ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಟನೆಯ ಮುಂಬರುವ ಬಹುನಿರೀಕ್ಷಿತ ಚಿತ್ರ ʼಟಾಕ್ಸಿಕ್ʼ ಸಿನಿಮಾ ತಂಡಕ್ಕೆ ಕಾನೂನು ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಹೆಚ್ ಎಂಟಿ ಕಾರ್ಖಾನೆ ಬಳಿ ಬೃಹತ್ ಸೆಟ್ ನಿರ್ಮಾಣ ಮಾಡಿ ತಿಂಗಳುಗಳ ಕಾಲ ಸಿನಿಮಾದ ಶೂಟಿಂಗ್ ಮಾಡಲಾಗಿತ್ತು. ಆದರೆ ಸಿನಿಮಾ ತಂಡ, ಸೆಟ್ ನಿರ್ಮಾಣ ಮಾಡಲು ಮರಗಳನ್ನು ಕಡಿದು ನಾಶ ಮಾಡಿದೆ ಎಂಬ ಆರೋಪ ಕೇಳಿ ಬಂದಿತ್ತು.
ಮರಗಳನ್ನು ಕಡಿದ ಆರೋಪದಲ್ಲಿ ನ್ಯಾಯಾಲಯದ ಸೂಚನೆಯಂತೆ ‘ಟಾಕ್ಸಿಕ್’ ಸಿನಿಮಾದ ನಿರ್ಮಾಣ ಸಂಸ್ಥೆಗಳಾದ ಕೆವಿಎನ್ ಹಾಗೂ ಯಶ್ರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಹಾಗೂ ಹೆಚ್ಎಂಟಿ ಲಿಮಿಟೆಡ್ ವಿರುದ್ಧವೂ ಸಹ ಎಫ್ಐಆರ್ ದಾಖಲಾಗಿದೆ. ಅರಣ್ಯ ಕಾಯ್ದೆಯ ಅಡಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಆರೋಪಿಗಳಿಗೆ ನೊಟೀಸ್ ನೀಡಿ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.
ಚಿತ್ರ ಬಿಡುಗಡೆಗೆ ಅಡ್ಡಿ ಇಲ್ಲ: ಈ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಹೆಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಸ್ಯಾಟೆಲೈಟ್ ಚಿತ್ರಗಳಿಂದ ಕಂಡುಬರುತ್ತಿದೆ. ಮರ ಯಾರು ಕಡಿದಿದ್ದಾರೆ ಎಂದು ಗೊತ್ತಿಲ್ಲ, ತನಿಖೆಯಾಗುತ್ತಿದೆ, ಅರಣ್ಯ ಇಲಾಖೆ ಕಾಯ್ದೆಯನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆದರೆ ಇದರಿಂದ ಟಾಕ್ಸಿಕ್ ಚಿತ್ರ ಬಿಡುಗಡೆಗೆ ಯಾವುದೇ ಸಮಸ್ಯೆಯಿಲ್ಲ ಎಂದಿದ್ದಾರೆ.
ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ. ಈ ಬಗ್ಗೆ ಹೆಚ್ಎಂಟಿ ಇದು ತಮ್ಮ ಜಾಗ ಅಲ್ಲ ಈ ಜಾಗವು ಕೆನರಾ ಬ್ಯಾಂಕ್ ಒಡೆತನದಲ್ಲಿದೆ ಎಂದು ಸ್ಪಷ್ಟನೆ ನೀಡಿತ್ತು.
Advertisement