ಹೈದರಾಬಾದ್: ನೆರೆಯ ತೆಲಂಗಾಣದಲ್ಲಿ ಕರ್ನಾಟಕ ಸಾರಿಗೆ ಇಲಾಖೆಯ ಬಸ್ ಮೇಲೆ ಕಲ್ಲು ತೂರಾಟ ನಡೆದಿದ್ದು, ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ತೆಲಂಗಾಣ ರಾಜಧಾನಿ ಹೈದರಾಬಾದ್ ನಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಹೈದರಾಬಾದ್ to ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಕರ್ನಾಟಕ ಸಾರಿಗೆ ಇಲಾಖೆಯ ಐಶಾರಾಮಿ ಅಂಬಾರಿ ಉತ್ಸವ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ನಿನ್ನೆ ರಾತ್ರಿ 10:45ರ ಸುಮಾರಿನಲ್ಲಿ ಹೈದರಾಬಾದ್ ನಿಂದ ಬೆಂಗಳೂರಿನತ್ತ ಹೊರಟಿದ್ದ KA57F5380 ಸಂಖ್ಯೆಯ ಬಸ್ ಚಲಿಸುತ್ತಿರುವಾಗಲೇ ಹೈದರಬಾದ್ ನ ಶಂಶಾಬಾದ್ ಬಳಿ ದುಷ್ಕರ್ಮಿಗಳು ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಬಸ್ಸಿನ ಕಿಟಕಿ ಗಾಜಿಗೆ ಹಾನಿಯಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ವಿಚಾರ ತಿಳಿಯುತ್ತಲೇ ಸ್ಥಳಕ್ಕಾಗಮಿಸಿದ ಶಂಶಾಬಾದ್ ಪೊಲೀಸರು ಪರಿಶೀಲನೆ ನಡೆಸಿದ್ದು, ತನಿಖೆ ನಡೆಸಿದ್ದಾರೆ. ಅಂತೆಯೇ ಬಸ್ ನಲ್ಲಿದ್ದ ಪ್ರಯಾಣಿಕರು ಘಟನೆಯಿಂದ ಆಘಾತಕ್ಕೊಳಗಾಗಿದ್ದು, ಕೂಡಲೇ ತೆಲಂಗಾಣ ಪೊಲೀಸರು ಮತ್ತು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಭವಿಷ್ಯದಲ್ಲಿ ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
Advertisement