
ನವದೆಹಲಿ: ಸೆಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಜೂನ್ 2ರ ನಂತರ ಹಾಸನ ಸಂಸದ ಪ್ರಜ್ವಲ್ ರೇವಣ್ಣರ ಪಾಸ್ ಪೋರ್ಟ್ ರದ್ಧತಿ ವಿಚಾರದ ಕುರಿತು ನಿರ್ಧಾರ ತೆಗೆದುಕೊಳ್ಳುವುದಾಗಿ ಕೇಂದ್ರ ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡುವ ಕುರಿತು ಜೂನ್ 2 ರ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ವಿದೇಶಾಂಗ ಸಚಿವಾಲಯ ತಿಳಿಸಿದ್ದು, ಈ ಬಗ್ಗೆ ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ್‌ಜೈಸ್ವಾಲ್ ಮಾಹಿತಿ ನೀಡಿದ್ದಾರೆ.
ಪಾಸ್‌ಪೋರ್ಟ್ ರದ್ದು ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮನವಿಯ ಹಿನ್ನೆಲೆಯಲ್ಲಿ ನಿಮ್ಮ ಪಾಸ್‌ಪೋರ್ಟ್ ಏಕೆ ರದ್ದು ಮಾಡಬಾರದು? ಎಂದು ಪ್ರಶ್ನಿಸಿ ಮೇ 23 ರಂದು ಪ್ರಜ್ವಲ್ ರೇವಣ್ಣ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಈ ಬಗ್ಗೆ ಸ್ಪಷ್ಟನೆ ನೀಡಲು 10 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಅಲ್ಲದೆ ಹತ್ತು ದಿನಗಳ ಒಳಗಾಗಿ ಸಮರ್ಪಕ ಉತ್ತರ ನೀಡದಿದ್ದಲ್ಲಿ ಜೂನ್ 2 ರ ಬಳಿಕ ಮುಂದಿನ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಇನ್ನು ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 6ರವರೆಗೆ ಎಸ್ ಐಟಿ ಕಸ್ಟಡಿಗೆ ಒಪ್ಪಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ. ಹೆಚ್ಚಿನ ವಿಚಾರಣೆಗೆ 15 ದಿನಗಳ ಕಾಲ ತನ್ನ ವಶಕ್ಕೆ ನೀಡುವಂತೆ ಎಸ್ ಐಟಿ ಕೇಳಿತ್ತು, ವಾದ-ವಿವಾದ ಆಲಿಸಿದ ನ್ಯಾಯಾಲಯ 1 ವಾರ ಕಸ್ಟಡಿಯಲ್ಲಿರಿಸಿಕೊಳ್ಳಲು ಅವಕಾಶ ನೀಡಿದೆ.
Advertisement