ಹಾವೇರಿ: ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದೆ. ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಹೆದರಿದ ಹಾವೇರಿ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಹಿರೇಕೆರೂರು ಉಪವಿಭಾಗದ ಸಹಾಯಕ ಇಂಜಿನಿಯರ್ ಕಾಶಿನಾಥ್ ಭಜಂತ್ರಿ 9 ಲಕ್ಷ ರೂ. ನಗದು ಹಣವನ್ನು ಗಂಟು ಕಟ್ಟಿ ಹೊರಗೆಸೆದಿದ್ದಾರೆ.
ಇಂದು ಬೆಳಿಗ್ಗೆ ಲೋಕಾಯುಕ್ತ ಎಸ್ ಪಿ ಎಂ.ಎಸ್ ಕೌಲಾಪುರೆ ನೇತೃತ್ವದ ತಂಡ ಬಸವೇಶನಗರದ 1ನೇ ಕ್ರಾಸ್‌ನಲ್ಲಿರುವ ಭಜಂತ್ರಿ ನಿವಾಸದ ಮೇಲೆ ದಾಳಿ ನಡೆಸಿತ್ತು. ಆಗ ಈ ಘಟನೆ ನಡೆದಿದೆ. ಲೋಕಾಯುಕ್ತ ಅಧಿಕಾರಿಗಳು ಮನೆಯ ಮುಂದೆ ಬಂದು ಬಾಗಿಲು ಬಡಿದಾಗ ಭಜಂತ್ರಿ ಗಾಬರಿಗೊಂಡಿದ್ದು ಕೂಡಲೇ ಕೋಣೆಗೆ ತೆರಳಿ 9 ಲಕ್ಷ ರೂ. ನಗದು ಗಂಟು ಕಟ್ಟಿ ಶೌಚಾಲಯದ ಕಿಟಕಿ ಮೂಲಕ ಹೊರಗೆಸೆದಿದ್ದಾರೆ. ಇದನ್ನು ಗಮನಿಸಿದ ಲೋಕಾಯುಕ್ತ ಅಧಿಕಾರಿಗಳು ಆ ಹಣವನ್ನು ವಶಪಡಿಸಿಕೊಂಡಿದ್ದಾರೆ.
ಇನ್ನು ಅಷ್ಟೇ ಅಲ್ಲದೆ ಭಜಂತ್ರಿ 2 ಲಕ್ಷ ರೂಪಾಯಿ ನಗದನ್ನು ಹಾಸಿಗೆಯಲ್ಲಿ ಸುತ್ತಿ ಇಟ್ಟಿದ್ದರು. ಮನೆಯಲ್ಲಿದ್ದ 14 ಲಕ್ಷ ರೂಪಾಯಿ ನಗದು ಹಣವನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂದು ಕೌಲಾಪುರೆ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕ ಕಮಲ್ ರಾಜ್ ಮನೆ ಮೇಲೆ ದಾಳಿ ವೇಳೆಯಲ್ಲಿ ರೂ. 1 ಲಕ್ಷ ನಗದು, ಇನ್ನೋವಾ ಕಾರು ಹಾಗೂ ಆಸ್ತಿಯ ದಾಖಲೆ ಪತ್ತೆಯಾಗಿವೆ. ಅನುಕಂಪದ ಆಧಾರದ ಮೇಲೆ ದ್ವಿತೀಯ ದರ್ಜೆ ಸಹಾಯಕರಾಗಿ ನೇಮಕಗೊಂಡಿದ್ದ ಕಮಲ್ ರಾಜ್ ಹಲವು ಬಡ್ತಿ ಪಡೆದು ಸಹಾಯಕ ನಿರ್ದೇಶಕರಾಗಿದ್ದರು. ಚಿತ್ರದುರ್ಗ ಹಾಗೂ ದಾವಣೆಗೆರೆಯಲ್ಲಿ ಮನೆ, ಮೂರು ನಿವೇಶನ ಸೇರಿ ಇತರೆ ಆಸ್ತಿಯನ್ನು ಲೋಕಾಯುಕ್ತ ಅಧಿಕಾರಿಗಳು ಪತ್ತೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಧಾರವಾಡದ ಕೆಐಎಡಿಬಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಗೋವಿಂದಪ್ಪ ಭಜಂತ್ರಿ ಅವರ ಸಂಬಂಧಿಕರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಅಧಿಕಾರಿಯಾಗಿರುವ ವೆಂಕಟೇಶ್ ಎಂಬುವರ ಬೆಳಗಾವಿ ನಿವಾಸದ ಮೇಲೂ ದಾಳಿ ನಡೆದಿದ್ದು, ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ. ವೆಂಕಟೇಶ್ ಅವರು ಈ ಹಿಂದೆ ಬೆಳಗಾವಿಯಲ್ಲಿ ಕಾರ್ಯನಿರ್ವಹಿಸಿದ್ದರು.
ಬೀದರ್ ಜಿಲ್ಲಾ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ರವೀಂದ್ರ ರೊಟ್ಟಿ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರ ರೇಡ್ ನಡೆದಿದೆ. ಬೀದರ್, ಬೆಂಗಳೂರು ನಿವಾಸ, ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದ್ದು, ದಾಖಲೆ ಹಾಗೂ ಇನ್ನಿತರ ಮಾಹಿತಿ ಕಲೆಹಾಕಲಾಗಿದೆ.
Advertisement