
ಬೆಳ್ತಂಗಡಿ: ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ದಿನವಿಡೀ ನಡೆದ ಹೈ ಡ್ರಮಾದ ಬಳಿಕ ರಾತ್ರಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಶರಣಾಗಿದ್ದು ವಿಚಾರಣೆ ಬಳಿಕ ಸ್ಟೇಷನ್ ಬೇಲ್ ಮೇಲೆ ಬಿಡುಗಡೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಅಕ್ರಮ ಕಲ್ಲು ಕ್ವಾರಿ ಪ್ರಕರಣದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ನಿವಾಸಕ್ಕೆ ಪೊಲೀಸರು ತೆರಳಿದ್ದಾಗ ದೊಡ್ಡ ಹೈಡ್ರಾಮವೇ ನಡೆದಿತ್ತು.
ಹರೀಶ್ ಪೂಂಜಾ ಅವರ ನಿವಾಸಕ್ಕೆ ಡಿವೈಎಸ್ಪಿ ಅರುಣ್ ನಾಗೇಗೌಡ ನೇತೃತ್ವದ ಪೊಲೀಸ್ ತಂಡ ಬೆಳಗ್ಗೆ 10 ಗಂಟೆ ಸುಮಾರಿಗೆ ಆಗಮಿಸಿತ್ತು. ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿ ಶಾಸಕರಿಗೆ ಬೆಂಬಲ ಸೂಚಿಸಿ ಒಗ್ಗಟ್ಟು ಪ್ರದರ್ಶಿಸಿದರು. ಈ ವೇಳೆ ನಡೆದ ವಾದ-ವಿವಾದದ ಬಳಿಕ ಪೊಲೀಸರು ವಾಪಸ್ ತೆರಳಿದ್ದರು.
ಶಾಸಕರ ಮನೆ ಮುಂದೆ ದಿನವಿಡೀ ಪೊಲೀಸರು ಕಾದರೂ ಕಾರ್ಯಕರ್ತರು ಶಾಸಕರನ್ನು ವಶಕ್ಕೆ ಪಡೆಯಲು ಅವಕಾಶ ನೀಡಿರಲಿಲ್ಲ. ಈ ಹಿನ್ನಲೆಯಲ್ಲಿ ಪೊಲೀಸರು ತಕ್ಷಣ ಠಾಣೆಗೆ ಹಾಜರಾಗುವಂತೆ ನೋಟೀಸ್ ನೀಡಿ ಹಿಂತಿರುಗಿದ್ದರು. ಸ್ಥಳದಲ್ಲಿದ್ದ ಸಂಸದರಾದ ನಳೀನ್ ಕುಮಾರ್ ಕಟೀಲ್, ತಾನೇ ಖುದ್ದಾಗಿ ಹರೀಶ್ ಪೂಂಜಾರನ್ನು ವಿಚಾರಣೆಗೆ ಠಾಣೆಗೆ ಕಳುಹಿಸುವುದಾಗಿ ವಿನಂತಿಸಿಕೊಂಡಿದ್ದರು. ಅದರಂತೆ ಸಂಸದರು ಹರೀಶ್ ಪೂಂಜರನ್ನು ಪೊಲೀಸರೊಂದಿಗೆ ಠಾಣೆಗೆ ಕಳುಹಿಸಿದ್ದರು. ಇದೀಗ 9.30ರ ಸುಮಾರಿಗೆ ಶಾಸಕ ಹರೀಶ್ ಪೂಂಜ ಅವರು ಸ್ವತಹ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸಿದ್ದರು.
ಸದ್ಯ ಠಾಣೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್ ಪೂಂಜಾರ ವಿಚಾರಣೆ ನಡೆಸಲಾಗಿದೆ. ಬೆಳ್ತಂಗಡಿ ಠಾಣಾ 58/2024 , ಕಲಂ:143, 147, 341, 504, 506 ಜೊತೆಗೆ 149 ಐ.ಪಿ.ಸಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಸಕ ಹರೀಶ್ ಪೂಂಜ ಅವರನ್ನು ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಸಿ, ಸ್ಟೇಶನ್ ಜಮೀನಿನಲ್ಲಿ ಬಿಡುಗಡೆ ಮಾಡಲಾಗಿರುತ್ತದೆ ಎಂದು ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
Advertisement