ಪ್ರಜ್ವಲ್ ರೇವಣ್ಣ ಅವರನ್ನು ಕರೆತರಲು ಎಸ್‌ಐಟಿ ವಿದೇಶಕ್ಕೆ ಹೋಗುವುದಿಲ್ಲ: ಗೃಹ ಸಚಿವ ಜಿ ಪರಮೇಶ್ವರ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಅವರನ್ನು ವಾಪಸ್ ಕರೆತರಲು ವಿದೇಶಕ್ಕೆ ಹೋಗುವುದಿಲ್ಲ ಮತ್ತು ಇಂಟರ್‌ಪೋಲ್ ಪ್ರಜ್ವಲ್ ಕುರಿತಾದ ಮಾಹಿತಿ ಹಂಚಿಕೊಳ್ಳಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಭಾನುವಾರ ಹೇಳಿದ್ದಾರೆ.
ಗೃಹ ಸಚಿವ ಜಿ ಪರಮೇಶ್ವರ
ಗೃಹ ಸಚಿವ ಜಿ ಪರಮೇಶ್ವರ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಅವರನ್ನು ವಾಪಸ್ ಕರೆತರಲು ವಿದೇಶಕ್ಕೆ ಹೋಗುವುದಿಲ್ಲ ಮತ್ತು ಇಂಟರ್‌ಪೋಲ್ ಪ್ರಜ್ವಲ್ ಕುರಿತಾದ ಮಾಹಿತಿ ಹಂಚಿಕೊಳ್ಳಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಭಾನುವಾರ ಹೇಳಿದ್ದಾರೆ.

ಇದೊಂದು ಸೂಕ್ಷ್ಮವಾಗಿರುವ ಪ್ರಕರಣವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಸಾರ್ವಜನಿಕ ಹೇಳಿಕೆಗಳನ್ನು ನೀಡುವುದು ಅಥವಾ ಮಾಹಿತಿಯನ್ನು ಹಂಚಿಕೊಳ್ಳುವ ಬಗ್ಗೆ ಅವರು ರಾಜಕೀಯ ಮುಖಂಡರಿಗೆ ಎಚ್ಚರಿಕೆ ನೀಡಿದರು.

33 ವರ್ಷದ ಪ್ರಜ್ವಲ್ ರೇವಣ್ಣ, ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿದ್ದಾರೆ. ಈ ಹಗರಣ ಇದೀಗ ರಾಜಕೀಯ ಬಿರುಗಾಳಿ ಎಬ್ಬಿಸಿದ್ದು, ಆಡಳಿತಾರೂಢ ಕಾಂಗ್ರೆಸ್‌ ಮತ್ತು ಬಿಜೆಪಿ-ಜೆಡಿಎಸ್‌ ಜಿದ್ದಾಜಿದ್ದಿಯಲ್ಲಿ ತೊಡಗಿವೆ.

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆದ ಒಂದು ದಿನದ ನಂತರ ಅಂದರೆ ಏಪ್ರಿಲ್ 27 ರಂದು ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ದಾರೆ ಎನ್ನಲಾಗಿದೆ. ಹಾಸನ ಲೋಕಸಭೆ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ಸ್ಪರ್ಧಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತಂಡ ವಿದೇಶ ಪ್ರವಾಸ ಕೈಗೊಂಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, 'ಇಲ್ಲ, ಅಂತಹ ಯಾವುದೇ ಆಯ್ಕೆ ಇಲ್ಲ. ಬ್ಲೂ ಕಾರ್ನರ್ ನೋಟಿಸ್ ನೀಡಲಾಗಿದೆ ಮತ್ತು ಇಂಟರ್‌ಪೋಲ್ ಪ್ರಜ್ವಲ್ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳುತ್ತದೆ. ಪ್ರಜ್ವಲ್ ಪತ್ತೆಯಾದ ಅಥವಾ ಗುರುತಿಸಲಾದ ಆಯಾ ದೇಶ ಇಂಟರ್‌ಪೋಲ್‌ಗೆ ಮಾಹಿತಿ ನೀಡುತ್ತಾರೆ ಮತ್ತು ನಂತರ ಸಿಬಿಐ ತಿಳಿದುಕೊಳ್ಳುತ್ತದೆ ಮತ್ತು ಅವರ ಮೂಲಕ ನಮಗೆ ತಿಳಿಯುತ್ತದೆ' ಎಂದು ಹೇಳಿದರು.

