ.ರೇವಣ್ಣ ಅವರು ಇಂದು ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಎಸ್ಐಟಿ ಈಗಾಗಲೇ ಈ ಪ್ರಕರಣ ತನಿಖೆಯನ್ನು ಚುರುಕುಗೊಳಿಸಿದ್ದು, ಮಹತ್ವದ ಮಾಹಿತಿ ಕಲೆಹಾಕುತ್ತಿದೆ. ಅಲ್ಲದೇ ವಿಚಾರಣೆಗೆ ಹಾಜರಾಗುವಂತೆ ರೇವಣ್ಣ ಮತ್ತು ಪ್ರಜ್ವಲ್ಗೆ ನೋಟಿಸ್ ಜಾರಿ ಮಾಡಿದೆ. ಇದರ ಬೆನ್ನಲ್ಲೇ ರೇವಣ್ಣ ಕೋರ್ಟ್ ಮೆಟ್ಟಿಲೇರಿರುವುದು ಕುತೂಹಲ ಮೂಡಿಸಿದೆ.
ಪ್ರಜ್ವಲ್ ರೇವಣ್ಣ ಅವರು ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಹಲವು ವಿಡಿಯೋಗಳು ಬಹಿರಂಗವಾದ ನಂತರ ಹಾಸನ ಸಂಸದರ ವಿರುದ್ಧದ ಆರೋಪಗಳ ತನಿಖೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಭಾನುವಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ ಮತ್ತು ತನಿಖೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಎಸ್‌ಐಟಿಗೆ ಸೂಚಿಸಲಾಗಿದೆ.
ಪೊಲೀಸರು ಐಪಿಸಿ ಸೆಕ್ಷನ್ 354ಎ (ಲೈಂಗಿಕ ಕಿರುಕುಳ), 354ಡಿ (ಮಹಿಳೆಗೆ ಮುಜುಗರ), 506 (ಬೆದರಿಕೆ), 509 (ಮಹಿಳೆಯರ ಮರ್ಯಾದೆಗೆ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ರೇವಣ್ಣ ಅವರನ್ನು ಎ1 ಆರೋಪಿ ಮತ್ತು ಪ್ರಜ್ವಲ್ ರೇವಣ್ಣ ಅವರನ್ನು ಎ2 ಆರೋಪಿಯನ್ನಾಗಿ ಮಾಡಿದ್ದಾರೆ.
Advertisement