ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ಮೂಲಗಳಿಂದ ತಿಳಿದುಬಂದಿದೆ. ಕರ್ನಾಟಕ ಸರ್ಕಾರದ ಮನವಿಯ ಬೆನ್ನಲ್ಲೇ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು, ಎಸ್‌ಐಟಿಯಿಂದ ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದತಿಗೆ ಮನವಿ ಬಂದಿದೆ. ಹೀಗಾಗಿ ಪಾಸ್‌ಪೋರ್ಟ್ ರದ್ದತಿಗೆ ಕ್ರಮ ಕೈಗೊಳ್ಳಲಾಗುತ್ತಿದ್ದು ಕೆಲವೊಂದು ದಾಖಲೆಗಳ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದೆ. ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿ ಕೋರಿ ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರಿಗೆ 2ನೇ ಬಾರಿ ಪತ್ರ ಬರೆದಿದ್ದರು. ಅಲ್ಲದೆ, ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶಿಸುವಂತೆಯೂ ಮನವಿ ಮಾಡಿಕೊಂಡಿದ್ದರು.
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ದೇಶ ಬಿಟ್ಟು ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಭಾರತಕ್ಕೆ ವಾಪಸ್ ಆಗುವಂತೆ ಹಲವು ಬಾರಿ ಸೂಚಿಸಿದರು ಪ್ರಯೋಜನವಾಗಿಲ್ಲ. ಆದರೆ ಇದೀಗ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರೇ ಅಖಾಡಕ್ಕೆ ಇಳಿದಿದ್ದು, ಎಲ್ಲೇ ಇದ್ದರೂ ಕೂಡಲೇ ಭಾರತಕ್ಕೆ ಮರಳುವಂತೆ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಜೆಡಿಎಸ್ ಅಧಿಕೃತ ಪ್ರಕಟಣೆ ಹೊರಡಿಸಿದೆ. ಜನರು ನನ್ನ ಮತ್ತು ನನ್ನ ಕುಟುಂಬದರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ನೀನು ತಪ್ಪು ಮಾಡಿದ್ದರೆ ಅದನ್ನು ನ್ಯಾಯಾಲಯ ತೀರ್ಮಾನಿಸುತ್ತದೆ. ಹೀಗಾಗಿ ಎಲ್ಲೇ ಇದ್ದರೂ ಭಾರತಕ್ಕೆ ಬಂದು ಪೊಲೀಸರ ಮುಂದೆ ಶರಣಾಗುವಂತೆ ಸೂಚಿಸಿದ್ದಾರೆ. ಒಂದು ವೇಳೆ ಈಗಲೂ ನೀನು ಬರದಿದ್ದರೆ ನಿನ್ನನ್ನು ನಮ್ಮ ಕುಟುಂಬದಿಂದಲೇ ಹೊರಗಿಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮೈಸೂರಿನ ಎರಡು ಗ್ರಾಮಗಳಲ್ಲಿ ಕಾಲರಾ ಕಂಡು ಬಂದಿದೆ. ಕುಡಿಯಲು ನೀರು ಯೋಗ್ಯವೇ ಅಲ್ಲವೇ ಎಂಬುದನ್ನು ಪತ್ತೆ ಮಾಡದಿರುವುದು ದೊಡ್ಡ ಅಪರಾಧ. ಕಾಲರಾ ಅಥವಾ ಇನ್ನಿತರ ಸಾಂಕ್ರಾಮಿಕಗಳು ಕಾಣಿಸಿಕೊಂಡರೆ ಹಿರಿಯ ಅಧಿಕಾರಿಗಳನ್ನೇ ಜವಾಬ್ದಾರರನ್ನಾಗಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬರ ನಿರ್ವಹಣೆ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿಯ ಘಟನೆ ಸಂಭವಿಸಿದೆ. ಇದಕ್ಕೆ ಯಾರು ಜವಾಬ್ದಾರಿ? ಕುಡಿಯುವ ನೀರಿನ ಪರೀಕ್ಷೆ ನಿತ್ಯವೂ ಆಗಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳೇ ಇದಕ್ಕೆ ಹೊಣೆ. ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಲಾಗುತ್ತದೆ ಎಂದರು.
ಹುಬ್ಬಳ್ಳಿಯ ಅಂಜಲಿ ಅಂಬಿಗೇರ್ ಕೊಲೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯ ಎಂಟು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿದೆ. ಪ್ರಕರಣ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಆರೋಪಿ ಗಿರೀಶ್ನನ್ನು ಇಂದು ಹುಬ್ಬಳ್ಳಿಯ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಿದ್ದು 15 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಆದರೆ ಆರೋಪಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗೇಶ್ ನಾಯ್ಕ್ ಅವರು, ಎಂಟು ದಿನ ಮಾತ್ರ ಸಿಐಡಿ ವಶಕ್ಕೆ ನೀಡಿ ಆದೇಶಿಸಿದ್ದಾರೆ. ಸಿಐಡಿ ವಿಚಾರಣೆ ವೇಳೆ ಆರೋಪಿ ವಿಶ್ವ ತಪ್ಪೊಪ್ಪಿಕೊಂಡಿದ್ದು, ಅಂಜಲಿಯನ್ನು ನನ್ನ ಜೊತೆ ಮೈಸೂರಿಗೆ ಬಾ ಎಂದು ಕರೆದೆ. ಆಕೆ ಬರಲಿಲ್ಲ. ಹೀಗಾಗಿ ಕೊಲೆ ಮಾಡಿದೆ ಎಂದು ಹೇಳಿದ್ದಾನೆ.
ಬೆಂಗಳೂರಿನ ಪ್ರತಿಷ್ಠಿತ ಮೂರು ಹೋಟೆಲ್‌ಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಮಧ್ಯರಾತ್ರಿ 2 ಗಂಟೆಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿತ್ತು. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಒಟೆರಾ ಹೋಟೆಲ್ ಸೇರಿದಂತೆ ನಗರದ ಮೂರು ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿತ್ತು. ಗುರುವಾರ ಬೆಳಗ್ಗೆ ಹೋಟೆಲ್ ಸಿಬ್ಬಂದಿ ಮೇಲ್ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಬಂದಿರುವುದು ಬೆಳಕಿಗೆ ಬಂದಿದೆ. ಇ-ಮೇಲ್ ನೋಡುತ್ತಿದ್ದಂತೆ ಸ್ಥಳೀಯ ಪೊಲೀಸರಿಗೆ ಮಾಹಿತಿ ರವಾನಿಸಿದರು. ಅದರಂತೆ ಸ್ಥಳಕ್ಕೆ ಬಂದ ಪೊಲೀಸರು ಸೂಕ್ಷ್ಮವಾಗಿ ಪರಿಶೀಲಿಸಿ ಇದೊಂದು ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಎಂದು ಹೇಳಿದರು.
Advertisement