ಗೃಹ ಸಚಿವ ಜಿ ಪರಮೇಶ್ವರ
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಹೈಡ್ರಾಮಾ ಬಳಿಕ ದೇವರಾಜೇಗೌಡ ಬಂಧನ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ನಡೆಯುತ್ತಿದೆ, ತನಿಖೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ನಾವು ಯಾವುದೇ ಮಾಹಿತಿಯನ್ನು ಹಂಚಿಕೊಳ್ಳಲು ಬಯಸುವುದಿಲ್ಲ ಎಂದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರ ವಿರುದ್ಧ ಆರೋಪ ಮಾಡಿರುವ ಬಿಜೆಪಿ ಮುಖಂಡ ದೇವರಾಜೇಗೌಡ ಬಂಧನದ ಹಿಂದೆ ಷಡ್ಯಂತ್ರವಿದೆ ಎಂಬ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ, ಯಾರಾದರೂ ಏನಾದರೂ ಹೇಳಿದರೆ ಅದಕ್ಕೆ ಪ್ರತಿಕ್ರಿಯಿಸಲಾರೆವು. ಇದು ಗಂಭೀರ ಪ್ರಕರಣವಾಗಿರುವುದರಿಂದ ತನಿಖೆ ಪೂರ್ಣಗೊಳ್ಳುವವರೆಗೆ ನಾವು ಮಾಹಿತಿಯನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಗೃಹ ಸಚಿವ ಜಿ ಪರಮೇಶ್ವರ
ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಲು ಪ್ರಧಾನಿ ಮೋದಿಗೆ ಏನು ಅಡ್ಡಿಯಾಗಿದೆ?: ಕಾಂಗ್ರೆಸ್

'ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಹೇಳಿಕೆ ನೀಡುವಾಗ ಎಚ್ಚರಿಕೆಯಿಂದಿರುವಂತೆ ಸಾರ್ವಜನಿಕರು ಮತ್ತು ನಾಯಕರಿಗೆ ನಾನು ಮನವಿ ಮಾಡುತ್ತೇನೆ. ಇಲ್ಲದಿದ್ದರೆ, ಅವರು ನೀಡಿದ ಹೇಳಿಕೆಗಳ ಆಧಾರದ ಮೇಲೆ, ನಾವು ಅವರನ್ನು ತನಿಖೆಗೆ ಕರೆದು ಸಿಆರ್‌ಪಿಸಿಯ 41 ಎ ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಬೇಕಾಗಬಹುದು' ಎಂದು ಅವರು ಹೇಳಿದರು.

ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರಿಗೂ ನೋಟಿಸ್ ನೀಡಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅವರು ಮಾಜಿ ಸಿಎಂ ಆಗಿದ್ದು, ಈ ಪ್ರಕರಣವನ್ನು ಮಾಜಿ ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ನಂಬಿದ್ದೇನೆ. ಈ ಪ್ರಕರಣದ ಕುರಿತು ಯಾವುದೇ ಹೇಳಿಕೆಗಳನ್ನು ನೀಡುವ ಮೊದಲು ಅಥವಾ ಸಾರ್ವಜನಿಕ ಡೊಮೇನ್‌ನಲ್ಲಿ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುವ ಮೊದಲು, ಎಲ್ಲರೂ ಜಾಗರೂಕರಾಗಿರಬೇಕು ಮತ್ತು ಇದು ಎಲ್ಲರಿಗೂ ಅನ್ವಯಿಸುತ್ತದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com