ಸೆಕ್ಸ್ ಹಗರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಕೋರ್ಟ್ SIT ವಶಕ್ಕೆ ನೀಡಿದ್ದು, ಭವಾನಿ ರೇವಣ್ಣರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖಾ ಮಟ್ಟದ ತನಿಖೆ ನಡೆಸಲಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಚಿವ ಬಿ ನಾಗೇಂದ್ರ ಅವರ ರಾಜಿನಾಮೆಗೆ ಒತ್ತಡ ಹೆಚ್ಚಾಗಿದೆ.
ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಜೆಡಿಎಸ್‌ನಿಂದ ಅಮಾನತುಗೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 6ರವರೆಗೆ ಎಸ್ ಐಟಿ ಕಸ್ಟಡಿಗೆ ಒಪ್ಪಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ.
ಲೋಕಸಭೆ ಚುನಾವಣೆ ಮುಗಿಸಿ ಏಪ್ರಿಲ್ 27ರಂದು ಜರ್ಮನಿಗೆ ತೆರಳಿದ್ದ 33 ವರ್ಷದ ಪ್ರಜ್ವಲ್ ರೇವಣ್ಣ ನಿನ್ನೆ ಮಧ್ಯರಾತ್ರಿ ಜರ್ಮನಿಯ ಮ್ಯೂನಿಚ್ ನಿಂದ ಬೆಂಗಳೂರಿಗೆ ವಾಪಸ್ಸಾದ ಕೂಡಲೇ ವಿಮಾನ ನಿಲ್ದಾಣದಲ್ಲಿಯೇ ಬಂಧಿಸಿ ವಿಚಾರಣೆಗಾಗಿ ಸಿಐಡಿ ಕಚೇರಿಗೆ ಕರೆದೊಯ್ಯಲಾಯಿತು.
ಇಂದು ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಕೋರ್ಟ್ ಮುಂದೆ ವಿಚಾರಣೆಗೆ ಹಾಜರುಪಡಿಸಲಾಯಿತು. ಹೆಚ್ಚಿನ ವಿಚಾರಣೆಗೆ 15 ದಿನಗಳ ಕಾಲ ತನ್ನ ವಶಕ್ಕೆ ನೀಡುವಂತೆ ಎಸ್ ಐಟಿ ಕೇಳಿತ್ತು, ವಾದ-ವಿವಾದ ಆಲಿಸಿದ ನ್ಯಾಯಾಲಯ 1 ವಾರ ಕಸ್ಟಡಿಯಲ್ಲಿರಿಸಿಕೊಳ್ಳಲು ಅವಕಾಶ ನೀಡಿದೆ.
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್. ಗೌಡರ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. 50 ವರ್ಷ ವಯಸ್ಸಿನ ಗೌಡರ್ ಮೇ 26 ರಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಬರೆದಿಟ್ಟಿದ್ದಾರೆ. ಡೆತ್‌ನೋಟ್'ನಲ್ಲಿ ಕೆಆರ್‌ಐಡಿಎಲ್ ಕಾಮಗಾರಿ ನಡೆಸಿದ ಹಣ ಬಂದಿಲ್ಲ ಎಂಬುದು ಸೇರಿ ಇನ್ನಿತರ ಕಾರಣಗಳನ್ನೂ ಪ್ರಸ್ತಾಪಿಸಿದ್ದಾರೆ.
ಇದನ್ನು ಆಧರಿಸಿ ಗೌಡರ್ ಪತ್ನಿ ವಸಂತಕುಮಾರಿ ಸಂತೇಬೆನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ಬೆನ್ನಲ್ಲೇ ಕೆಆರ್‌ಐಡಿಎಲ್ ಸಂಸ್ಥೆ ಸೇರಿ 5 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಮಧ್ಯೆ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಗುತ್ತಿಗೆದಾರ ಆತ್ಮಹತ್ಯೆ ಕುರಿತು ಇಲಾಖಾ ಮಟ್ಟದ ತನಿಖೆಗೆ ಆದೇಶಿಸಿದ್ದು, ಹಿರಿಯ ಅಧಿಕಾರಿಗಳ ಸಮಿತಿ ರಚಿಸಿ ವರದಿ ನೀಡುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಎಸಿಎಸ್ ಗೆ ಸೂಚನೆ ನೀಡಿದ್ದಾರೆ.
