
ಬೆಂಗಳೂರು: ಹಲವು ದಿನಗಳಿಂದ ಬಿಸಿಲಿನ ಬೇಗೆಯಿಂದ ಬಳಲುತ್ತಿದ್ದ ಜನತೆಗೆ ವರುಣ ಕೃಪೆ ತೋರಿದ್ದಾನೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಬೆಳಗ್ಗೆ 5 ಗಂಟೆಯಿಂದಲೇ ಮಳೆ ಸುರಿಯುತ್ತಿದೆ.
ಮೆಜೆಸ್ಟಿಕ್, ಜಯನಗರ, ಬನಶಂಕರಿ, ಶಿವಾಜಿನಗರ, ವಿಧಾನಸೌಧ, ವಸಂತನಗರ, ಟ್ಯಾನಿರೋಡ್, ಕಬ್ಬನ್ ಪಾರ್ಕ್, ಎಂ.ಜಿ.ರಸ್ತೆಯಲ್ಲಿ ಮಳೆ ಸುರಿಯುತ್ತಿದೆ. ಮುಂದಿನ ಮೂರು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೈಸೂರು ಮತ್ತು ಬೆಂಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಆರೆಂಜ್ ಅಲರ್ಟ್ ಘೋಷಣೆ: ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ಮೇ 19ರಿಂದ ಅತಿ ಹೆಚ್ಚು ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಕೊಡಗು, ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಗಾಳಿ ಬೀಸಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ಕೂಡ ಮಳೆಯಾಗಲಿದೆ.
ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು ಮಧ್ಯಾಹ್ನ ನಂತರವೂ ಮಳೆ ಮುಂದುವರಿಯುವ ಸಾಧ್ಯತೆಯಿದೆ.
ಆರ್ ಸಿಬಿ ಪಂದ್ಯಕ್ಕೆ ಮಳೆ ಅಡ್ಡಿ?: ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ಮತ್ತು ಸಿಎಸ್ ಕೆ ನಡುವೆ ನಿರ್ಣಾಯಕ ಪಂದ್ಯ ನಡೆಯಲಿದೆ. ಆರ್ ಸಿಬಿ ಪ್ಲೇ ಆಫ್ ಪ್ರವೇಶಕ್ಕೆ ಈ ಪಂದ್ಯ ಮುಖ್ಯವಾಗಿದೆ. ಒಂದು ವೇಳೆ ಮಳೆ ರದ್ದಾದರೆ ಆರ್ ಸಿಬಿ ಐಪಿಎಲ್ ನಿಂದ ಹೊರಬೀಳಲಿದೆ. ಸಿಎಸ್ ಕೆ ಪಾಲಿಗೆ ವರವಾಗಲಿದೆ. ಹವಾಮಾನ ಇಲಾಖೆಯಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆಯಿರುವುದರಿಂದ ಪಂದ್ಯದ ಅಭಿಮಾನಿಗಳಲ್ಲಿ ಆತಂಕ ಶುರುವಾಗಿದೆ.
Advertisement