
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿನ ಅವ್ಯವಸ್ಥೆ ಖಂಡಿಸಿ ಮೇ 28ರಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಬೆಂಗಳೂರು ಎದುರಿಸುತ್ತಿರುವ ಬಿಕ್ಕಟ್ಟನ್ನು ಎತ್ತಿ ಹಿಡಿಯಲು ಬಿಜೆಪಿ ಪ್ರತಿ ವಾರ್ಡ್‌ನಲ್ಲೂ ಪ್ರತಿಭಟನೆ ನಡೆಸಲಿದೆ. ನಗರದ ರಸ್ತೆಗಳೆಲ್ಲವೂ ಬಂದ್ ಆಗಿದ್ದು, ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ತೆರಿಗೆ ಕಟ್ಟುವ ಜನರಿದ್ದಾರೆ. ಹೊಸ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬೆಂಗಳೂರಿನ ಅಭಿವೃದ್ಧಿಗೆ ಒಂದು ರೂಪಾಯಿ ಅನುದಾನ ನೀಡಿಲ್ಲ ಎಂದು ದೂರಿದರು.
ಭಾರೀ ಮಳೆಯ ಸಂದರ್ಭದಲ್ಲಿಯೂ ಸಹ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ತಾವು ಸಿದ್ಧರಾಗಿರುವುದಾಗಿ ಆಯುಕ್ತರು ಹೇಳುತ್ತಾರೆ. ಆದರೆ, ಹೇಳಿಕೆ ಕೇವಲ ಭಾಷಣವಾಗಿ ಉಳಿದಿದೆ. ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೆಯೇ ಉಳಿದಿವೆ. ಸರ್ಕಾರ ಆಸ್ತಿ ಮತ್ತು ವಾಹನ ನೋಂದಣಿ ತೆರಿಗೆಯನ್ನು ಹೆಚ್ಚಿಸಿದೆ. ಆದರೆ ಅದು ಬೆಂಗಳೂರಿನ ಜನರಿಗೆ ಸಹಾಯ ಆಗುತ್ತಿಲ್ಲ. ರಸ್ತೆಗಳು ಗುಂಡಿಗಳಿಂದ ಕೂಡಿದ್ದು, ಕಸ ನಿರ್ವಹಣೆಯೂ ಪರಿಣಾಮಕಾರಿಯಾಗಿ ಆಗುತ್ತಿಲ್ಲ. ಬೆಂಗಳೂರಿನಲ್ಲಿ ಗರಿಷ್ಠ ಸಂಖ್ಯೆಯ ಸಚಿವರಿದ್ದರೂ ನಗರದ ಅಭಿವೃದ್ಧಿ ಬಗ್ಗೆ ಯಾರೂ ತಲೆ ಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದರು.
ಬೆಂಗಳೂರಿನ ಜನತೆಗೆ ನ್ಯಾಯ ದೊರಕಿಸಿಕೊಡಲು ಪ್ರತಿಭಟನೆ ನಡೆಸಲಾಗುತ್ತಿದೆ. ಇದು ಕೇವಲ ರಾಜಕೀಯ ಉದ್ದೇಶಕ್ಕಾಗಿ ನಡೆಸುತ್ತಿರುವ ಪ್ರತಿಭಟನೆಯಲ್ಲ. ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ರೀತಿಯಲ್ಲಿ ಕಾರ್ಯತಂತ್ರ ರೂಪಿಸಲಾಗಿದೆ. ಬೆಂಗಳೂರಿನ ಶಾಸಕರು, ಮಾಜಿ ಶಾಸಕರು ಮತ್ತು ಕಾರ್ಪೊರೇಟರ್‌ಗಳ ಸಭೆಯಲ್ಲಿ ನಗರ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರವಾಗಿ ಚರ್ಚಿಸಲಾಯಿತು ಎಂದು ವಿಜಯೇಂದ್ರ ಹೇಳಿದ್ದಾರೆ.
Advertisement