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ವಜಾ ಗೊಳಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿನ ಸಂತ್ರಸ್ತ ಮಹಿಳೆಯ ಅಪಹರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಇಂದು ಜೂನ್ 3ಕ್ಕೆ ಮುಂದೂಡಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ಮಹಿಳೆಯನ್ನು ಅಪಹರಿಸಿದ ಆರೋಪದ ಮೇಲೆ ಎಚ್.ಡಿ.ರೇವಣ್ಣ ವಿರುದ್ಧ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 29 ರಂದು ಎಚ್.ಡಿ.ರೇವಣ್ಣ ಅವರನ್ನು ಎಸ್ ಐಟಿ ಬಂಧಿಸಿತ್ತು. ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅವರಿಗೆ ಮೇ 13ರಂದು ಷರತ್ತುಬದ್ಧ ಜಾಮೀನು ನೀಡಿದೆ.
ಈ ಮಧ್ಯೆ, ವಿಶೇಷ ನ್ಯಾಯಾಲಯ ನೀಡಿರುವ ಜಾಮೀನು ಪ್ರಶ್ನಿಸಿ ವಿಶೇಷ ತನಿಖಾ ತಂಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಶುಕ್ರವಾರ ಆರೋಪಿ ಶಾಸಕ ಹೆಚ್ ಡಿ ರೇವಣ್ಣ ಅವರಿಗೆ ತುರ್ತು ನೊಟೀಸ್ ಜಾರಿ ಮಾಡಿದೆ. ಅಪಹರಣ ಆರೋಪದಡಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣದ ಕಾನೂನುಬದ್ಧತೆಯನ್ನು ಪ್ರಶ್ನಿಸಿ ರೇವಣ್ಣ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಎಸ್‌ಐಟಿ ಮತ್ತು ದೂರುದಾರರಿಗೆ ನ್ಯಾಯಾಲಯ ನೊಟೀಸ್ ಜಾರಿ ಮಾಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಚಿವ ಬಿ ನಾಗೇಂದ್ರ ಅವರ ವಿರುದ್ಧ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಅವರ ರಾಜೀನಾಮೆ ಕುರಿತಾದ ಊಹಾಪೋಹಗಳ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಸ್ತವಾಂಶವನ್ನು ಪರಿಶೀಲಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಶುಕ್ರವಾರ ಹೇಳಿದ್ದಾರೆ. ಹಗರಣ ನಡೆದಿರುವುದನ್ನು ಒಪ್ಪಿಕೊಂಡಿರುವ ಗೃಹ ಸಚಿವ ಜಿ ಪರಮೇಶ್ವರ, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ರಾಜೀನಾಮೆ ನೀಡಬೇಕೇ ಬೇಡವೇ ಎಂಬುದನ್ನು ಸಿಎಂ ನಿರ್ಧರಿಸಲಿದ್ದಾರೆ ಎಂದರು. ವಾಲ್ಮೀಕಿ ನಿಗಮದ ಬ್ಯಾಂಕ್ ಖಾತೆಯಿಂದ ಅನಧಿಕೃತವಾಗಿ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿದ್ದು, ಭಾನುವಾರ ಸಂಜೆ ಅಕೌಂಟ್ಸ್ ಸೂಪರಿಂಟೆಂಡೆಂಟ್ ಚಂದ್ರಶೇಖರ್ ಅವರು, ಹಣ ದುರುಪಯೋಗದ ವಿವರವಾದ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.
Advertisement