ಮಟ್ಕಾ ಆಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಆರೋಪಿ ಆದಿಲ್ ಎಂಬಾತ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿರುವ ಘಟನೆ ದಾವಣಗೆರೆಯ ಚನ್ನಗಿರಿಯಲ್ಲಿ ವರದಿಯಾಗಿದೆ. ಆರೋಪಿ ಸಾವನ್ನು ಲಾಕ್ ಅಪ್ ಡೆತ್ ಎಂದು ಆರೋಪಿಸಿರುವ ಆತನ ಸಂಬಂಧಿಕರು ಉದ್ವೇಗಕ್ಕೊಳಗಾಗಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಿ, ಠಾಣೆಯೊಳಗೆ ನುಗ್ಗಿ, ಪೀಠೋಪಕರಣಗಳನ್ನು ಧ್ವಂಸ ಮಾಡಿ ವಾಹನಗಳಿಗೆ ಹಾನಿಯುಂಟುಮಾಡಿದ್ದಾರೆ. ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಘಟನೆಯಲ್ಲಿ 11 ಮಂದಿ ಪೊಲೀಸರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಯುವಕನ ಸಾವು ಲಾಕಪ್ ಡೆತ್ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೃತ ಯುವಕನಿಗೆ ಮೂರ್ಛೆ ರೋಗ ಇತ್ತು. ಅದರಿಂದ ಆತ ಮೃತ ಪಟ್ಟಿದ್ದಾನೆ. ಆದರೆ, ಎಫ್ಐಆರ್ ಇಲ್ಲದೆ ಪೊಲೀಸರು ಠಾಣೆಗೆ ಕರೆ ತಂದಿದ್ದು ತಪ್ಪು. ಈ ತಪ್ಪಿಗಾಗಿ ಡಿವೈಎಸ್ ಪಿ, ಇನ್ಸ್ ಪೆಕ್ಟರ್ ನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಪರಮೇಶ್ವರ್, ಠಾಣೆಗೆ ಕರೆತಂದು 7 ನಿಮಿಷದೊಳಗೆ ಆರೋಗ್ಯದಲ್ಲಿ ಏರುಪೇರು ಆಗಿ ಆದಿಲ್ ಮೃತಪಟ್ಟಿದ್ದಾನೆ ಹೊರತು ಲಾಕ್ ಅಪ್ ಡೆತ್ ಅಲ್ಲ ಮರಣೋತ್ತರ ಪರೀಕ್ಷೆಯಲ್ಲಿ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದ್ದಾರೆ.
ಚನ್ನಗಿರಿ ಪೊಲೀಸ್ ಠಾಣೆಯಲ್ಲಿನ ಘಟನೆಗೆ ರಾಜ್ಯ ಕಾಂಗ್ರೆಸ್ ಪಕ್ಷವೇ ಹೊಣೆ ಎಂದು ವಿಪಕ್ಷ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮುಸ್ಲಿಂ ವೋಟ್ ಬ್ಯಾಂಕ್ ಓಲೈಕೆ ರಾಜ್ಯವನ್ನು ಅರಾಜಕತೆಯತ್ತ ಕೊಂಡೊಯ್ಯುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯಪಾಲರು ಈ ಕೂಡಲೇ ಮಧ್ಯ ಪ್ರವೇಶಿಸಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಸರ್ಕಾರದಿಂದ ವರದಿ ಪಡೆಯಲಿ ಎಂದು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಮೇ 31 ರಂದು ನೈರುತ್ಯ ಮುಂಗಾರು ಮಳೆ ಕೇರಳ ಮೂಲಕ ರಾಜ್ಯ ಪ್ರವೇಶಿಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟು ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳು ಭೀಕರ ಬರಗಾಲ ಎದುರಿಸಿದ್ದವು. ಕರ್ನಾಟಕ ರಾಜ್ಯದ ಕರಾವಳಿ ಭಾಗಕ್ಕೆ ಮುಂಗಾರು ಮಾರುತಗಳು ಜೂನ್ 2 ಅಥವಾ 3ಕ್ಕೆ ಪ್ರವೇಶ ಮಾಡುವ ನೀರಿಕ್ಷೆ ಇದೆ. ಮೇ 31ರವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ 40-50 ಕಿಮೀ ವೇಗದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ.
ರಾಜಧಾನಿ ಬೆಂಗಳೂರಿನಲ್ಲಿನ ಅವ್ಯವಸ್ಥೆ ಖಂಡಿಸಿ ಮೇ 28ರಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ನಗರದ ರಸ್ತೆಗಳೆಲ್ಲವೂ ಬಂದ್ ಆಗಿದ್ದು, ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ತೆರಿಗೆ ಕಟ್ಟುವ ಜನರಿದ್ದಾರೆ. ಹೊಸ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬೆಂಗಳೂರಿನ ಅಭಿವೃದ್ಧಿಗೆ ಒಂದು ರೂಪಾಯಿ ಅನುದಾನ ನೀಡಿಲ್ಲ, ರಸ್ತೆಗಳು ಗುಂಡಿಗಳಿಂದ ಕೂಡಿದ್ದು, ಕಸ ನಿರ್ವಹಣೆಯೂ ಪರಿಣಾಮಕಾರಿಯಾಗಿ ಆಗುತ್ತಿಲ್ಲ. ಬೆಂಗಳೂರಿನಲ್ಲಿ ಗರಿಷ್ಠ ಸಂಖ್ಯೆಯ ಸಚಿವರಿದ್ದರೂ ನಗರದ ಅಭಿವೃದ್ಧಿ ಬಗ್ಗೆ ಯಾರೂ ತಲೆ ಕೆಡಿಸಿಕೊಂಡಿಲ್ಲ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.
ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ಸಂಬಂಧ ಎನ್‌ಐಎ 5 ನೇ ಆರೋಪಿಯನ್ನು ಬಂಧಿಸಿದೆ. ಹುಬ್ಬಳ್ಳಿ ನಿವಾಸಿ ಶೋಯೆಬ್ ಅಹ್ಮದ್ ಮಿರ್ಜಾ ಅಲಿಯಾಸ್ ಛೋಟುನನ್ನು ಎನ್ಐಎ ಬಂಧಿಸಿದೆ. ಈ ಹಿಂದೆ ಲಷ್ಕರ್-ಎ-ತೈಬಾ(ಎಲ್‌ಇಟಿ) ಭಯೋತ್ಪಾದನೆ ಸಂಚು ಪ್ರಕರಣದಲ್ಲಿ ಶೋಹೆಬ್ ಅಹ್ಮದ್ ಶಿಕ್ಷೆಗೊಳಗಾಗಿದ್ದ ಎಂದು ತನಿಖಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. ಎನ್ಐಎ ಅಧಿಕಾರಿಗಳು ಮೂರು ದಿನಗಳ ಹಿಂದಷ್ಟೇ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ರಾಜ್ಯಗಳ 11 ಸ್ಥಳಗಳಲ್ಲಿ ದಾಳಿ ನಡೆಸಿತ್ತು.
Advertisement