ಬೆಂಗಳೂರು: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ದೂರಿನ ಮೇರೆಗೆ ದಾಖಲಿಸಿಕೊಳ್ಳಲಾದ ಪ್ರಕರಣದಲ್ಲಿ ಈ ಆದೇಶ ಹೊರಡಿಸಿದೆ.
ಬೆಂಗಳೂರಿನ ಸಂಜಯ್‌ನಗರ ಪೊಲೀಸ್ ಠಾಣೆಯಲ್ಲಿ ಎಚ್‌ಡಿಕೆ ವಿರುದ್ಧ ಎಫ್ಐಆರ್ ದಾಖಲಾಗಿತ್ತು.ಈ ಪ್ರಕರಣ ರದ್ದು ಕೋರಿ ಎಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಸುರೇಶ್ ಬಾಬು ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈ ತೀರ್ಪು ನೀಡಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕುಮಾರಸ್ವಾಮಿ ಅವರಿಗೆ ನೀಡಿರುವ ನಿರೀಕ್ಷಣಾ ಜಾಮೀನು ರದ್ದು ಕೋರಿ ಹಾಲಿ ಮತ್ತು ಮಾಜಿ ಸಂಸದರು/ಶಾಸಕರ ವಿರುದ್ಧದ ಮೊಕದ್ದಮೆಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯ ವಿಚಾರಣೆಗೆ ಮುಂದಿನ ಕ್ರಮ ಕೈಗೊಳ್ಳದಂತೆ ನ್ಯಾಯಾಧೀಶರು ಪ್ರಾಸಿಕ್ಯೂಷನ್‌ಗೆ ತಡೆ ನೀಡಿದ್ದಾರೆ. ಬುಧವಾರ ಚನ್ನಪಟ್ಟಣದ ಅಂಬಡಾಹಳ್ಳಿಯಲ್ಲಿ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ನಡೆಸಿದರು.ತಮ್ಮ ವಿರುದ್ಧದ ಎಫ್‌ಐಆರ್ ಹಾಸ್ಯಾಸ್ಪದ ಮತ್ತು ದುರುದ್ದೇಶಪೂರಿತವಾಗಿದೆ ಎಂದು ಹೇಳಿದ ಕುಮಾರಸ್ವಾಮಿ, ಕೋರ್ಟ್ ಮೂಲಕ ಉತ್ತರ ನೀಡುವುದಾಗಿ ತಿಳಿಸಿದ್ದರು.
ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಹಸ್ಮತ್ ಪಾಷಾ ಅವರು, ಬೆಂಗಳೂರಿನ ಸಂಜಯ್ ನಗರ ಪೊಲೀಸರು ದಾಖಲಿಸಿರುವ ಪ್ರಕರಣದ ಆಧಾರದಲ್ಲಿ 10 ವರ್ಷಗಳ ಹಿಂದೆ ಕುಮಾರಸ್ವಾಮಿ ಅವರಿಗೆ ನೀಡಿದ್ದ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಪ್ರಾಸಿಕ್ಯೂಷನ್ ಅರ್ಜಿ ಸಲ್ಲಿಸಿತ್ತು. ಸಾಯಿ ವೆಂಕಟೇಶ್ವರ ಮಿನರಲ್ಸ್‌ಗೆ ಮುಖ್ಯಮಂತ್ರಿಯಾಗಿದ್ದಾಗ ಕುಮಾರಸ್ವಾಮಿ ಗಣಿ ಗುತ್ತಿಗೆ ನೀಡಿದ್ದರು.
