ಲೈಂಗಿಕ ದೌರ್ಜನ್ಯ. ಅತ್ಯಾಚಾರ ಪ್ರಕರಣದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧನ ವಾರಂಟ್ ಜಾರಿ ಮಾಡಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಧನ ವಾರಂಟ್ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿತ್ತು. ಪ್ರಜ್ವಲ್ ವಿರುದ್ಧದ ವಾರಂಟ್, ಅವರ ಪಾಸ್‌ಪೋರ್ಟ್ ರದ್ದುಪಡಿಸುವ ಮೊದಲ ಹೆಜ್ಜೆಯಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಲೋಕಸಭೆ ಚುನಾವಣೆ-2024 ಅಂತಿಮ ಘಟ್ಟಕ್ಕೆ ತಲುಪುತ್ತಿರುವ ಹೊತ್ತಿನಲ್ಲಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದೆ. ಈ ನಡುವೆ, ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿರುವ ವಿಪಕ್ಷ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಲು ಮುಂದಾಗಿದೆ.ರಾಜ್ಯದಲ್ಲಿ ಇತ್ತೀಚೆಗೆ ಸರಣಿ ಕೊಲೆ, ಅತ್ಯಾಚಾರ, ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಜನತೆಯ ಬದುಕಿಗೆ ಭದ್ರತೆ ಇಲ್ಲದಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಬಿಜೆಪಿ ಆರೋಪಿಸಿದ್ದು ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾಗಿದೆ. ರಾಜ್ಯ ಸರ್ಕಾರದ ಮೇಲೆ ಮಾಡಲಾಗುವ ಎಲ್ಲ ಆರೋಪಗಳ ಪಟ್ಟಿಯನ್ನು ಒಂದು ಪುಸ್ತಕ ರೂಪದಲ್ಲಿ ತರಲು ಬಿಜೆಪಿ ಸಿದ್ಧತೆ ನಡೆಸಿದೆ.
ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿನ ವೀರಭದ್ರೇಶ್ವರ ಜಾತ್ರೆಯ ರಥೋತ್ಸವದ ವೇಳೆ ಚಕ್ರದಡಿ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಮೃತರ ಪೈಕಿ ಓರ್ವನನ್ನು ಕೆವಿಜಿ ಬ್ಯಾಂಕ್ ಪಿಗ್ಮಿ ಕಲೆಕ್ಟರ್ ಮಲ್ಲನಗೌಡ ಲಿಂಗನಗೌಡರ ಎಂದು ಗುರುತಿಸಲಾಗಿದ್ದರೆ, ಮತ್ತೊಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ. ರಥೋತ್ಸವ ಆರಂಭವಾದಾಗ ಭಕ್ತರು ರಥದ ಮೇಲೆ ಎಸೆಯುವ ಒಣ ಖರ್ಜೂರ, ಬಾಳೆಹಣ್ಣುಗಳನ್ನು ಪ್ರಸಾದವೆಂದು ಪರಿಗಣಿಸಲಾಗುತ್ತದೆ, ಇದನ್ನು ಸಂಗ್ರಹಿಸಲು ಮುಂದಾದಾಗ ಜನದಟ್ಟಣೆ ಹೆಚ್ಚಾಗಿ ಈ ಘಟನೆ ನಡೆದಿದೆ.
ಬೆಂಗಾಳೂರಿನಿಂದ ಕೊಚ್ಚಿಗೆ ತೆರಳಬೇಕಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಇಂಜಿನ್‌ಗೆ ಬೆಂಕಿ ಹೊತ್ತಿಕೊಂಡು ವಿಮಾನ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿದ್ದ 179 ಪ್ರಯಾಣಿಕರು ಮತ್ತು 6 ಸಿಬ್ಬಂದಿ ಯಾವುದೇ ಅಪಾಯಗಳಿಲ್ಲದೆ ಸುರಕ್ಷಿತವಾಗಿ ಹೊರಬಂದಿದ್ದಾರೆ.
ಮೀಸಲಾತಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿರುವ ವಿಡಿಯೋದ ತಿರುಚಿದ ತುಣುಕನ್ನು ಜಾಲತಾಣಗಳಲ್ಲಿ ಹಂಚಿದ್ದ ಸಾಮಾಜಿಕ ಜಾಲತಾಣ ಬಳಕೆದಾರರೊಬ್ಬರನ್ನು ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಸಿದ್ದರಾಮಯ್ಯ ಅವರು ಭಾಷಣ ಮಾಡುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದ ಭಿಕುಮಾತ್ರೆ ಎಂಬ ಹೆಸರಿನ ಖಾತೆಯಲ್ಲಿ, ಕಾಂಗ್ರೆಸ್ ಪ್ರಣಾಳಿಕೆ ನಿರ್ದಿಷ್ಟವಾಗಿ ಮುಸ್ಲಿಮರನ್ನು ಉಲ್ಲೇಖಿಸುವುದಿಲ್ಲ ಮತ್ತು ಇದು ಎಸ್‌ಸಿ/ಎಸ್‌ಟಿಗಳನ್ನೂ ಒಳಗೊಂಡಿರುತ್ತದೆ ಎಂದು ಪ್ರತಿಪಾದಿಸುತ್ತಿದ್ದ ಪ್ರತಿಯೊಬ್ಬ ಉದಾರವಾದಿ ಮುಖಕ್ಕೆ ಇದನ್ನು ಎಸೆಯಿರಿ ಎಂದು ಬರೆಯಲಾಗಿತ್ತು. ಘಟನೆ ಸಂಬಂಧ ಕರ್ನಾಟಕ ಬಿಜೆಪಿ ಘಟಕ ರಾಜ್ಯ ಸರ್ಕಾರವನ್ನು ಟೀಕಿಸಿದೆ. ಇದು ಕಾಂಗ್ರೆಸ್ ಸರ್ಕಾರದಿಂದ ಅಧಿಕಾರದ ದುರ್ಬಳಕೆಯಾಗಿದೆ. ನಾವು ನ್ಯಾಯಾಲಯದ ಒಳಗೆ ಮತ್ತು ಹೊರಗೆ ಇದರ ವಿರುದ್ಧ ಹೋರಾಡುತ್ತೇವೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಉಡುಪಿ ಚಿಕ್ಕಮಗಳೂರು, ಬೆಂಗಳೂರು ಸೇರಿ ರಾಜ್ಯದ ಹಲವೆಡೆ, ನೆನ್ನೆಯಿಂದ ಧಾರಾಕಾರ ಮಳೆಯಾಗುತ್ತಿದೆ. ಬಿರುಗಾಳಿ ಸಹಿತ ಮಳೆಗೆ ನೆನ್ನೆ ಉಡುಪಿಯಲ್ಲಿ ವಿದ್ಯುತ್ ತಂತಿ ತುಂಡಾಗಿ ರಸ್ತೆಗೆ ಬಿದ್ದಿದ್ದು, ತಂತಿಯನ್ನು ತುಳಿದ ವ್ಯಕ್ತಿ ಇರ್ಷಾದ್ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಹಲವು ರಸ್ತೆಗಳು ಜಲಾವೃತಗೊಂಡಿವೆ.
ಪ್ರೀತಿಸಲು ನಿರಾಕರಿಸಿದ್ದಕ್ಕೆ ಕೆಲವು ದಿನಗಳ ಹಿಂದೆ ಯುವಕನೋರ್ವನಿಂದ ಹತ್ಯೆಗೀಡಾಗಿದ್ದ ಅಂಜಲಿ ಅಂಬಿಗೇರ ಸಹೋದರಿ ಯಶೋಧ ಮನನೊಂದು, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆಕೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ನೆನ್ನೆ ಹಲವು ಮಠಾಧೀಶರು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಯಶೋಧ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಕೂಡಲೆ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿತ್ತು. ಮನೆಗೆ ಹೋದ ಬಳಿಕ ಆಕೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದಲ್ಲಿ ಕರ್ತವ್ಯ ಲೋಪದ ಆರೋಪದಲ್ಲಿ ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ್ ಅವರನ್ನು ಅಮಾನತು ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ನಡೆದ ಈ ಘಟನೆಯಿಂದ 2ನೇ ಬಾರಿ ರಾಜ್ಯ ಸರ್ಕಾರ ತೀವ್ರ ಮುಜುಗರ ಎದುರಿಸುವಂತೆ ಮಾಡಿತ್ತು. ಅಂಜಲಿ ಹತ್ಯೆ ಪ್ರಕರಣದಲ್ಲಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ಹಾಗೂ ಮಹಿಳಾ ಪೇದೆಯನ್ನು ಅಮಾನತು ಮಾಡಿತ್ತು.
Advertisement