
ಬೆಂಗಳೂರು: ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಬಿಟ್‌ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ)ದ ಅಧಿಕಾರಿಗಳು ಬುಧವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪೊಲೀಸ್ ಅಧಿಕಾರಿಯನ್ನು ಬಂಧಿಸಿದ್ದಾರೆ.
ಅಧಿಕಾರ ದುರ್ಬಳಕೆ ಹಾಗೂ ಸಾಕ್ಷ್ಯನಾಶ ಆರೋಪದಡಿ ಇನ್ಸ್‌ಪೆಕ್ಟರ್ ಚಂದ್ರಾಧರ್ ಅವರನ್ನು ಎಸ್ಐಟಿ ಪೊಲೀಸರು ಸುಧೀರ್ಘ ವಿಚಾರಣೆ ನಡೆಸಿ ಇಂದು ಬಂಧಿಸಿದ್ದಾರೆ.
ಸೈಬರ್ ಕ್ರೈಂ ಠಾಣೆ ಇನ್ಸ್‌ಪೆಕ್ಟರ್ ಆಗಿದ್ದ ಚಂದ್ರಾಧರ್, ಈ ಹಿಂದೆ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಿದ್ದರು. ಈ ಪ್ರಕರಣದಲ್ಲಿ ರಾಜಕಾರಣಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಮೂವರು ಪೊಲೀಸರು ಸೇರಿದಂತೆ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ.
ಪ್ರಕರಣ ಸಂಬಂಧ ಅಂತಾರಾಷ್ಟ್ರೀಯ ಮಟ್ಟದ ಹ್ಯಾಕರ್ ಆಗಿರುವ ಶ್ರೀಕೃಷ್ಣ ಆಲಿಯಾಸ್ ಶ್ರೀಕಿಯನ್ನು 2020ರಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದರು. ಈತನ ವಿರುದ್ಧ ಕೆಂಪೇಗೌಡನಗರ, ಅಶೋಕನಗರ ಹಾಗೂ ಸೈಬರ್ ಕ್ರೈಂ ಪೊಲೀಸ್ ಠಾಣೆ ಸೇರಿದಂತೆ ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು. ಸೈಬರ್ ಕ್ರೈಂ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಚಂದ್ರಾಧರ್ ಅವರು ಶ್ರೀಕಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದರು.
Advertisement