ಅರ್ಜಿದಾರ ಕುಮಾರಸ್ವಾಮಿ ಕೇವಲ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದಾರೆ, ಆದರೆ ಅವರು ವಿರೋಧ ಪಕ್ಷದಲ್ಲಿರುವುದರಿಂದ ಅವರನ್ನು ಗುರಿಯಾಗಿಸಲಾಗಿದೆ. ಚಂದ್ರಶೇಖರ್ ಅವರ ದೂರಿನ ಮೇರೆಗೆ ಮ್ಯಾಜಿಸ್ಟ್ರೇಟ್ ನೀಡಿದ ಆದೇಶದ ನಂತರ ನವೆಂಬರ್ 4 ರಂದು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪಾಷಾ ಹೇಳಿದರು. ಪೊಲೀಸರನ್ನು ಕಳಿಸಿ ತಮ್ಮನ್ನು ಬಂಧಿಸಲು ಯತ್ನಿಸುತ್ತಿದ್ದಾರೆ. 10 ವರ್ಷದ ಹಿಂದಿನ ನಿರೀಕ್ಷಣಾ ಜಾಮೀನು ರದ್ದುಪಡಿಸಲು ಯತ್ನಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಪರ ಹಿರಿಯ ವಕೀಲ ಹಷ್ಮತ್ ಪಾಷಾ ವಾದ ಮಂಡಿಸಿದ್ದರು. ಅರ್ಜಿದಾರರ ವಿರುದ್ಧ ಅಕ್ಟೋಬರ್ 11 ರಂದು ದೂರು ದಾಖಲಾಗಿದೆ ಎಂದು ಪಾಷಾ ವಾದಿಸಿದರು ಮತ್ತು ರಾಜ್ಯ ಸರ್ಕಾರ ಅಕ್ಟೋಬರ್ 21 ರಂದು ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿತು. ಬೆದರಿಕೆ ಆರೋಪದ ಮೇಲೆ ನವೆಂಬರ್ 5 ರಂದು ತರಾತುರಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ವಾದಿಸಿದ್ದಾರೆ.
ಈ ವಾದ ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠ, ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿದ. ಅಲ್ಲದೇ ಎಫ್ಐಆರ್ ಆಧರಿಸಿ ಹಳೆಯ ನಿರೀಕ್ಷಣಾ ಜಾಮೀನು ರದ್ದುಪಡಿಸುವಂತಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ನಿರ್ಬಂಧಿಸಿದೆ. ಬಲವಂತದ ಕ್ರಮ ಕೈಗೊಳ್ಳುವುದಿಲ್ಲವೆಂಬ SPP ಹೇಳಿಕೆಯನ್ನೂ ಸಹ ಹೈಕೋರ್ಟ್ ದಾಖಲಿಸಿಕೊಂಡಿದೆ. ಆಂಧ್ರಪ್ರದೇಶ ಮೂಲದ ಜಂತಕಲ್ ಮೈನಿಂಗ್ ಕಂಪನಿಯ ಸಹವರ್ತಿ ಸಂಸ್ಥೆಯಾಗಿರುವ ಶ್ರೀ ಸಾಯಿ ವೆಂಕಟೇಶ್ವರ್ ಮಿನರಲ್ಸ್ ಕಂಪನಿಗೆ ಆಗ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ಎನ್‌ಇಬಿ ರೇಂಜ್‌ನಲ್ಲಿ 550 ಎಕರೆ ಪ್ರದೇಶದಲ್ಲಿ ಗಣಿಗಾರಿಕೆ ಲೀಸ್ ನೀಡಲು ಪರವಾನಗಿಗೆ ಅನುಮೋದನೆ ಕಡತಕ್ಕೆ ಸಹಿ ಹಾಕಿದ್ದರು. 2007ರ ಅಕ್ಟೋಬರ್ 5ರಂದು ಸಹಿ ಹಾಕಲಾಗಿತ್ತು. ಈ ವೇಳೆ ಸಲ್ಲಿಕೆಯಾಗಿದ್ದ 29 ಅರ್ಜಿಗಳ ಪೈಕಿ ಕೊನೆಯದಾಗಿ ಸಲ್ಲಿಕೆಯಾಗಿದ್ದ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಅರ್ಜಿಯನ್ನು ಸರ್ಕಾರ ನಿಯಮಾವಳಿ ಉಲ್ಲಂಘಿಸಿ ಅನುಮೋದಿಸಿ ಮಂಜೂರು ಮಾಡಲಾಗಿತ್ತು ಎಂಬುದು ಕುಮಾರಸ್ವಾಮಿ ಅವರ ಮೇಲಿರುವ ಆರೋಪವಾಗಿದೆ.
Advertisement