ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಜೆಡಿಎಸ್ ಪಕ್ಷದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಜಾಮೀನು ಅರ್ಜಿ ವಜಾಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ನವೆಂಬರ್ 11ರಂದು ಅಂದರೆ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್
ಕಳೆದ ಅಕ್ಟೋಬರ್ 21ರಂದು ಪ್ರಜ್ವಲ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಪ್ರಜ್ವಲ್ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು.
ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ಸೈಬರ್ ಸೆಲ್‌ನಲ್ಲಿ ದಾಖಲಾಗಿದ್ದ 2 ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮೂರು ಅರ್ಜಿಗಳನ್ನು ವಜಾಗೊಳಿಸಿತ್ತು.
ಏನಿದು ಪ್ರಕರಣ?
ಪ್ರಜ್ವಲ್ ರೇವಣ್ಣ ತಂದೆ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ಕಳೆದ ಏಪ್ರಿಲ್ 28ರಂದು ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ದಾಖಲಿಸಿದ್ದರು. 2015 ರಲ್ಲಿ ಹೆಚ್.ಡಿ.ರೇವಣ್ಣ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ನೀಡಿದ್ದರು.
ತಂದೆ ಮತ್ತು ಮಗನ ವಿರುದ್ಧ ಸಂತ್ರಸ್ತೆ ಗಂಭೀರ ಆರೋಪಗಳನ್ನು ಮಾಡಿದ್ದರು. ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ದೂರು ದಾಖಲಾಗಿತ್ತು. ಎಫ್‌ಐಆರ್‌ನಲ್ಲಿ ಹೆಚ್.ಡಿ.ರೇವಣ್ಣ ಎ1 ಮತ್ತು ಪ್ರಜ್ವಲ್ ರೇವಣ್ಣ ಎ2 ಆರೋಪಿಯಾಗಿದ್ದಾರೆ. ಇವರ ವಿರುದ್ಧ 354 A, 354 D, 509 ಅಡಿ ಪ್ರಕರಣ ದಾಖಲಾಗಿತ್ತು.
Advertisement