ಸರ್ಕಾರಿ ಕಾಮಗಾರಿ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಲ್ಲ; HDKಗೆ ಕರಿಯಾ ಅಂದಿದ್ದಕ್ಕೆ ಕ್ಷಮೆಯಾಚಿಸುತ್ತೇನೆ; Toxic ನಿರ್ಮಾಪಕರಿಗೆ ಕಾನೂನು ಸಂಕಷ್ಟ! ಇವು ಇಂದಿನ ಪ್ರಮುಖ ಸುದ್ದಿಗಳು 12-11-24

ಸರ್ಕಾರಿ ಕಾಮಗಾರಿ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಲ್ಲ; HDKಗೆ ಕರಿಯಾ ಅಂದಿದ್ದಕ್ಕೆ ಕ್ಷಮೆಯಾಚಿಸುತ್ತೇನೆ; Toxic ನಿರ್ಮಾಪಕರಿಗೆ ಕಾನೂನು ಸಂಕಷ್ಟ! ಇವು ಇಂದಿನ ಪ್ರಮುಖ ಸುದ್ದಿಗಳು 12-11-24

1. ಸರ್ಕಾರಿ ಕಾಮಗಾರಿ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಶೇ.4ರಷ್ಟು ಮೀಸಲಾತಿ ನೀಡಲ್ಲ

ನಾಗರೀಕ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ವಿಚಾರ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಿದ್ದು ಮುಸ್ಲಿಮರಿಗೆ ಸರ್ಕಾರದ ಕಾಮಗಾರಿಗಳಲ್ಲಿ ಮೀಸಲಾತಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಇದು ಹೊಸ ಸುಳ್ಳು ಎಂದು ಹೇಳಿದೆ. ಮೀಸಲಾತಿ ನೀಡುವಂತೆ ಮುಸ್ಲಿಂ ಶಾಸಕರ ನಿಯೋಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (2ನೇ ತಿದ್ದುಪಡಿ) ಕಾಯ್ದೆಗೆ ತಿದ್ದುಪಡಿ ತರಲು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಗೆ ಸೂಚನೆ ನೀಡಿದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಈ ವಿಚಾರ ವಿವಾದಕ್ಕೆ ದಾರಿ ಮಾಡಿಕೊಟ್ಟಿತ್ತು.

2. ಭ್ರಷ್ಟ ಅಧಿಕಾರಿಗಳಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ; ಕೋಟ್ಯಾಂತರ ಆಸ್ತಿ ಪಾಸ್ತಿ ಪತ್ತೆ

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಇಂದು ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದು ರಾಜ್ಯದ 11 ಕಡೆಗಳಲ್ಲಿ ಏಕಕಾಲಕ್ಕೆ ಅಧಿಕಾರಿಗಳ ಮನೆ ಹಾಗೂ ಕಚೇರಿ ದಾಳಿ ಮಾಡಿ ಅಪಾರ ಪ್ರಮಾಣದ ಆಸ್ತಿಪಾಸ್ತಿಗಳನ್ನು ಪತ್ತೆ ಹಚ್ಚಿದ್ದಾರೆ. ಬೀದರ್ ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ರವೀಂದ್ರ ರೊಟ್ಟೆ, ದಾವಣಗೆರೆ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕ ಕಮಲ್ ರಾಜ್, ಹಾವೇರಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಉವಿಲ್ ಭಾಗದ ಎಇಇ ಕಾಶೀನಾಥ್ ಭಜಂತ್ರಿ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಕಾಶೀನಾಥ್ ಭಜಂತ್ರಿ ಮನೆಯಲ್ಲಿ 14 ಲಕ್ಷ ರೂಪಾಯಿ ನಗದ ಹಣ ವಶಪಡಿಸಿಕೊಂಡಿದ್ದಾರೆ. ಕಮಲ್ ರಾಜ್ ಮನೆಯಲ್ಲಿ 1 ಲಕ್ಷ ನಗದು, ಇನ್ನೋವಾ ಕಾರು ಹಾಗೂ ಆಸ್ತಿಯ ದಾಖಲೆ ಪತ್ತೆಯಾಗಿದ್ದು ಇನ್ನುಳಿದಂತೆ ಅಧಿಕಾರಿಗಳು ನಿರಂತರವಾಗಿ ಪರಿಶೀಲನೆ ನಡೆಸಿದ್ದಾರೆ.

