
ಬೆಂಗಳೂರು: ಮೇ 18ರ ವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ 30 ಡಿಗ್ರಿ ಸೆಲ್ಸಿಯಸ್‌ನಿಂದ 22 ಡಿಗ್ರಿ ಸೆಲ್ಸಿಯಸ್ ತಾಪಮಾನದೊಂದಿಗೆ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೇ 17ರಿಂದ 21ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ. ಕೊಡಗು, ಹಾಸನ, ಮೈಸೂರು, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 18 ರಂದು 40-50 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.
ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ. ಮೇ 16ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಅತಿ ಹೆಚ್ಚು ಅಂದರೆ 6 ಸೆಂ.ಮೀ. ಮಳೆಯಾಗಿತ್ತು.
Advertisement