
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಹಣ ವರ್ಗಾವಣೆಗೆ ಎಸ್‌ಟಿ ಕಲ್ಯಾಣ ಇಲಾಖೆ ಸಚಿವ ಬಿ ನಾಗೇಂದ್ರ ಅವರು ಮೌಖಿಕ ಸೂಚನೆ ನೀಡಿದ್ದರೇ ಎಂಬುದು ಸಿಐಡಿ ತನಿಖೆಯಿಂದ ಬಹಿರಂಗವಾಗಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಬುಧವಾರ ಹೇಳಿದ್ದಾರೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಹಣ ದುರುಪಯೋಗವಾಗಿದೆ ಎಂಬ ಆರೋಪದ ಮೇಲೆ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ ಮತ್ತು ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
ಚಂದ್ರಶೇಖರನ್ ಅವರು ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ನನ್ನ ಸಾವಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿದೇರ್ಶಕ ಜೆ ಪದ್ಮನಾಭ, ಅಕೌಂಟ್ ವ್ಯವಸ್ಥಾಪಕ ಪರಶುರಾಂ ದುರ್ಗಣ್ಣನವರ್, ಯೂನಿಯನ್ ಬ್ಯಾಂಕ್‌ನ ಮುಖ್ಯ ವ್ಯವಸ್ಥಾಪಕರಾದ ಶುಚಿಸ್ಮಿತ ಕಾರಣ. ವಾಲ್ಮೀಕಿ ನಿಗಮದ ಅನುದಾನದಲ್ಲಿ 80 ರಿಂದ 85 ಕೋಟಿ ರೂ. ಗಳನ್ನು ನಿಯಮ ಬಾಹಿರವಾಗಿ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಚಂದ್ರಶೇಖರನ್ ಅವರು ತಮ್ಮ ಡೆತ್ ನೋಟ್‌ನಲ್ಲಿ ನಿಗಮದ ಮೊತ್ತವನ್ನು ವರ್ಗಾಯಿಸಲು ಸಂಬಂಧಿಸಿದ ಸಚಿವರಿಂದ ಮೌಖಿಕ ಆದೇಶವನ್ನು ಸ್ವೀಕರಿಸಿದ್ದಾಗಿ ಮತ್ತು ಸುಮಾರು 87 ಕೋಟಿ ರೂಪಾಯಿ ದುರ್ಬಳಕೆಯಾಗಿರುವುದಾಗಿ ತಿಳಿಸಿದ್ದಾರೆ.
ಸಚಿವರ ಸೂಚನೆ ಮೇರೆಗೆ ಹಣ ವರ್ಗಾವಣೆ ಮಾಡಲಾಗಿದೆಯೇ ಸೇರಿದಂತೆ ಎಲ್ಲ ಆಯಾಮಗಳಲ್ಲಿ ತನಿಖಾಧಿಕಾರಿಗಳು ತನಿಖೆ ನಡೆಸುತ್ತಾರೆ. ಕೆಎಸ್ ಈಶ್ವರಪ್ಪ ವಿರುದ್ಧದ ಪ್ರಕರಣದಲ್ಲಿ ಅವರ ಹೆಸರನ್ನು ನೇರವಾಗಿ ಉಲ್ಲೇಖಿಸಲಾಗಿದೆ. ಈ ಪ್ರಕರಣದಲ್ಲಿ ಸಚಿವರ (ನಾಗೇಂದ್ರ) ಹೆಸರನ್ನು ನೇರವಾಗಿ ಉಲ್ಲೇಖಿಸಿಲ್ಲ. ತನಿಖೆ ಮುಗಿಯುವವರೆಗೆ ನಾವು ಕಾಯಬೇಕು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ವಿರುದ್ಧ ನೇರ ಆರೋಪ ಮಾಡಿದ ನಂತರ ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್ ಆಗಿನ ಸಚಿವ ಈಶ್ವರಪ್ಪ ಅವರ ರಾಜೀನಾಮೆಗೆ ಒತ್ತಾಯಿಸಿತ್ತು.
ಐಟಿ ಕಂಪನಿಗಳ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿರುವ ಆರೋಪವಿದ್ದು, ಈ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವರು ಹೇಳಿದರು.
Advertisement