ಬೆಂಗಳೂರು: ಬೆಂಗಳೂರು ಪೊಲೀಸರು ದಾಖಲಿಸಿರುವ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ವಜಾಗೊಳಿಸುವಂತೆ ಕೋರಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಸಹಚರ ಸುರೇಶ್ ಬಾಬು ಕರ್ನಾಟಕ ಹೈಕೋರ್ಟ್‌ನ ಮೊರೆ ಹೋಗಿದ್ದಾರೆ.
ಕುಮಾರಸ್ವಾಮಿ ಮತ್ತು ಅವರ ಸಂಗಡಿಗರು ಸಲ್ಲಿಸಿರುವ ಅರ್ಜಿಯಲ್ಲಿ, ಪೊಲೀಸ್ ಮಹಾನಿರೀಕ್ಷಕ ಎಂ.ಚಂದ್ರಶೇಖರ್ ಅವರ ದೂರು "ದುರುಪಯೋಗ" ಮತ್ತು "ರಾಜಕೀಯ ಉದ್ದೇಶದಿಂದ" ಕೂಡಿದೆ ಎಂದು ಪ್ರತಿಪಾದಿಸಿದ್ದಾರೆ.
ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಕುಮಾರಸ್ವಾಮಿ ಅವರು ಸರ್ಕಾರಿ ನೌಕರನಿಗೆ ಕರ್ತವ್ಯ ನಿರ್ವಹಿಸದಂತೆ ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ದೂರಿನಲ್ಲಿ ಆರೋಪಿಸಿದ್ದಾರೆ.
ಕುಮಾರಸ್ವಾಮಿ ಆರೋಪಿಯಾಗಿರುವ ಗಣಿಗಾರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ನೇತೃತ್ವವನ್ನು ವಹಿಸಿರುವುದಾಗಿ ದೂರುದಾರರು ತಿಳಿಸಿದ್ದಾರೆ.
ಕುಮಾರಸ್ವಾಮಿ 2006 ರಿಂದ 2008 ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕಾನೂನು ಉಲ್ಲಂಘಿಸಿ ಬಳ್ಳಾರಿ ಜಿಲ್ಲೆಯ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ (ಎಸ್‌ಎಸ್‌ವಿಎಂ) ಗೆ 550 ಎಕರೆ ಗಣಿಗಾರಿಕೆ ಗುತ್ತಿಗೆಯನ್ನು ಅಕ್ರಮವಾಗಿ ಅನುಮೋದಿಸಿದ್ದಾರೆ ಎಂಬ ಆರೋಪಕ್ಕೆ ಈ ತನಿಖೆ ಸಂಬಂಧಿಸಿದೆ.
"ಎಸ್‌ಐಟಿ, ತನಿಖಾ ವರದಿಯನ್ನು ಸಿದ್ಧಪಡಿಸಿದ ನಂತರ ಮತ್ತು ಆರೋಪಿಯನ್ನು (ಕುಮಾರಸ್ವಾಮಿ) ವಿಚಾರಣೆಗೆ ಒಳಪಡಿಸಲು ಸಾಕಷ್ಟು ಪುರಾವೆಗಳು ಮತ್ತು ವಸ್ತುಗಳನ್ನು ಕಂಡುಹಿಡಿದ ನಂತರ, 21/11/2023 ರಂದು ಆರೋಪಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ಕೋರಿ ಕರ್ನಾಟಕ ರಾಜ್ಯಪಾಲರಾದ ಘನತೆವೆತ್ತ ಅವರಿಗೆ ಪತ್ರ ಬರೆದಿತ್ತು". ಎಂದು ಚಂದ್ರಶೇಖರ್ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
Advertisement