ಮಂಗಳೂರು: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ 8 ಮಕ್ಕಳು ಹಾಗೂ ಚಾಲಕ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಮುಚ್ಚಿಲಪದವು ಎಂಬಲ್ಲಿ ಈ ಘಟನೆ ನಡೆದಿದ್ದು, ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.
ಈ ವೇಳೆ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಮತ್ತು ಚಾಲಕನಿಗೆ ಗಂಭೀರ ಗಾಯವಾಗಿದ್ದು, ಎಂಟು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನು ಮಂಗಳೂರು ಮತ್ತು ಬಂಟ್ವಾಳದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾರಿನ ಚಾಲಕ ಮುಳಿಯ ರಾಮಣ್ಣ ಅವರ ತಲೆಗೆ ತೀವ್ರ ಪೆಟ್ಟಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಅಪಘಾತಕ್ಕೆ ಕಾರಿನ ಬ್ರೇಕ್ ಫೇಲ್ ಆಗಿದ್ದೇ ಕಾರಣ ಎನ್ನಲಾಗಿದ್ದು, ವಾಹನವು ಪೆರುವಾಯಿಯಿಂದ ವಿಟ್ಲದಲ್ಲಿರುವ ಶಾಲಾ ಬಸ್ ನಿಲ್ದಾಣದಲ್ಲಿ ಮಕ್ಕಳನ್ನು ಬಿಡಲು ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Advertisement