3. ಎಚ್ ಡಿ ಕುಮಾರಸ್ವಾಮಿ ಅವರನ್ನು 'ಕರಿಯಾ' ಅಂದಿದ್ದಕ್ಕೆ ಕ್ಷಮೆಯಾಚಿಸುತ್ತೇನೆ

ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರನ್ನು 'ಕರಿಯಾ' ಎಂದು ಕರೆದಿದ್ದ ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ತಮ್ಮ ಹೇಳಿಕೆಯಿಂದ ಯಾರಿಗಾದರು ನೋವಾಗಿದ್ದರೆ, ಅದಕ್ಕೆ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ. ಜಮೀರ್ ಅವರ ಹೇಳಿಕೆಯನ್ನು NDA ಜನಾಂಗೀಯ ನಿಂದನೆ ಎಂದು ಟೀಕಿಸಿದ್ದು ಪ್ರತಿಭಟನೆ ನಡೆಸಿವೆ. ಮತ್ತೊಂದೆಡೆ ರಾಜ್ಯ ಒಕ್ಕಲಿಗರ ಸಂಘವೂ ಸಹ ಕುಮಾರಸ್ವಾಮಿ ಬೆನ್ನಿಗೆ ನಿಂತಿದ್ದು, ಜಮೀರ್ ಅಹಮ್ಮದ್ ಖಾನ್ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು, ಅವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿದೆ. ತಮ್ಮ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್, ಮೊದಲಿನಿಂದಲೂ ಪ್ರೀತಿಯಿಂದ ಕುಮಾರಸ್ವಾಮಿ ಅವರನ್ನು ಕರಿಯಣ್ಣ ಎಂದು ಕರೆಯುತ್ತಿದ್ದೆ. ಅವರು ನನ್ನನ್ನ ಕುಳ್ಳ ಎಂದು ಕರೆಯುತ್ತಿದ್ದರು ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.

4. ಯಶ್‌ ನಟನೆಯ Toxic ಚಿತ್ರಕ್ಕೆ ಕಾನೂನು ಸಂಕಷ್ಟ

ರಾಕಿಂಗ್ ಸ್ಟಾರ್ ಯಶ್‌ ನಟನೆಯ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ ಸಿನಿಮಾ ತಂಡಕ್ಕೆ ಕಾನೂನು ಸಂಕಷ್ಟ ಎದುರಾಗಿದೆ. ಬೆಂಗಳೂರಿನ HMT ಕಾರ್ಖಾನೆ ಬಳಿ ಬೃಹತ್ ಸೆಟ್ ನಿರ್ಮಾಣ ಮಾಡಿ ಸಿನಿಮಾದ ಶೂಟಿಂಗ್ ಮಾಡಲಾಗಿತ್ತು. ಆದರೆ ಸಿನಿಮಾ ತಂಡ, ಸೆಟ್ ನಿರ್ಮಾಣ ಮಾಡಲು ಮರಗಳನ್ನು ಕಡಿದು ನಾಶ ಮಾಡಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ನ್ಯಾಯಾಲಯದ ಸೂಚನೆಯಂತೆ ಟಾಕ್ಸಿಕ್ ಸಿನಿಮಾ ನಿರ್ಮಾಣ ಸಂಸ್ಥೆಗಳಾದ ಕೆವಿಎನ್ ಹಾಗೂ ಯಶ್ರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಹಾಗೂ ಹೆಚ್ಎಂಟಿ ಲಿಮಿಟೆಡ್ ವಿರುದ್ಧವೂ ಅರಣ್ಯ ಕಾಯ್ದೆಯ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಮರ ಯಾರು ಕಡಿದಿದ್ದಾರೆ ಎಂದು ಗೊತ್ತಿಲ್ಲ, ತನಿಖೆಯಾಗುತ್ತಿದೆ. ಅರಣ್ಯ ಇಲಾಖೆ ಕಾಯ್ದೆಯನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆದರೆ ಇದರಿಂದ ಟಾಕ್ಸಿಕ್ ಚಿತ್ರದ ಬಿಡುಗಡೆಗೆ ಯಾವುದೇ ಸಮಸ್ಯೆಯಿಲ್ಲ ಎಂದಿದ್ದಾರೆ.

5. ಅಪಘಾತ ಇಬ್ಬರು ಸಾವು

ಬೆಂಗಳೂರಿನ ಯಲಹಂಕ ಮೇಲ್ಸೇತುವೆ ಮೇಲೆ ರಸ್ತೆ ಬದಿ ನಿಂತು ಜಗಳವಾಡುತ್ತಿದ್ದವರಿಗೆ ವೋಲ್ವೋ ಬಸ್ ಡಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನೋವಾ ಕಾರಿಗೆ ಸಿಮೆಂಟ್ ಲಾರಿ ಡಿಕ್ಕಿ ಹೊಡೆದಿತ್ತು. ಹೀಗಾಗಿ ಇಬ್ಬರೂ ಚಾಲಕರು ರಸ್ತೆಯ ಬಲಭಾಗದಲ್ಲಿ ನಿಂತು ಜಗಳವಾಡುತ್ತಿದ್ದಾಗ ವೇಗವಾಗಿ ಬಂದ ಬಿಎಂಟಿಸಿ ಬಸ್ ಲಾರಿಗೆ ಡಿಕ್ಕಿ ಹೊಡೆದಿದ್ದು ನಂತರ ಚಾಲಕರ ಮೇಲೆ ಹರಿದಿದೆ. ಪರಿಣಾಮ ಟ್ರಕ್ ಚಾಲಕ ಕುಲದೀಪ್ ಕುಮಾರ್ ಹಾಗೂ ಕಾರು ಚಾಲಕ ಜಗದೀಶ್ ಸಾವನ್ನಪ್ಪಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com