ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ ಡ್ರೈವ್ ಪ್ರಕರಣದಲ್ಲಿ ನಿನ್ನೆ ವಶಕ್ಕೆ ಪಡೆದಿದ್ದ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡರನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ನಿವೇಶನವನ್ನು ಮಾರಾಟ ಮಾಡಿಕೊಡುವ ನೆಪದಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಏಪ್ರಿಲ್ 1ರಂದು ಹೊಳೆನರಸೀಪುರ ನಗರ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಹೊಳೆನರಸೀಪುರ ಗ್ರಾಮಾಂತರ ವೃತ್ತ ನಿರೀಕ್ಷಕರ ಕಛೇರಿಯಲ್ಲಿ ಸತತ ಮೂರು ಗಂಟೆಗಳ ವಿಚಾರಣೆ ನಡೆಸಿದ ಬಳಿಕ ಪೊಲೀಸರು ದೇವರಾಜೇಗೌಡರನ್ನು ಬಂಧಿಸಿದ್ದಾರೆ. ದೇವರಾಜೇಗೌಡ ವಿರುದ್ಧ ಮಹಿಳೆಯ ಮೇಲೆ ದೌರ್ಜನ್ಯ ಮತ್ತು ಹಲ್ಲೆ ಸೇರಿದಂತೆ ವಿವಿಧ ಸೆಕ್ಸನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದೇವರಾಜೇಗೌರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.
ಕೊಡಗಿನ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಬಳಿಯ ಕುಂಬಾರಗಡಿಗೆ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ನಡೆದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮೀನಾ ಕೊಲೆ ಪ್ರಕರಣದ ಆರೋಪಿಯನ್ನು ಪ್ರಕಾಶ್ ಎಂಬಾತನನ್ನು ಪೊಲೀಸರು ಇಂದು ಬಂಧಿಸಿದ್ದಾರೆ. ಎಸ್ಎಸ್ಎಲ್ಸಿ ಫಲಿತಾಂಶದ ದಿನವೇ, ಪ್ರಕಾಶ್ ಜೊತೆಗೆ ನಿಶ್ಚಯವಾಗಿದ್ದ ನಿಶ್ಚಿತಾರ್ಥ ಮುರಿದುಬಿದ್ದಿತ್ತು. ಇದರಿಂದ ಕೋಪಗೊಂಡ ಪ್ರಕಾಶ್ ಬಾಲಕಿಯ ಮನೆಗೆ ನುಗ್ಗಿ ಪೋಷಕರ ಮೇಲೆ ಹಲ್ಲೆ ಮಾಡಿ ನಂತರ ಬಾಲಕಿಯನ್ನು ಹತ್ಯೆ ಮಾಡಿ ರುಂಡ ಕತ್ತರಿಸಿ ತೆಗೆದುಕೊಂಡು ಪರಾರಿಯಾಗಿದ್ದನು. ಪೊಲೀಸರು ಹಲವು ತಂಡಗಳನ್ನು ಮಾಡಿ ಶೋಧ ಕಾರ್ಯ ನಡೆಸುತ್ತಿದ್ದರು. ನಿನ್ನೆ ಆರೋಪಿ ಪ್ರಕಾಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿತ್ತು. ಆದರೆ, ಆರೋಪಿ ಆತ್ಮಹತ್ಯೆ ಮಾಡಿಕೊಂಡಿಲ್ಲ, ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಬಂಧಿಸಲಾಗಿದೆ. ಬಾಲಕಿಯನ್ನು ಕೊಂದ ನಂತರ ಘಟನಾ ಸ್ಥಳದಿಂದ 300 ಮೀಟರ್ ದೂರದಲ್ಲಿರುವ ಮಾವಿನ ತೋಪಿನಲ್ಲಿ ಮೀನಾಳ ತಲೆಯನ್ನು ಇಟ್ಟಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
ದುಬೈ-ಮಂಗಳೂರು ವಿಮಾನದಲ್ಲಿ ಪ್ರಯಾಣದ ವೇಳೆ ಅಶಿಸ್ತಿನ ವರ್ತನೆ ತೋರಿದ್ದಕ್ಕಾಗಿ ಪ್ರಯಾಣಿಕರೊಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಭದ್ರತಾ ಸಂಯೋಜಕ ಸಿದ್ಧಾರ್ಥದಾಸ್ ಅವರು ಮೊಹಮ್ಮದ್ ಬಿಸಿ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮೇ 9ರಂದು ಮುಂಜಾನೆ ಈ ಘಟನೆ ನಡೆದಿದ್ದು, ಅದೇ ಸಂಜೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಹಮ್ಮದ್ ಕೃಷ್ಣ ಎಂಬುವರ ಬಗ್ಗೆ ಮಾಹಿತಿ ನೀಡುವಂತೆ ಸಿಬ್ಬಂದಿ ವಿವರ ಕೇಳಿದ್ದಾನೆ. ಅಲ್ಲದೆ ಅಸಂಬದ್ಧ ಪ್ರಶ್ನೆಗಳನ್ನು ಕೇಳುವ ಮೂಲಕ ಸಿಬ್ಬಂದಿಯನ್ನು ಕೆರಳಿಸಿದ್ದಾನೆ. ಅಲ್ಲದೆ ಅನಗತ್ಯವಾಗಿ ಸೇವಾ ಬಟನ್ ಅನ್ನು ಹಲವಾರು ಬಾರಿ ಒತ್ತುವ ಮೂಲಕ ಸಿಬ್ಬಂದಿಗೆ ತೊಂದರೆ ನೀಡಿದ್ದಾನೆ ಎಂದು ದೂರಲಾಗಿದೆ.
ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಕ್ರೂಸರ್ ವಾಹನ ಪಲ್ಟಿಯಾಗಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಮೂವರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ಇಂದು ನಡೆದಿದೆ. ಕೆಲಸಕ್ಕಾಗಿ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದಾಗ ಜತ್ತ ಬಳಿ ಕ್ರೂಸರ್ ಟೈರ್ ಸ್ಫೋಟಗೊಂಡು ಈ ಅಪಘಾತ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಮಹಾದೇವಿ ಚೌಗಲಾ, ಗೀತಾ ದೊಡ್ಡಮನಿ ಹಾಗೂ ಕಸ್ತೂರಿ ಮೃತಪಟ್ಟು, ಇತರ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕರ್ನಾಟಕ ಹೈಕೋರ್ಟ್ ವಕೀಲೆ ಹಾಗೂ ಕೆಎಎಸ್ ಅಧಿಕಾರಿ ಶಿವಕುಮಾರ್ ಎಂಬುವರ ಪತ್ನಿ ಚೈತ್ರಾಗೌಡ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬೆಂಗಳೂರಿನ ಸಂಜಯ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಮೃತ ಚೈತ್ರಾ ಗೌಡ ಅವರ ಸಹೋದರ ಕೊಟ್ಟ ದೂರಿನ ಆಧಾರದ ಮೇಲೆ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement